ಕರ್ನಾಟಕ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ: ದೆಹಲಿಗೆ ತೆರಳಿದ ಡಿ.ಕೆ.ಶಿವಕುಮಾರ್

ಬೆಂಗಳೂರು,ಜ.6-ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.

ವರಿಷ್ಠರೊಂದಿಗೆ ಮಾತುಕತೆ ನಡೆಸಲು ಡಿಕೆಶಿ ದೆಹಲಿಗೆ ತೆರಳಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಲ್ಲಿ ಡಿಕೆಶಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ.

ಇದಕ್ಕೂ ಮೊದಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೂ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಹಿಮ್ಮೆಟ್ಟಿಸುವುದು ಡಿಕೆಶಿಯ ಮೊದಲ ಸವಾಲು ಆಗಿದೆ. ಹೀಗಾಗಿ ಡಿಕೆಶಿ, ಸಿದ್ದರಾಮಯ್ಯ ಅವರ ಮನೆಗೆ ಭೇಟಿ ನೀಡಿದ್ದರು.

ಡಿ.ಕೆ.ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ಅವರ ಬೆಂಬಲ ಅಗತ್ಯವಾಗಿದೆ. ಏಕೆಂದರೆ ಸಿದ್ದರಾಮಯ್ಯ ಅವರ ಬೆಂಬಲಿಗ , ಲಿಂಗಾಯಿತ ಸಮುದಾಯದ ಪ್ರಭಾವಿ ಮುಖಂಡ ಎಂ.ಬಿ.ಪಾಟೀಲ್ ಕೂಡಾ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು ಹಾಕಿದ್ದಾರೆ. ಯಾರೇ ಆ ಸ್ಥಾನ ಪಡೆಯಬೇಕಾದರೂ ಸಿದ್ದರಾಮಯ್ಯ ಅವರ ಆಶೀರ್ವಾದ ಬೇಕೇ ಬೇಕು. ರಾಮಲಿಂಗಾರೆಡ್ಡಿ ಹೆಸರು ಕೂಡಾ ಈ ಸ್ಥಾನಕ್ಕಾಗಿ ಕೇಳಿಬರುತ್ತಿದೆ.

ಸಿದ್ದರಾಮಯ್ಯ ಅವರ ಮತ್ತೊಬ್ಬ ಬೆಂಬಲಿಗ ಸತೀಶ್ ಜಾರಕಿಹೊಳಿ ಕೂಡಾ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇತ್ತೀಚಿಗೆ ರಾಜ್ಯ ಕಾಂಗ್ರೆಸ್ ನಾಯಕರು ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ.

ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ನಾಯಕ ಸ್ಥಾನವನ್ನು ಬೇರೆಯವರಿಗೆ ಬಿಟ್ಟುಕೊಟ್ಟು, ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಮುಂದುವರೆಯಲಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. (ಎಂ.ಎನ್)

Leave a Reply

comments

Related Articles

error: