ಪ್ರಮುಖ ಸುದ್ದಿ

ಆರೋಗ್ಯಯುತ ಬದುಕಿಗೆ ಕ್ರೀಡೆ ಸಹಕಾರಿ : ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ

ರಾಜ್ಯ( ಮಡಿಕೇರಿ) ಜ.11 :- ಒತ್ತಡದಿಂದ ದೂರವಿರುವಂತಾಗಲು ಕ್ರೀಡೆ ಸಹಕಾರಿಯಾಗಿದ್ದು, ಪ್ರತಿನಿತ್ಯ ವ್ಯಾಯಾಮ, ಯೋಗ ಹಾಗೂ ನಡಿಗೆ ಮಾಡಿ ಆರೋಗ್ಯಯುತ ಬದುಕು ಹಾಗೂ ಜೀವನ ಪದ್ಧತಿ ರೂಢಿಸಿಕೊಳ್ಳುವಂತಾಗಬೇಕು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಸಲಹೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೊಡಗು ಜಿಲ್ಲಾ ಶಾಖೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ 2019-20ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಒಟ್ಟು ಗೂಡುವುದರಿಂದ, ಎಲ್ಲರೂ ಒಂದೇ ಎಂಬ ಭಾವನೆ ಬರುತ್ತದೆ. ಇದರಿಂದ ಪ್ರತೀ ನಿತ್ಯ ಕಚೇರಿಗಳಲ್ಲಿ ಕೆಲಸಗಳನ್ನು ಸುಗಮವಾಗಿ ನಿರ್ವಹಿಸಬಹುದಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಸಾರ್ವಜನಿಕರು ಸರ್ಕಾರಿ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ ಸೌಜನ್ಯದಿಂದ ಕಾಣಬೇಕು. ಜೊತೆಗೆ ಸಾರ್ವಜನಿಕರ ಕೆಲಸ ಮಾಡಿಕೊಡಬೇಕು. ಹಾಗೆಯೇ ಲವಲವಿಕೆಯಿಂದ, ನಗುಮುಖದಿಂದ ಕಾರ್ಯನಿರ್ವಹಿಸಿದ್ದಲ್ಲಿ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು ಎಂದು ಶಾಸಕರು ಸಲಹೆ ಮಾಡಿದರು.
ಸರ್ಕಾರಿ ನೌಕರರ ಕ್ರೀಡಾಕೂಟದ ಜೊತೆ ಜನಪ್ರತಿನಿಧಿಗಳ ಕ್ರೀಡಾಕೂಟವನ್ನು ಒಟ್ಟಿಗೆ ನಡೆಸಿದ್ದಲ್ಲಿ ಉತ್ತಮವಾಗಿರುತ್ತಿತ್ತು, ಮುಂದಿನ ದಿನಗಳಲ್ಲಿ ಸರ್ಕಾರಿ ನೌಕರರ ಮತ್ತು ಜನಪ್ರತಿನಿಧಿಗಳ ಕ್ರೀಡಾಕೂಟವನ್ನು ಏರ್ಪಡಿಸುವಂತಾಗಬೇಕು ಎಂದು ಎಂ.ಪಿ.ಅಪ್ಪಚ್ಚು ರಂಜನ್ ಅವರು ಸಲಹೆ ಮಾಡಿದರು.
ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸರ್ಕಾರಿ ನೌಕರರು ಪ್ರತಿನಿತ್ಯದ ಜಂಜಾಟದಿಂದ ಹೊರಬರಲು ಕ್ರೀಡೆ ಸಹಕಾರಿಯಾಗಿದೆ ಎಂದರು.
ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರಬೇಕು. ಸಾರ್ವಜನಿಕರ ಕೆಲಸಗಳನ್ನು ಸಕಾಲದಲ್ಲಿ ಮಾಡಿಕೊಡಬೇಕು ಎಂದು ಅವರು ಹೇಳಿದರು.
ಜಿ.ಪಂ.ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಕಾರ್ಯಪ್ಪ ಅವರು ಮಾತನಾಡಿ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಂತಸದಿಂದ ಪಾಲ್ಗೊಳ್ಳುವಂತಾಗಬೇಕು ಎಂದು ಅವರು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಅವರು ಮಾತನಾಡಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಜೊತೆಗೆ ಕ್ರೀಯಾಶೀಲತೆಯಿಂದ ಕಾರ್ಯನಿರ್ವಹಿಸಲು ಸಾಧ್ಯ ಎಂದು ಅವರು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಗಾಯತ್ರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಚೇತನ್, ಸೋಮವಾರಪೇಟೆ ತಾಲ್ಲೂಕು ನೌಕರರ ಸಂಘದ ಅಧ್ಯಕ್ಷರಾದ ಪ್ರದೀಪ್, ವಿರಾಜಪೇಟೆ ತಾ. ಅಧ್ಯಕ್ಷರಾದ ಬಿ.ಎಸ್.ಗುರುರಾಜ್, ಇತರರು ಇದ್ದರು. ರಾಜ್ಯ ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷರಾದ ಕೆ.ಬಿ.ರವಿ ಅವರು ಸ್ವಾಗತಿಸಿದರು, ಚಿತ್ರಾವತಿ ಪ್ರಾರ್ಥಿಸಿದರು. ರೇವತಿ ರಮೇಶ್ ನಿರೂಪಿಸಿದರು, ನೌಕರರ ಸಂಘದ ಅಧ್ಯಕ್ಷರಾದ ಶಮಿ ವಂದಿಸಿದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: