ಕರ್ನಾಟಕಪ್ರಮುಖ ಸುದ್ದಿ

ವಿಷಾಹಾರ ಸೇವನೆಯಿಂದ ಮೂವರು ವಿದ್ಯಾರ್ಥಿಗಳ ಸಾವು, ಇಬ್ಬರ ಸ್ಥಿತಿ ಚಿಂತಾಜನಕ

ತುಮಕೂರು : ವಿಷಾಹಾರ ಸೇವನೆಯಿಂದಾಗಿ ತುಮಕೂರಿನ ಚಿಕ್ಕನಾಯಕನ ಹಳ್ಳಿಯಲ್ಲಿ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ನಿನ್ನೆ ರಾತ್ರಿ ಊಟ ಸೇವಿಸಿದ ಬಳಿಕ ಐವರು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ, ಪ್ರಥಮ ಚಿಕಿತ್ಸೆ ಬಳಿಕೆ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಮಾರ್ಗ ಮಧ್ಯೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಶಾಂತಮೂರ್ತಿ, ಆಕಾಂಕ್ಷ ಪಲ್ಲಕ್ಕಿ ಮತ್ತು ಶ್ರೇಯಸ್ ಎಂದು ಗುರುತಿಸಲಾಗಿದೆ.

ವಿಷಾಹಾರ ಸೇವಿಸಿದ ಮತ್ತೋರ್ವ ವಿದ್ಯಾರ್ಥಿ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮೇಲನಹಳ್ಳಿಯ ೧೪ ವರ್ಷದ ಸುದರ್ಶನ್ ಮತ್ತು  50 ವರ್ಷ ವಯಸ್ಸಿನ ಸೆಕ್ಯುರಿಟಿ ಗಾರ್ಡ್ ರಮೇಶ್ ಸ್ಥಿತಿಯೂ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಶಾಲೆಯು ಮಾಜಿ ಶಾಸಕ ಕಿರಣ್ ಕುಮಾರ್ ಅವರ ಪತ್ನಿ ಕವಿತಾ ಕಿರಣ್ ಕುಮಾರ್ ಒಡೆತನದ ಶಾಲೆಯಾಗಿದೆ ಎಂದು ತಿಳಿದುಬಂದಿದೆ. ಇಬ್ಬರ ಸ್ಥಿತಿಯೂ ಗಂಭೀರವಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಸೇವಿಸಿದ ಆಹಾರದ ಮಾದರಿಗಳನ್ನು ಸಂಗ್ರಹಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಮೊದಲು ಈ ಐವರೂ ಊಟ ಸೇವಿಸಿ ಅಸ್ವಸ್ಥರಾಗಿದ್ದರು. ಹೀಗಾಗಿ ಹಾಸ್ಟೆಲ್ನ ಉಳಿದ ವಿದ್ಯಾರ್ಥಿಗಳು ಊಟ ಸೇವಿಸಿರಲಿಲ್ಲವಾದ್ದರಿಂದ ಉಳಿದ ವಿದ್ಯಾರ್ಥಿಗಳು ಬಚಾವಾಗಿದ್ದಾರೆ. ಪ್ರಸ್ತುತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಆದೇಶ :

ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಗಳು ತುಮಕೂರು ಜಿಲ್ಲಾಡಳಿತಕ್ಕೆ ಆದೇಶ ನೀಡಿದ್ದಾರೆ. ಘಟನೆ ತೀವ್ರ ಆಘಾತ ಉಂಟು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಗೆ ಮಾಹಿತಿ ‌ನೀಡಿದ್ದಾರೆ. ಅಲ್ಲದೆ ತಪ್ಪಿತಸ್ಥರನ್ನು ಕೂಡಲೇ ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಆದೇಶ ನೀಡಿದ್ದಾರೆ. ಘಟನೆ ಕುರಿತು ವರದಿ ನೀಡುವಂತೆಯೂ ಸೂಚಿಸಿದ್ದಾರೆ.

(ಎಸ್.ಎನ್/ಎನ್‍.ಬಿ.ಎನ್)

Leave a Reply

comments

Related Articles

error: