ಮೈಸೂರು

ಫೆ.8 ರಂದು ರಾಷ್ಟ್ರೀಯ ಲೋಕ ಅದಾಲತ್ ನ್ಯಾಯಾಲಯದಲ್ಲಿ ಉಭಯಪಕ್ಷಕಾರರು ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ : ಸತ್ರ ನ್ಯಾಯಾಧೀಶ ಎಸ್.ಕೆ.ವಂಟಿಗೋಡಿ

ಮೈಸೂರು,ಜ.21:- ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರುಗಳ ಆದೇಶದನ್ವಯ 2020ನೇ ವರ್ಷದಲ್ಲಿ ಫೆಬ್ರವರಿ ಮಾಹೆಯಲ್ಲಿ 8-2-2020ರಂದು ರಾಷ್ಟ್ರೀಯ ಲೋಕ ಅದಾಲತ್ ನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಕೆ.ವಂಟಿಗೋಡಿ ತಿಳಿಸಿದರು.

ಅವರಿಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆವರಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ  ಸದರಿ ಲೋಕ ಅದಾಲತ್ ನಲ್ಲಿ ರಾಜೀಯಾಗಬಲ್ಲಂತಹ ಎಲ್ಲಾ ಕ್ರಿಮಿನಲ್ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ದೌರ್ಜನ್ಯ ತಡೆ ಕಾಯ್ದೆಯ ಪ್ರಕರಣಗಳು, ಜೀವನಾಂಶ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಆಯೋಜಿಸಲಾಗಿದೆ ಎಂದರು.

ಈ ಪ್ರಕರಣಗಳಲ್ಲದೇ ರಾಜಿಯಾಗುವಂತಹ ಇತರೇ  ಪ್ರಕರಣಗಳನ್ನು ವಿನಂತಿಯ ಮೇರೆಗೆ ಸಂಬಂಧಪಟ್ಟ ನ್ಯಾಯಾಲಯಗಳಲ್ಲಾಗಲಿ ಅಥವಾ ಜಿಲ್ಲಾ ಪ್ರಾಧಿಕಾರ ಅಥವಾ ತಾಲೂಕು ಸಮಿತಿಗಳನ್ನಾಗಲಿ ಸಂಪರ್ಕಿಸಿ ಅರ್ಜಿ ಸಲ್ಲಿಸಿದಲ್ಲಿ ಅಂತಹ ಪ್ರಕರಣಗಳನ್ನು ರಾಜಿಗಾಗಿ ತೆಗೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಯಾರಿಗಾದರೂ ಯಾವುದೇ ರೀತಿಯ ಕಾನೂನು ಸಮಸ್ಯೆ ಇದ್ದಲ್ಲಿ ಮತ್ತು ನೆರವಿನ ಅಗತ್ಯತೆ ಇದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಿ ಕಾನೂನು ಸಲಹೆ ಮತ್ತು ನೆರವು ಪಡೆದುಕೊಳ್ಳುವ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೈಸೂರಿನ ಹೊಸ ನ್ಯಾಯಾಲಯಗಳ ಆವರಣದಲ್ಲಿರುವ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಮತ್ತು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿರುವ ತಾಲೂಕು ಕಾನೂನು ಸೇವೆಗಳ ಸಮಿತಿಯನ್ನು ಸಂಪರ್ಕಿಸಿ ನೆರವು ಪಡೆಯಬಹುದು ಎಂದರು.

ಲೋಕ ಅದಾಲತ್ ನಿಂದ ನಿಮ್ಮ ಕೇಸನ್ನು ಜನತಾ ನ್ಯಾಯಾಲಯದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸಿಕೊಳ್ಳಬಹುದು. ಜನತಾ ನ್ಯಾಯಾಲಯದಲ್ಲಿ ನೀವೇ ನೇರವಾಗಿ ಅಥವಾ ವಕೀಲರ ಮೂಲಕ ಭಾಗವಹಿಸಬಹುದು. ನ್ಯಾಯಾಲಯದಲ್ಲಿ ಉಭಯಪಕ್ಷಕಾರರು ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದ ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ನ್ಯಾಯಾಲಯ ಶುಲ್ಕ ಕೊಡಬೇಕಾಗಿಲ್ಲ. ರಾಜೀ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ನಿಮಗೆ ಒಪ್ಪಿಗೆಯಾದಲ್ಲಿ ಮಾತ್ರ ನೀವು ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಪಿ.ದೇವಮಾನೆ, ವಕೀಲರ ಸಂಘದ ಅಧ್ಯಕ್ಷ ಎಸ್.ಆನಂದಕುಮಾರ್, ಕಾರ್ಯದರ್ಶಿ ಶಿವಣ್ಣ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: