ಮೈಸೂರು

ಅಕ್ಟೋಬರ್ 1: ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ: ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ

ಅಕ್ಟೋಬರ್ 1ರಿಂದ ಹತ್ತು ದಿನಗಳ ಕಾಲ ದಸರಾ ಮಹೋತ್ಸವ ಸಾಂಸ್ಕೃತಿಕ ಉಪಸಮಿತಿವತಿಯಿಂದ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಕೆ.ಎ.ದಯಾನಂದ ತಿಳಿಸಿದರು.

ಕಲಾಮಂದಿರದ ಮನೆಯಂಗಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ದಯಾನಂದ ಮಾತನಾಡಿ ಅರಮನೆ ಆವರಣದಲ್ಲಿ ಅಕ್ಟೋಬರ್ 1ರಂದು ಸಂಜೆ 6ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಸಭಾಧ್ಯಕ್ಷ ಕೆ.ಬಿ.ಕೋಳಿವಾಡ , ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಸಹಕಾರ ಮತ್ತು ಸಕ್ಕರೆ ಸಚಿವ ಹೆಚ್.ಎಸ್.ಮಹದೇವಪ್ರಸಾದ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ ಭಾಗವಹಿಸಲಿದ್ದಾರೆ. ಶಾಸಕ  ಎಂ.ಕೆ.ಸೋಮಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಅರಮನೆ ಆವರಣ, ಜಗನ್ಮೋಹನ ಅರಮನೆ, ಕಲಾಮಂದಿರ, ಗಾನಭಾರತಿ, ಚಿಕ್ಕಗಡಿಯಾರ ಆವರಣ, ಪುರಭವನ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸರ್ಕಾರದ ನಿಯಮದಂತೆ ಸ್ಥಳಿಯರಿಗೆ ಶೇಕಡಾ 40ರಷ್ಟು ವೇದಿಕೆ ಕಲ್ಪಿಸಲಾಗಿದ್ದು, ಸಾಂಸ್ಕೃತಿಕ ಚಟುವಟಿಕೆಗಾಗಿ ಸರ್ಕಾರದಿಂದ 80ಲಕ್ಷ ಹಣ ನೀಡಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚನ್ನಪ್ಪ, ರಂಗಾಯಣ ಉಪನಿರ್ದೇಶಕಿ ನಿರ್ಮಲಾ ಮಠಪತಿ ಉಪಸ್ಥಿತರಿದ್ದರು.

Leave a Reply

comments

Tags

Related Articles

error: