ಪ್ರಮುಖ ಸುದ್ದಿ

 ಮುಂಗಾರು ವಿಪತ್ತು ಎದುರಿಸಲು ಸಜ್ಜಾಗಿ : ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ

ರಾಜ್ಯ( ಮಡಿಕೇರಿ) ಜ.27 :- ಮುಂದಿನ ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ವಿಪತ್ತನ್ನು ಎದುರಿಸಲು ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದ್ದು, ಆ ನಿಟ್ಟಿನಲ್ಲಿ ಅಗ್ನಿಶಾಮಕ, ಗೃಹ ರಕ್ಷಕ ದಳ, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳು ತಮಗೆ ಬೇಕಿರುವ ಸಲಕರಣೆ ಸಂಬಂಧಿಸಿದಂತೆ ಮಾಹಿತಿಯ ಪಟ್ಟಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದಾರೆ.

ಮುಂದಿನ ಮುಂಗಾರು ಅವಧಿಯಲ್ಲಿ ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಮುಂಗಾರು ಅವಧಿಯಲ್ಲಿ ಪ್ರಕೃತಿ ವಿಕೋಪ ಎದುರಿಸುವಲ್ಲಿ ಅಗತ್ಯ ಸಲಕರಣೆಗಳಾದ ಬೋಟ್‍ಗಳು, ಔಟ್ ಬೋರ್ಡ್ ಮೋಟಾರು (ಒಬಿಎಂ), ಹಗ್ಗ, ಗರಗಸ ಮತ್ತಿತರವನ್ನು ಖರೀದಿ ಮಾಡಬೇಕಿರುವುದರಿಂದ ಮುಂಚಿತವಾಗಿ ಟೆಂಡರ್ ಆಹ್ವಾನಿಸಬೇಕಿದೆ. ಆದ್ದರಿಂದ ಈ ಬಗ್ಗೆ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘2018 ರ ಮುಂಗಾರು ಅವಧಿಯಲ್ಲಿ ಜಿಲ್ಲೆಯ ಉತ್ತರ ಭಾಗದಲ್ಲಿ ಪ್ರಕೃತಿ ವಿಕೋಪ ಉಂಟಾಯಿತು. ಇದನ್ನು ಗಮನಿಸಿ 2019 ರಲ್ಲಿ ಜಿಲ್ಲೆಯ ಉತ್ತರ ಭಾಗಕ್ಕೆ ಒತ್ತು ನೀಡಲಾಗಿತ್ತು, ಆದರೆ 2019 ರಲ್ಲಿ ಕೊಡಗಿನ ದಕ್ಷಿಣ ಭಾಗದಲ್ಲಿ ಪ್ರಕೃತಿ ವಿಕೋಪ ಸಂಭವಿಸಿತು.  ಆದ್ದರಿಂದ ಈ ಬಾರಿ ಜಿಲ್ಲೆಯ ಎಲ್ಲಾ ಭಾಗಗಳ ಬಗ್ಗೆ ಗಮನಹರಿಸಬೇಕಿದ್ದು, ಆ ನಿಟ್ಟಿನಲ್ಲಿ ಹೋಬಳಿ ಕೇಂದ್ರಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.’

ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯ ಚಟುವಟಿಕೆಯನ್ನು ಮತ್ತಷ್ಟು ಹೆಚ್ಚಿಸುವಲ್ಲಿ ತಾಲ್ಲೂಕು ಮಟ್ಟದಲ್ಲಿ ಗ್ರಾ.ಪಂ.ಪಿಡಿಒ ಸೇರಿದಂತೆ ತಾಲ್ಲೂಕಿನ ಎಲ್ಲಾ ಹಂತದ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಈ ಬಾರಿ ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಮುಂಚಿತವಾಗಿ ಜಿ.ಪಂ.ಸಿಇಒ, ತಹಶೀಲ್ದಾರರು ಹಾಗೂ ಗ್ರಾ.ಪಂ.ಗಳಿಗೆ ಎನ್‍ಡಿಆರ್‍ಎಫ್ ಅಡಿ ಹಣ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಜಿಲ್ಲೆಯ ಶಾಲೆಗಳು ಮತ್ತು ಅಂಗನವಾಡಿಗಳು, ವಿದ್ಯಾರ್ಥಿ ನಿಲಯಗಳ ಸುಸ್ಥಿತಿ ಬಗ್ಗೆ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.   ಕಳೆದ ವರ್ಷದ ಪ್ರಕೃತಿ ವಿಕೋಪದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ಸಂಬಂಧ ಪಂಚಾಯತ್ ರಾಜ್, ಲೋಕೋಪಯೋಗಿ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆಯುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ಚಂದನ್ ಅವರು ಹೆಚ್ಚುವರಿಯಾಗಿ ನಾಲ್ಕು ಬೋಟ್‍ಗಳ ಅಗತ್ಯವಿದ್ದು, ಈ ಸಂಬಂಧ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದರು.  ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳುವ ಸಂಬಂಧ ಕಾರ್ಯಾಗಾರ ಏರ್ಪಡಿಸುವಂತಾಗಬೇಕು ಎಂದು ಪಿ.ಚಂದನ್ ಅವರು ಸಲಹೆ ನೀಡಿದರು.

ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ತಮ್ಮಯ್ಯ ಅವರು ಕೂಡಿಗೆ ಬಳಿ ಗೋಶಾಲೆ ತೆರೆಯಲಾಗಿದ್ದು, ಈ ಜಾಗ ಅರಣ್ಯ ಇಲಾಖೆ ಹೆಸರಿನಲ್ಲಿದೆ. ಆದ್ದರಿಂದ ಈ ಜಾಗವನ್ನು ಪಶುಪಾಲನಾ ಇಲಾಖೆಗೆ ಕೊಡಿಸಿಕೊಡುವಂತೆ ಅವರು ಕೋರಿದರು.  ಪ್ರಕೃತಿ ವಿಕೋಪ ಸಂದರ್ಭದಲ್ಲಿ ವೈದ್ಯಾಧಿಕಾರಿಗಳ ನಿಯೋಜನೆ ಮತ್ತಿತರ ಬಗ್ಗೆ ಗಮನ ಹರಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ್ ಅವರು ಹಲವು ಸಲಹೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೋ, ಪೌರಾಯುಕ್ತರಾದ ಎಂ.ಎಲ್.ರಮೇಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಲಿ, ಕೆಎಸ್‍ಆರ್‍ಟಿಸಿ ನಗರ ಘಟಕ ವ್ಯವಸ್ಥಾಪಕರಾದ ಗೀತಾ, ಸಹಕಾರ ಇಲಾಖೆಯ ಸಹಾಯಕ ನಿಬಂಧಕರಾದ ರವಿಕುಮಾರ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಶಶಿಧರ್,  ತಾ.ಪಂ.ಇಒಗಳಾದ ಸುನಿಲ್ ಕುಮಾರ್, ಷಣ್ಮುಗಂ, ಬಿಸಿಎಂ ಇಲಾಖೆಯ ಅಧಿಕಾರಿ ಲಿಂಗರಾಜು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪುಟ್ಟರಾಜು, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಕುಸುಮ, ಐಟಿಡಿಪಿ ಇಲಾಖಾ ವ್ಯವಸ್ಥಾಪಕರಾದ ದೇವರಾಜು, ಜಿಲ್ಲಾ ವಿಪತ್ತು ನಿರ್ವಹಣಾ ವಿಭಾಗದ ಅನನ್ಯ ವಾಸುದೇವು, ಅನಿಲ್ ಇತರರು ಹಾಜರಿದ್ದರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: