ದೇಶಪ್ರಮುಖ ಸುದ್ದಿ

ದೆಹಲಿಯ ಸಿಎಎ ಹಿಂಸಾಚಾರ: ಮೃತರ ಸಂಖ್ಯೆ 34ಕ್ಕೆ ಏರಿಕೆ

ನವದೆಹಲಿ,ಫೆ.27-ಸಿಎಎ ಪರ ವಿರೋಧ ಗುಂಪುಗಳ ನಡುವೆ ಭುಗಿಲೆದ್ದಿರುವ ಹಿಂಸಾಚಾರದಲ್ಲಿ  ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.

ಸಿಎಎ ಹಿಂಸಾಚಾರದಲ್ಲಿ ಒಬ್ಬ ಪೊಲೀಸ್‌ ಕಾನ್ಸ್‌ಟೇಬಲ್‌ ಹಾಗೂ ಐಬಿ ಅಧಿಕಾರಿ ಸೇರಿ 34 ಮಂದಿ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ದೆಹಲಿ ಪೊಲೀಸರು ಇದುವರೆಗೂ 18ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಗಲಭೆಗೆ ಸಂಬಂಧಿಸಿದಂತೆ 106 ಜನರನ್ನು ಬಂಧಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಈಶಾನ್ಯ ದೆಹಲಿಯಲ್ಲಿ ಒಂದು ತಿಂಗಳ ಕಾಲ ನಿಷೇಧಾಜ್ಞೆ ಹೇರಲಾಗಿದೆ.

ದೆಹಲಿಯ ನಾಲ್ಕು ಭಾಗಗಳಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದ್ದು, ಹಿಂಸಾಚಾರ ತಡೆಗಟ್ಟಲು 12 ಪ್ಯಾರಾ ಮಿಲಿಟರಿ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಈ ಮಧ್ಯೆ ಸಿಎಎ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ ಎಂದು ಹೈಕೋರ್ಟ್ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.

ಇನ್ನು, ಗಲಭೆ ನಿಯಂತ್ರಣ ಹೊಣೆ ಹೊತ್ತಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ನಿನ್ನೆ ಗಲಭೆಗ್ರಸ್ತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದು, ದೆಹಲಿಯ ಜನತೆಗೆ ರಕ್ಷಣೆಯ ಭರವಸೆ ನೀಡಿದ್ದಾರೆ. ಗೃಹ ಸಚಿವ ಅಮಿತ್‌ ಶಾ ದೆಹಲಿಯ ಪರಿಸ್ಥಿತಿಯನ್ನು ಸುಧಾರಿಸಲು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟ ಮುಖ್ಯ ಪೊಲೀಸ್ ಕಾನ್ ಸ್ಟೇಬಲ್ ರತನ್ ಲಾಲ್ ಕುಟುಂಬಕ್ಕೆ ಒಂದು ಕೋಟಿ ರೂ. ನೀಡುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದು, ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಗುರುವಾರವೂ ಶಾಲಾ-ಕಾಲೇಜುಗಳಿಗೆ ರಜೆ ಮುಂದುವರಿದಿದ್ದು, 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಈ ಕುರಿತು ಹೇಳಿಕೆ ನೀಡಿದ್ದು, ಗಲಭೆ ಪೀಡಿತ ಪ್ರದೇಶದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. (ಎಂ.ಎನ್)

 

Leave a Reply

comments

Related Articles

error: