ಮೈಸೂರು

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ : ಅಕ್ರಮ ಚಟುವಟಿಕೆ ನಡೆಯದಂತೆ ಬಿಗಿ ಬಂದೋಬಸ್ತ್

ಮೈಸೂರು,ಮಾ.3:- ಮೈಸೂರು ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಕಲ ಸಿದ್ಧತೆ ನಡೆದಿದ್ದು, ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಲಿದೆ.

ನಾಳೆಯಿಂದ ಮಾ.23 ರ ತನಕ  ಪರೀಕ್ಷೆ ನಡೆಯಲಿದ್ದು, ನಕಲು ಸೇರಿದಂತೆ ಅಕ್ರಮ ಚಟುವಟಿಕೆ ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪರೀಕ್ಷಾ ದಿನದಂದು ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ಜಿಲ್ಲಾ ಖಜಾನೆಯಿಂದ ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವ ವಾಹನಕ್ಕೆ ಜಿಪಿಎಸ್‌ ಅಳವಡಿಸಲಾಗಿದ್ದು,ಜಿಲ್ಲೆಯಾದ್ಯಂತ 50 ಪರೀಕ್ಷಾ ಕೇಂದ್ರಗಳಿವೆ. ಗ್ರಾಮೀಣ 24 ಪರೀಕ್ಷಾ ಕೇಂದ್ರಗಳು, ನಗರ 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ 200 ಮೀ. ವ್ಯಾಪ್ತಿಯಲ್ಲಿ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ ಅನುಮಾನಾಸ್ಪದವಾಗಿ ತಿರುಗಾಡುವುದನ್ನು ನಿಷೇಧಿಸಲಾಗಿದ್ದು, ಅಂತಹ ವ್ಯಕ್ತಿಗಳು ಕಂಡು ಬಂದಲ್ಲಿ ಮಾಹಿತಿ ನೀಡಬಹುದಾಗಿದೆ.  ಜೆರಾಕ್ಸ್‌ ಅಂಗಡಿ, ಸೈಬರ್‌ ಕೆಫೆ, ಕಂಪ್ಯೂಟರ್‌ ಸೆಂಟರ್‌, ಕೋಚಿಂಗ್‌ ಸೆಂಟರ್‌ಗಳನ್ನು ಬಂದ್‌ ಮಾಡಿಸಲು ಪೊಲೀಸ್‌ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಮೂರು ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಈ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚುವರಿ ಪೊಲೀಸ್‌ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿಶೇಷ ಜಾಗೃತ ದಳದ ಸದಸ್ಯರುಗಳನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಯ ಕಣ್ಗಾವಲಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಳೆದ ಬಾರಿ ಜಿಲ್ಲೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.58 ಫಲಿತಾಂಶ ಬಂದಿದ್ದು, ಈ ಬಾರಿ 80% ಫಲಿತಾಂಶ ನಿರೀಕ್ಷೆ ಮಾಡಲಾಗಿದೆ. ಬೆಳಿಗ್ಗೆ 10.15ರಿಂದ ಪರೀಕ್ಷೆ ಆರಂಭವಾಗಲಿದ್ದು, ಮಧ್ಯಾಹ್ನ 1.30ರವರೆಗೆ ನಡೆಯಲಿದೆ. ಮೊದಲ ದಿನ ಇತಿಹಾಸ, ಭೌತಶಾಸ್ತ್ರ, ಮೂಲಗಣಿತ ವಿಷಯಗಳ ಮೇಲೆ ಪರೀಕ್ಷೆ ನಡೆಯಲಿದೆ.

ನಿಗದಿತ ಸಮಯಕ್ಕೆ ಕನಿಷ್ಠ 30 ನಿಮಿಷಗಳ ಮೊದಲು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿರಬೇಕು.   ಪರೀಕ್ಷಾ ಹಾಲ್‌ನಲ್ಲಿ ಎಲೆಕ್ಟ್ರಿಕ್ ಗ್ಯಾಜೆಟ್‌ಗಳನ್ನು ನಿಷೇಧಿಸಲಾಗಿದೆ.  ಹಾಲ್ ಟಿಕೆಟ್ ಇಲ್ಲದೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕುಳಿತುಕೊಳ್ಳಲು  ಅನುಮತಿ ಇರುವುದಿಲ್ಲ ಎಂದು ತಿಳಿದು ಬಂದಿದೆ.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: