ಪ್ರಮುಖ ಸುದ್ದಿ

ಕೊರೋನಾ ಮುನ್ನೆಚ್ಚರಿಕೆ : ವಿಶೇಷ ಸಭೆ ನಡೆಸಿದ ಜಿಲ್ಲಾಧಿಕಾರಿ : ವಿದೇಶದಿಂದ ಬರುವವರ ಬಗ್ಗೆ ಮಾಹಿತಿ ನೀಡಲು ಮನವಿ

ರಾಜ್ಯ( ಮಡಿಕೇರಿ) ಮಾ.14:- ಕೊರೊನಾ ವೈರಸ್ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದ್ದು, ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಜೊತೆಗೆ ವಿದೇಶದಿಂದ ಬರುವವರ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ಒದಗಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಅಗತ್ಯ ಮುಂಜಾಗೃತಾ ಕ್ರಮಕೈಗೊಳ್ಳುವ ಸಂಬಂಧ ನಗರದ ಜಿ.ಪಂ. ನೂತನ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಮುಖ್ಯಸ್ಥರು ಹಾಗೂ ಖಾಸಗಿ ಆಸ್ಪತ್ರೆಯ ಮುಖ್ಯಸ್ಥರು, ವಿವಿಧ ಸಂಸ್ಥೆಯ ಮುಖ್ಯಸ್ಥರ ಜೊತೆ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೊರ ರಾಷ್ಟ್ರಗಳಿಂದ ಬರುವವರು ಸ್ವಯಂ ಪ್ರೇರಣೆಯಿಂದ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಕೋರಿದರು.
ಬೆಂಗಳೂರು, ಮಂಗಳೂರು ಮತ್ತಿತರ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕಾರವಾರ ಮತ್ತು ಮಂಗಳೂರು ಬಂದರಿನಿಂದ ಬರುವವರ ಬಗ್ಗೆ ಮಾಹಿತಿ ನೀಡುವಂತಾಗಬೇಕು. ಜೊತೆಗೆ ಕಣ್ಣೂರು ವಿಮಾನ ನಿಲ್ದಾಣದಿಂದ ಬರುವವರ ಬಗ್ಗೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು.
ಕೊರೊನಾ ವೈರಸ್ ಸಂಬಂಧಿಸಿದಂತೆ ಸಮಸ್ಯೆಗಳಿದ್ದಲ್ಲಿ ಪೊಲೀಸ್ ಇಲಾಖೆಯ ಸಹಾಯವಾಣಿ 100 ಕ್ಕೆ ಕರೆ ಮಾಡಬಹುದಾಗಿದೆ. ವಿದೇಶದಿಂದ ಬರುವವರು ಸ್ವಯಂ ದೃಢೀಕರಣ ಪತ್ರವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.
ಮಾಸ್ಕ್‍ನ್ನು ಎಲ್ಲರೂ ಧರಿಸುವ ಅಗತ್ಯವಿಲ್ಲ. ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು, ಸಿಬ್ಬಂದಿಗಳು, ಆಸ್ಪತ್ರೆಗಳಲ್ಲಿ ಇರುವವರು ಮಾಸ್ಕ್ ಬಳಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಕೊರೊನಾ ವೈರಸ್ ಸಂಬಂಧಿಸಿದಂತೆ ತಾಲ್ಲೂಕು ಮಟ್ಟದಲ್ಲಿಯೂ ಸಹ ಮಾಹಿತಿ ನೀಡುವಂತೆ ತಹಶೀಲ್ದಾರ್, ಇಒಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಸ್ವಚ್ಛತೆ ಕಡೆ ಗಮನಹರಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಸಾಮಾಜಿಕ ಜಾಲ ತಾಣಗಳಲ್ಲಿ ಕೆಲವು ಸುಳ್ಳು ವರದಿ ಹಬ್ಬಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಯಾವುದೇ ರೀತಿ ಆತಂಕ ಪಡುವಂತಿಲ್ಲ. ಈಗಾಗಲೇ ಜಿಲ್ಲಾಡಳಿತ ವತಿಯಿಂದ ಚಿಕಿತ್ಸೆ ನೀಡಲು ಎಲ್ಲಾ ರೀತಿಯ ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.
ಮುಖ್ಯವಾಗಿ ಖಾಸಗಿ ಆಸ್ಪತ್ರೆಯವರು ಕೊರೊನ ವೈರಸ್ ರೋಗ ಲಕ್ಷಣಗಳನ್ನು ಹೊಂದಿರುವ ರೋಗಿಗಳು ಬಂದರೆ ಅವರ ಬಗ್ಗೆ ಸೂಕ್ಷ್ಮವಾಗಿ ವಿಚಾರಿಸಿ, ಅವರು ವಿದೇಶ ಪ್ರವಾಸ ಮಾಡಿರುವ ಹಿನ್ನೆಲೆಯ ಬಗ್ಗೆ ಧೃಢಪಡಿಸಿಕೊಳ್ಳಿ ಎಂದು ಅವರು ತಿಳಿಸಿದರು.
ಜೊತೆಗೆ ಹೋಟೆಲ್, ಹೋಂ ಸ್ಟೇ ಮತ್ತು ರೆಸಾರ್ಟ್‍ಗಳಲ್ಲಿ ಕೊರೊನಾ ವೈರಸ್ ಕುರಿತಾಗಿ ಕರಪತ್ರಗಳನ್ನು ನೀಡುವ ಕಾರ್ಯವನ್ನು ಮಾಡಬೇಕು. ಅಲ್ಲದೆ ಪ್ರವಾಸಕ್ಕಾಗಿ ಬರುವವರ ವಿವರಗಳನ್ನು ಸಮರ್ಪಕವಾಗಿ ಸಂಗ್ರಹಿಸಬೇಕು. ವಿದೇಶ ಪ್ರವಾಸದ ಹಿನ್ನೆಲೆ ತಿಳಿದು ಬಂದರೆ ತಕ್ಷಣವೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಸಂಬಂಧಪಟ್ಟ ಹೋಟೆಲ್, ಹೋಂಸ್ಟೇ ಅಸೋಸಿಯೇಷನ್‍ಗಳ ಮುಖ್ಯಸ್ಥರಿಗೆ ಮನವಿ ಮಾಡಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ಸಹ ತಮ್ಮ ಕಚೇರಿಯಲ್ಲಿನ ಸಿಬ್ಬಂದಿಗಳ ಬಗ್ಗೆ ಕಾಳಜಿವಹಿಸಬೇಕು. ಕೊರೊನಾ ವೈರಸ್ ಸಂಬಂಧಿತ ರೋಗ ಲಕ್ಷಣಗಳು ಕಂಡುಬಂದಲ್ಲಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಈಗಾಗಲೇ 104 ಸಹಾಯವಾಣಿ ಇದ್ದು, ಜಿಲ್ಲೆಯಲ್ಲಿ ಈ ಬಗ್ಗೆ ಯಾವುದೇ ಪ್ರಕರಣದ ಮಾಹಿತಿ ಇದ್ದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಮೊಬೈಲ್ ಸಂಖ್ಯೆ: 944984326ಗೆ ಕರೆ ಮಾಡುವಂತೆ ಸಲಹೆ ನೀಡಿದರು. ಅಲ್ಲದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಿದ್ದು, ಅವಶ್ಯಕತೆಯಿದ್ದಲ್ಲಿ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 100 ಕ್ಕೆ ಕರೆ ಮಾಡುವಂತೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಮಾತನಾಡಿ ಕೊರೊನಾ ವೈರಸ್ ಸಂಬಂಧಿಸಿದಂತೆ ಅಗತ್ಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆಗೆ ಸಹಕರಿಸುವಂತೆ ಕೋರಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಪೌರಾಯುಕ್ತರಾದ ಎಂ.ಎಲ್.ರಮೇಶ್, ನಾನಾ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: