ಪ್ರಮುಖ ಸುದ್ದಿ

ಪ್ರತೀ ಗ್ರಾಮ ಪಂಚಾಯಿತಿಗಳಲ್ಲಿ ಕೋವಿಡ್-19 ಕೇರ್ ಸೆಂಟರ್ : ಕೊಡಗು ಜಿಲ್ಲಾಡಳಿತ ನಿರ್ಧಾರ

ರಾಜ್ಯ( ಮಡಿಕೇರಿ) ಮಾ.24 :- ಕೊರೋನಾ ಭೀತಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪ್ರತೀ ಗ್ರಾಮ ಪಂಚಾಯಿತಿಗಳಲ್ಲಿ ಕೋವಿಡ್-19 ಕೇರ್ ಸೆಂಟರ್‍ನ್ನು ತೆರೆಯಲು ನಿರ್ಧರಿಸಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ವೈರಸ್ ಹರಡದಂತೆ ಮುಂದಿನ ಹಂತದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರತೀ ಹೋಬಳಿ ಕೇಂದ್ರಕ್ಕೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ನೋಡಲ್ ಅಧಿಕಾರಿಗಳು ತಮ್ಮ ಹಂತದಲ್ಲಿ ಕೊರೊನಾ ವೈರಸ್ ನಿಯಂತ್ರಣ ಸಂಬಂಧ ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಮನೆ ಬಾಗಿಲಿಗೆ ಎರಡು ತಿಂಗಳ ಪಡಿತರ ಬರಲಿದ್ದು, ಬಯೋಮೆಟ್ರಿಕ್ ಇರುವುದಿಲ್ಲ ಎಂದು ಅವರು ಹೇಳಿದರು. ಯಾವುದೇ ಕಾರಣಕ್ಕೂ ಗೊಂದಲಕ್ಕೆ ಒಳಗಾಗದೆ ಜನರು ಗುಂಪು ಸೇರಬಾರದು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ತರಕಾರಿ, ದಿನಸಿ ಪದಾರ್ಥಗಳ ಅಂಗಡಿಗಳಿಗೆ ಯಾವುದೇ ರೀತಿಯ ತೊಂದರೆಯಿಲ್ಲ. ಉಳಿದಂತೆ ಸರ್ಕಾರದ ನಿರ್ದೇಶನದಂತೆ ಲಾಕ್‍ಡೌನ್ ಮಾಡಬೇಕು. ಯಾವುದೇ ಕಾರಣಕ್ಕೂ ಇದರಲ್ಲಿ ವಿನಾಯಿತಿ ಇಲ್ಲ ಎಂದು ಜಿಲ್ಲಾಧಿಕಾರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೇರಳ ರಾಜ್ಯಕ್ಕೆ ಕೊಡಗು ಜಿಲ್ಲೆಯ ಮೂಲಕ ವಾಹನಗಳು ಹೋಗಲು ಬಿಡುವುದಿಲ್ಲ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಮನೆ ಸಂಪರ್ಕ ತಡೆಯಲ್ಲಿ 248 ಮಂದಿ ಇದ್ದು, ಇವರು ಎಲ್ಲಿಯೂ ತಿರುಗಾಡದಂತೆ ಕ್ರಮವಹಿಸಬೇಕು ಎಂದು ಅವರು ಸೂಚಿಸಿದರು.
ಮುಂದಿನ ಹಂತದಲ್ಲಿ ಸವಾಲುಗಳನ್ನು ಎದುರಿಸಲು ಇನ್ನಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದರು.
ಸರ್ಕಾರದ ನಿರ್ದೇಶನದಂತೆ ಲಾಕ್‍ಡೌನ್ ಕಾರ್ಯವನ್ನು ಕಠಿಣವಾಗಿ ನಿರ್ವಹಿಸಬೇಕಿದೆ. ಯಾರಿಗೂ ವಿಧೇಯತೆ ತೋರುವುದು ಅಗತ್ಯವಿಲ್ಲ. ಲಾಕ್‍ಡೌನ್ ಸಂದರ್ಭದಲ್ಲಿ ಏನು ಮಾಡಬೇಕು, ಏನು ಮಾಡಬಾರದು ಎಂಬ ಬಗ್ಗೆ ಮಾಹಿತಿ ನೀಡಲಾಗಿದ್ದು, ಅದರಂತೆ ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ವಾಟ್ಸಪ್ ಮುಖಾಂತರ ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ ಈಗಾಗಲೇ ಒಂದು ಕೊರೊನಾ ಸೋಂಕು ದೃಢಪಟ್ಟಿದೆ. 4 ಜನರ ವರದಿಗಳು ನಿರೀಕ್ಷೆಯಲ್ಲಿದೆ. ಈ ನಿಟ್ಟಿನಲ್ಲಿ ಲಾಕ್‍ಡೌನ್ ಸಂಬಂಧಿಸಿದಂತೆ ಆದೇಶವನ್ನು ಪಾಲಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ಜಿಲ್ಲೆಯಲ್ಲಿ 13 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದ್ದು, ಸರ್ಕಾರದ ನಿರ್ದೇಶನದಂತೆ ಕಟ್ಟುನಿಟ್ಟಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಅವರು ಮುಂದಿನ ದಿನಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹಲವು ಮಾಹಿತಿ ನೀಡಿದರು. ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಕಾರ್ಯಪ್ಪ, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: