ಪ್ರಮುಖ ಸುದ್ದಿ

359 ಮಂದಿಗೆ ಮನೆಗಳಲ್ಲಿಯೇ ಸಂಪರ್ಕ ತಡೆ : ನಾಲ್ವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

ರಾಜ್ಯ( ಮಡಿಕೇರಿ) ಮಾ.31 :- ಕೊರೋನಾ ಸೋಂಕು ಹರಡದಂತೆ ತಡೆಯಲು ಕೊಡಗು ಜಿಲ್ಲಾಡಳಿತ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ವಿದೇಶಗಳಿಗೆ ಹೋಗಿ ಹಿಂತಿರುಗಿ ಬಂದಿರುವವರನ್ನು ಪತ್ತೆ ಹಚ್ಟಿ ತಪಾಸಣೆ ಮಾಡುವ ಕಾರ್ಯವನ್ನು ಮುಂದುವರೆಸಲಾಗಿದೆ. ಇಂದು ಸಂಜೆಯವರೆಗೆ ಮಡಿಕೇರಿ ತಾಲ್ಲೂಕಿನಲ್ಲಿ 145 ವಿರಾಜಪೇಟೆ ತಾಲ್ಲೂಕಿನಲ್ಲಿ 116 ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ 118 ಜನರನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 359 ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಅವರವರ ಮನೆಗಳಲ್ಲಿಯೇ ಸಂಪರ್ಕ ತಡೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಇಲ್ಲಿಯವರೆಗೆ ಒಟ್ಟು 46 ಮಂದಿಯ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 1 ಪ್ರಕರಣ ದೃಢ ಪಟ್ಟಿದ್ದು, 45 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿರುತ್ತದೆ. ಪ್ರಸ್ತುತ ಸೋಂಕು ದೃಢಪಟ್ಟ 1 ಪ್ರಕರಣ ಸೇರಿದಂತೆ ಒಟ್ಟು ನಾಲ್ವರನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿಟ್ಟು ಉಪಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಇಂದು ಜಿಲ್ಲೆಯ ತಹಶೀಲ್ದಾರರು, ಕಾರ್ಯನಿರ್ವಹಣಾಧಿಕಾರಿಗಳು ಮತ್ತಿತರ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಕೊರೋನ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಹೊರ ಜಿಲ್ಲೆ/ ಹೊರ ರಾಜ್ಯಗಳಿಂದ ಬಂದಿರುವ ಜನರ ಮಾಹಿತಿಯನ್ನು ಕ್ರೋಢೀಕರಿಸಿ ತುರ್ತಾಗಿ ಸಲ್ಲಿಸಲು ನಿರ್ದೇಶನ ನೀಡಲಾಗಿದೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: