ಮೈಸೂರು

ಮಾಧ್ಯಮದವರು ಹೆಚ್ಚಿನ ಮುತುವರ್ಜಿ ವಹಿಸಿ ಕೊರೋನಾ ಸೋಂಕು ತಡೆಯುವ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ತಿಳುವಳಿಕೆ ಮೂಡಿಸುತ್ತಿದ್ದಾರೆ : ಎಸ್.ಕೆ.ವಂಟಿಗೋಡಿ

ಮೈಸೂರು,ಏ.6:-  ಕೋವಿಡ್-19 (ಕೊರೋನಾ ವೈರಸ್) ತಡೆಗಟ್ಟುವ ನಿಟ್ಟಿನಲ್ಲಿ  ಸಾರ್ವಜನಿಕರಿಗೆ  ಜಾಗೃತಿ ಮೂಡಿಸಲು    ಆಟೋ, ಕಾರುಗಳಲ್ಲಿ ಪ್ರಚಾರ ಮಾಡುವ ಮೂಲಕ ಅರಿವುಮೂಡಿಸುವ ಕಾರ್ಯಕ್ರಮಕ್ಕೆ ಇಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಕೆ.ವಂಟಿಗೋಡಿಯವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಮೈಸೂರಿನ ನ್ಯಾಯಾಲಯದ ಮುಂಭಾಗ ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಕೋವಿಡ್ -19 ವೈರಸ್ ಸೋಂಕು ಹರಡದಂತೆ ಯಾವ ರೀತಿ ಸಾರ್ವಜನಿಕರು ಜಾಗೃತಿ ವಹಿಸಬೇಕು, ಮುಂಜಾಗ್ರತೆವಹಿಸಬೇಕು ಎನ್ನುವ ಕುರಿತು ಅರಿವು ಮೂಡಿಸಲಾಗುವುದು ಎಂದರು. 6ವಾಹನಗಳ ಮೂಲಕ ತೆರಳಿ ಜಾಗೃತಿ ಮೂಡಿಸುವ ಕಾರ್ಯ ನಡೆಯಲಿದೆ.

ಕೊರೋನಾ ಮಹಾಮಾರಿ ಬೆಂಗಳೂರು, ಮೈಸೂರು ಭಾಗದಲ್ಲಿ ಹೆಚ್ಚು ಕಂಡು ಬಂದಿದ್ದು, ಮೈಸೂರು ಭಾಗದಲ್ಲಿ ಹೆಚ್ಚು ತಿಳುವಳಿಕೆ ಮೂಡಿಸಲಾಗುವುದು. ಜಿಲ್ಲಾ ಆರೋಗ್ಯ ಇಲಾಖೆ, ಪೌರಕರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಹಲವು ಇಲಾಖೆಗಳು ತಮ್ಮನ್ನು ತಾವು ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯ ಕೈಗೊಂಡಿವೆ. ಮಾಧ್ಯಮದವರು ಹೆಚ್ಚಿನ ಮುತುವರ್ಜಿ ವಹಿಸಿ  ಸಾರ್ವಜನಿಕರಲ್ಲಿ ಕೊರೋನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ತಿಳುವಳಿಕೆ ಮೂಡಿಸುತ್ತಿದ್ದಾರೆ. ಇದಕ್ಕಾಗಿಯೇ ತಮ್ಮ ವೈಯುಕ್ತಿಕ ಜೀವನವನ್ನು ಬಿಟ್ಟು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರು ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಾನವ ಹಕ್ಕುಗಳ ಸಂಘಟನೆ ಸಹಯೋಗದೊಂದಿಗೆ ಕೊರೋನಾ ಕುರಿತು ಅರಿವು ಮೂಡಿಸಲಾಗುತ್ತಿದ್ದು, ಮೈಸೂರು ನಗರ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: