Uncategorized

ಕೋವಿಡ್ 19 ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್

ನವದೆಹಲಿ,ಜೂ.8-ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೋವಿಡ್ 19 ಪರೀಕ್ಷೆಗೆ ಒಳಪಡಲಿದ್ದಾರೆ ಎಂದು ತಿಳಿದುಬಂದಿದೆ.

ಜ್ವರದಿಂದ ಬಳಲುತ್ತಿರುವ ಅರವಿಂದ್ ಕೇಜ್ರಿವಾಲ್ಗೆ ಗಂಟಲು ನೋವು ಸಹ ಕಾಡುತ್ತಿದೆ. ಹೀಗಾಗಿ ಅರವಿಂದ್ ಕೇಜ್ರಿವಾಲ್ಗೆ ಕೊರೊನಾ ವೈರಸ್ ಸೋಂಕು ತಗುಲಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ಮುಂಜಾಗ್ರತಾ ಕ್ರಮವಾಗಿ ಕೇಜ್ರಿವಾಲ್ಗೆ ಕೋವಿಡ್ 19 ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಮಂಗಳವಾರ ಕೋವಿಡ್ ಪರೀಕ್ಷೆ ನಡೆಯಲಿದೆ ಎಂಬುದಾಗಿ ಮಾಹಿತಿ ಲಭಿಸಿದೆ. ಸದ್ಯ ಕೇಜ್ರಿವಾಲ್ ಸಿಎಂ ನಿವಾಸದಲ್ಲಿ ಸೆಲ್ಪ್ ಕ್ವಾರಂಟೈನ್ಗೆ ಒಳಪಟ್ಟಿದ್ದಾರೆ.

ಜ್ವರದ ಹಿನ್ನೆಲೆಯಲ್ಲಿ ಭಾನುವಾರ ಮಧ್ನಾಹ್ನದಿಂದ ನಡೆಯಬೇಕಾಗಿದ್ದ ಎಲ್ಲ ಸಭೆಗಳನ್ನು ರದ್ದುಗೊಳಿಸಲಾಗಿದೆ. ಕೊನೆಯದಾಗಿ ಆನ್ಲೈನ್ ಮೂಲಕ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದಿಲ್ಲಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ದಿಲ್ಲಿಯವರಿಗೆ ಮಾತ್ರ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದರು. ಇದು ವಿವಾದಕ್ಕೆಡೆ ಮಾಡಿದೆ. ದಿಲ್ಲಿಯಲ್ಲಿ ಇದುವರೆಗೆ 28,000ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 812 ಮಂದಿ ಮೃತಪಟ್ಟಿದ್ದಾರೆ. (ಎಂ.ಎನ್)

Leave a Reply

comments

Related Articles

error: