ಪ್ರಮುಖ ಸುದ್ದಿ

ಹತ್ತನೇ ತರಗತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ

ರಾಜ್ಯ( ಮಡಿಕೇರಿ) ಜೂ.9 :- ಇದೇ ಜೂ.25 ರಿಂದ ಆರಂಭಗೊಳ್ಳುವ ಹತ್ತನೇ ತರಗತಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚನೆ ನೀಡಿದ್ದಾರೆ.
ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಂಬಂಧಿಸಿದಂತೆ ಇದುವರೆಗೆ ಕೈಗೊಳ್ಳಲಾಗಿರುವ ಸಿದ್ಧತೆ ಬಗ್ಗೆ ಸೋಮವಾರ ಮಾಹಿತಿ ಪಡೆದು ಅವರು ಮಾತನಾಡಿದರು.
ಕೋವಿಡ್-19 ನಿಯಂತ್ರಣ ಮಾರ್ಗಸೂಚಿಗಳನ್ವಯ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಹ್ಯಾಂಡ್ ಸ್ಯಾನಿಟೈಸರ್ ನೀಡುವುದು, ಮಾಸ್ಕ್, ಮುಖಗವಸು, ಜ್ವರ ಪರೀಕ್ಷೆ ಮಾಡಿ ನಂತರ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊರೊನಾ ರೋಗವನ್ನು ಹರಡದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರೀಕ್ಷಾ ಅವಧಿಯಲ್ಲಿ ಸಾರಿಗೆ ಸಂಚಾರ ಸಂಬಂಧಿಸಿದಂತೆ ಕೆಎಸ್‍ಆರ್‍ಟಿಸಿ ಬಸ್ ವ್ಯವಸ್ಥೆ ಕಲ್ಪಿಸುವುದು, ಖಾಸಗಿ ಬಸ್‍ಗಳ ಸಂಚಾರಕ್ಕೆ ಸಂಬಂಧಿಸಿದಂತೆ ಬಸ್‍ಗಳ ಓಡಾಟಕ್ಕೆ ಮನವಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಪರೀಕ್ಷಾ ಅವಧಿಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಉಳಿದುಕೊಳ್ಳುವಂತಾಗಲು ವಿದ್ಯಾರ್ಥಿ ನಿಲಯ ತೆರೆಯಲು ಅಗತ್ಯವಿರುವ ವಿದ್ಯಾರ್ಥಿ ನಿಲಯಗಳ ಪಟ್ಟಿ ಒದಗಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ನದಿ, ಹೊಳೆ ದಾಟಿ ಬರುವ ಗ್ರಾಮಗಳ ವಿದ್ಯಾರ್ಥಿಗಳು ಇದ್ದಲ್ಲಿ ಅಂತಹ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಳ್ಳಲು ಅವಕಾಶ ಮಾಡಬೇಕು. ಈ ಸಂಬಂಧ ಪೋಷಕರಿಗೆ ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ ಕೇರಳದ ವಿದ್ಯಾರ್ಥಿಗಳು ಇದ್ದಲ್ಲಿ ಮಾಹಿತಿ ಒದಗಿಸಬೇಕು ಎಂದರು.
ಜಿಲ್ಲೆಯ ಮಕ್ಕಳು ಹೊರ ಜಿಲ್ಲೆಗೆ ಪರೀಕ್ಷೆಗೆ ತೆರಳುವುದು, ಹೊರ ಜಿಲ್ಲೆಯ ವಿದ್ಯಾರ್ಥಿಗಳು ಜಿಲ್ಲೆಗೆ ಪರೀಕ್ಷೆ ಬರೆಯಲು ಆಗಮಿಸುವುದು, ಮತ್ತಿತರ ಬಗ್ಗೆ ಮಾಹಿತಿ ಇರಬೇಕು. ಪರೀಕ್ಷೆ ಬರೆಯಲು ಎಲ್ಲಾ ವಿದ್ಯಾರ್ಥಿಗಳಿಗೆ ಅವಕಾಶ ಮಾಡಬೇಕು. ಈ ಬಗ್ಗೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.
ಪರೀಕ್ಷಾ ಕೇಂದ್ರಗಳು ಸುಸಜ್ಜಿತವಾಗಿದೆಯೇ ಎಂಬ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಪರೀಕ್ಷಾ ಸಮಯದಲ್ಲಿ ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಮಳೆಯಾಗುವುದರಿಂದ ಕುಗ್ರಾಮದಂತಹ ಪ್ರದೇಶಗಳಿಂದ ಬರುವ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಪರೀಕ್ಷೆ ಮುಗಿಯುವವರೆಗೂ ಸಮೀಪದ ವಿದ್ಯಾರ್ಥಿ ನಿಲಯಗಳಲ್ಲಿ ಊಟ, ವಸತಿ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಮಾತನಾಡಿ ಹೊರ ಜಿಲ್ಲೆಗಳಿಂದ ಕೊಡಗು ಜಿಲ್ಲೆಯಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಮಾಹಿತಿ ಹಾಗೂ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯುತ್ತಿರುವವರ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದು ಅಂತಹ ವಿದ್ಯಾರ್ಥಿಗಳಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಿಕೊಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೋ ಅವರು ಜೂನ್, 25 ರಿಂದ ಜುಲೈ, 3 ರವರೆಗೆ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಅಗತ್ಯ ಸಿದ್ಧ್ದತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಗೆ ಹಾಜರಾಗುವಂತೆ ತಿಳಿಸಿದ್ದು, ಪರೀಕ್ಷೆ ಆರಂಭಕ್ಕೂ ಮುನ್ನ ಪ್ರತೀ ವಿದ್ಯಾರ್ಥಿಗಳಿಗೆ ಜ್ವರ ತಪಾಸಣೆ, ಹ್ಯಾಂಡ್ ಸ್ಯಾನಿಟೈಸರ್ ನೀಡಿ ಪರೀಕ್ಷಾ ಕೇಂದ್ರಗಳಿಗೆ ಬಿಡಲಾಗುವುದು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಪೋಷಕರಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶವಿರುವುದಿಲ್ಲ. ಪರೀಕ್ಷಾ ಪ್ರವೇಶ ಪತ್ರ ನೀಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಾಸ್ಕ್‍ನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್.ಕೆ.ಪಾಂಡು(ಸೋಮವಾರಪೇಟೆ), ಶ್ರೀಶೈಲ ಬೀಳಗಿ(ವಿರಾಜಪೇಟೆ), ಗುರುರಾಜ್ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ(ಮಡಿಕೇರಿ) ಅವರು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾರ್ಥಿ ನಿಲಯ ತೆರೆಯಬೇಕು ಎಂದು ಅವರು ಕೋರಿದರು.
ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಎಂ.ಶಿವಕುಮಾರ್, ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇತರರು ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: