ನಮ್ಮೂರುಮೈಸೂರು

ಕಾವೇರಿ ವಿವಾದ: ಯಾವುದೇ ನಿರ್ಣಯಕ್ಕೆ ಬರದ ಸಭೆ

ತಮಿಳುನಾಡಿಗೆ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ನಾಳೆಯವರೆಗೂ ನೀರು ಹರಿಸದಿರಲು ತೀರ್ಮಾನಿಸಲಾಗಿದ್ದು ಸಭೆ ಯಾವುದೇ ನಿರ್ದಿಷ್ಟ ನಿರ್ಣಯಕ್ಕೆ ಬಂದಿಲ್ಲ. ವಿರೋಧಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಸಭೆಯಲ್ಲಿ ಭಾಗವಹಿಸಿದ್ದವು.

ತಮಿಳುನಾಡಿಗೆ ನೀರು ಬಿಡಬಾರದು ಎಂದು ಜೆಡಿಎಸ್ ಸರ್ಕಾರಕ್ಕೆ ಸಲಹೆ ನೀಡಿದೆ. ಬುಧವಾರ ಮತ್ತು ಗುರುವಾರ 6ಸಾವಿರ ಕ್ಯೂಸೆಕ್ ನೀರು ಬಿಡಲು ಕೋರ್ಟ್ ತಿಳಿಸಿತ್ತು. ಇದೀಗ  ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿದೆ.

ವಕೀಲ ಎಂ.ಆರ್.ನಾಯ್ಕ ಮಾತನಾಡಿ ಎರಡು ದಿನ ತಮಿಳುನಾಡಿಗೆ ನೀರು ಬಿಡಲು ಸೂಚಿಸಿದರು. ಆದರೆ ವಿರೋಧ ಪಕ್ಷಗಳು ಇದನ್ನು ಸಂಪೂರ್ಣವಾಗಿ ವಿರೋಧಿಸಿದ್ದು ಮುಖ್ಯಮಂತ್ರಿಗಳು ಎಲ್ಲ ಪಕ್ಷಗಳ ಅಭಿಪ್ರಾಯ ಪಡೆಯಲು ಸೂಚಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾದ್ಯಮಗಳೊಂದಿಗೆ ಮಾತನಾಡಿ ರಾಜ್ಯಕ್ಕೆ ಪೂರಕವಾದಂತಹ ನಿರ್ಧಾರವನ್ನು ಕೈಗೊಳ್ಳಲಾಗುವುದು .ನಾಳೆ ನಾವು ಕೇಂದ್ರ ಸರ್ಕಾರದ ಜಲಸಂಪನ್ಮೂಲ ಸಚಿವೆ ಉಮಾಭಾರತಿಯವರನ್ನು ಭೇಟಿಯಾಗಲಿದ್ದು ಈ ಕುರಿತು ಚರ್ಚೆ ನಡೆಸಿ ಒಂದು ನಿರ್ಧಾರಕ್ಕೆ ಬರಲಿದ್ದೇವೆ ಎಂದರು.

ಕೇಂದ್ರ ಕಾನೂನು ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ ವಿರೋಧ ಪಕ್ಷದ ನಾಯಕರ, ರೈತ ಮುಖಂಡರ ಅಭಿಪ್ರಾಯ ಎಲ್ಲವನ್ನೂ ಗಮನದಲ್ಲಿಟ್ಟು ತೀರ್ಮಾನಕ್ಕೆ ಬರಲಾಗುವುದು ಎಂದು ತಿಳಿಸಿದರು.

ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಶೋಭಾ ಕರಂದ್ಲಾಜೆ, ಎಚ್.ಡಿ.ಕುಮಾರಸ್ವಾಮಿ, ಡಿ.ವಿ.ಸದಾನಂದಗೌಡ, ವೀರಪ್ಪ ಮೊಯಿಲಿ, ಅನಂತಕುಮಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮೈಸೂರು ಮತ್ತು ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳು ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿವೆ. ಮೈಸೂರು ಜಿಲ್ಲಾ ನ್ಯಾಯಾಲಯದ ಎದುರು ಕರ್ನಾಟಕ ಕಾವಲು ಪಡೆ ಪ್ರತಿಭಟನೆ ನಡೆಸಿತು. ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ತಮಿಳುನಾಡಿಗೆ ನೀರು ಬಿಡದಂತೆ ಒತ್ತಾಯಿಸಲಾಯಿತು. ಮಂಡ್ಯದಲ್ಲಿ ರೈತರು ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

Leave a Reply

comments

Related Articles

error: