Uncategorized

ನೇಕಾರ ಸಮ್ಮಾನ್ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಜು.6-ನೇಕಾರ ಸಮ್ಮಾನ್ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು.

ನೇಕಾರ ಸಮ್ಮಾನ್ ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಬಿಎಸ್ವೈ ಚಾಲನೆ ನೀಡಿದರು. ಮೊದಲನೇ ಹಂತದಲ್ಲಿ 19,744 ಕೈಮಗ್ಗ ನೇಕಾರರಿಗೆ ನೇರ ನಗದು ವರ್ಗಾವಣೆ ಮಾಡುವ ಮುಖಾಂತರ ಪ್ರತಿ ನೇಕಾರರಿಗೆ 2,000 ರೂಪಾಯಿ ವಾರ್ಷಿಕ ಆರ್ಥಿಕ ನೆರವನ್ನು ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಗೆ ಮಾಡಲಾಗುತ್ತಿದೆ.

ಯಡಿಯೂರಪ್ಪ ಅವರು ಮಾತನಾಡಿ, ರಾಜ್ಯದಲ್ಲಿನ ರೇಷ್ಮೆ, ಹತ್ತಿ ಹಾಗೂ ಉಣ್ಣೆ ವಲಯದ ಕೈಮಗ್ಗ ಮತ್ತು ಪೂರಕ ಚಟುವಟಿಕೆಗಳಲ್ಲಿ ತೊಡಗಿರುವ ಕೈಮಗ್ಗ ನೇಕಾರರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ನಾಲ್ಕನೇ ರಾಷ್ಟ್ರೀಯ ಕೈಮಗ್ಗ ಗಣತಿಯ ಪ್ರಕಾರ ರಾಜ್ಯದಲ್ಲಿ ಒಟ್ಟು 54,789 ಕೈಮಗ್ಗ ನೇಕಾರರು ನೋಂದಣಿ ಮಾಡಿಕೊಂಡಿದ್ದಾರೆ. ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ ಪ್ರತಿ ವರ್ಷ 10.96 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದರು.

ಈವರೆಗೆ 40,634 ಕೈಮಗ್ಗ ನೇಕಾರರು ಸೇವಾ ಸಿಂಧು ತಂತ್ರಾಂಶದಲ್ಲಿ ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 37,314 ಅರ್ಜಿಗಳನ್ನು ಪರಿಶೀಲಿಸಿ ಅನುಮೋದನೆ ನೀಡಲಾಗಿದೆ. ಇನ್ನುಳಿದ ಅರ್ಹ ಫಲಾನುಭವಿಗಳಿಗೂ ಮುಂದಿನ ದಿನಗಳಲ್ಲಿ ಆರ್ಥಿಕ ನೆರವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು. ಕೈಮಗ್ಗ ಗಣತಿಯಲ್ಲಿ ನೇಕಾರರ ಮಾಹಿತಿ ಬಿಟ್ಟು ಹೋಗಿದ್ದರೆ ಅಂಥವರಿಗೂ ಈ ಯೋಜನೆಯಲ್ಲಿ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಇದರೊಂದಿಗೆ ವಿದ್ಯುತ್ ಮಗ್ಗ ಘಟಕಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 1.25 ಲಕ್ಷ ಕೂಲಿ ಕೆಲಸಗಾರರಿಗೆ 2 ಸಾವಿರ ರೂಪಾಯಿ ಒಂದು ಬಾರಿಯ ಪರಿಹಾರ ಧನವನ್ನು ವಿತರಿಸಲಾಗುತ್ತಿದ್ದು, ಈವರೆಗೆ ಅನುಮೋದಿಸಲಾದ, 8897 ಅರ್ಜಿದಾರರಿಗೆ ಡಿಬಿಟಿ ಮೂಲಕ ಪರಿಹಾರ ವಿತರಣೆಗೆ ಚಾಲನೆ ನೀಡಲಾಯಿತು.

ಜವಳಿ ಸಚಿವ ಶ್ರೀಮಂತ ಪಾಟೀಲ, ಎಂಎಸ್‌ಎಂಇ, ಕೈಮಗ್ಗ ಮತ್ತು ಜವಳಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ. ಮಹೇಶ್ವರ ರಾವ್, ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಉಪೇಂದ್ರ ಪ್ರತಾಪ್ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಇದ್ದರು. (ಎಂ.ಎನ್)

 

Leave a Reply

comments

Related Articles

error: