ಪ್ರಮುಖ ಸುದ್ದಿ

ಆಶಾ ಕಾರ್ಯಕರ್ತರ ಅಸಮಾಧಾನ : ಇಂದು ಮಡಿಕೇರಿಯಲ್ಲಿ ಪ್ರತಿಭಟನೆ

ರಾಜ್ಯ( ಮಡಿಕೇರಿ) ಜು.29 :- ಕೊರೋನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಾಮಾಣಿಕವಾಗಿ ಹಗಲಿರುಳೆನ್ನದೆ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ ಎಂದು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕೊಡಗು ಜಿಲ್ಲಾ ಘಟಕ ಆರೋಪಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯ ಚಂದ್ರಶೇಖರ್ ಮೇಟಿ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಜು.29 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದೆಂದು ತಿಳಿಸಿದರು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬುಧವಾರ ಬೆಂಗಳೂರಿನಲ್ಲಿ “ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ” ಹಾಕುವ ಹೋರಾಟವಿದ್ದು, ಇದಕ್ಕೆ ಸಾಂಕೇತಿಕ ಪ್ರತಿಭಟನೆಯ ಮೂಲಕ ಜಿಲ್ಲಾ ಸಂಘ ಬೆಂಬಲ ಸೂಚಿಸುತ್ತಿದೆ ಎಂದರು.
ಮನೆ ಮನೆಗಳಿಗೆ ತೆರಳಿ ಜನರ ಯೋಗಕ್ಷೇಮ ವಿಚಾರಿಸುತ್ತಿರುವ ಆಶಾ ಕಾರ್ಯಕರ್ತೆಯರ ಸೇವೆಯನ್ನು ಇಡೀ ಗ್ರಾಮೀಣ ಪ್ರದೇಶವೇ ಕೊಂಡಾಡುತ್ತಿದೆ. ಅಲ್ಲದೆ ಕೊರೋನಾ ಸೋಂಕು ವ್ಯಾಪಿಸುತ್ತಿರುವ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರಿಗೆ ಕನಿಷ್ಠ ಸೌಲಭ್ಯವನ್ನು ನೀಡದೆ ಇರುವುದು ಖಂಡನೀಯವೆಂದರು.
ಅಸಹಾಯಕ ಬಡ ಮಹಿಳೆಯರು, ವಿಧವೆಯರು, ವಿಚ್ಛೇದಿತರನ್ನು ಆಶಾ ಕಾರ್ಯಕರ್ತತೆಯರನ್ನಾಗಿ ನೇಮಕ ಮಾಡಿಕೊಂಡು ಆರ್ಥಿಕ ಶಕ್ತಿ ತುಂಬುವ ಮಾತುಗಳನ್ನು ಸರ್ಕಾರ ಆಡುತ್ತಿದೆ. ಆದರೆ ಕಾರ್ಯಕರ್ತರ ಶ್ರಮಕ್ಕೆ ತಕ್ಕ ಪ್ರತಿಫಲ ಇಲ್ಲಿಯವರೆಗೆ ಸಿಕ್ಕಿಲ್ಲವೆಂದು ಚಂದ್ರಶೇಖರ್ ಆರೋಪಿಸಿದರು.
ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಆ ಸಂದರ್ಭ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಏ.1 ರಿಂದ ಒಂದು ಸಾವಿರ ರೂಪಾಯಿ ಗೌರವ ಧನವನ್ನು ಹೆಚ್ಚಿಸುವುದಾಗಿ ಭರವಸೆ ನೀಡಿದ್ದರು. ಆದರೆ ತಿಂಗಳುಗಳೇ ಕಳೆದರು ವೇತನ ಮಾತ್ರ ಹೆಚ್ಚಾಗಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಜು.10 ರಿಂದ ಸಂಪೂರ್ಣ ಕೆಲಸ ಸ್ಥಗಿತಗೊಳಿಸಿ ವಿವಿಧ ಮಾದರಿಯ ಹೋರಾಟಗಳನ್ನು ಹಮ್ಮಿಕೊಳ್ಳುವ ಮೂಲಕ ಸರ್ಕಾರದ ಗಮನ ಸೆಳೆಯಲಾಗಿತ್ತು. ಆದರೆ 16 ದಿನಗಳೇ ಕಳೆದರೂ ಯಾವುದೇ ಸ್ಪಂದನೆ ದೊರತ್ತಿಲ್ಲ. ಈ ಕಾರಣದಿಂದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವ ಹೋರಾಟವನ್ನು ರೂಪಿಸಲಾಗಿದೆ ಎಂದು ತಿಳಿಸಿದ ಅವರು, ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ವಿವಿಧ ತಾಲ್ಲೂಕುಗಳ ಮೂವತ್ತು ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸಲಿದ್ದಾರೆ ಎಂದರು.
ಸಂಘದ ಜಿಲ್ಲಾಧ್ಯಕ್ಷರಾದ ತೆಕ್ಕಡೆ ಪೂರ್ಣಿಮಾ ಬಸಪ್ಪ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ 480 ಆಶಾ ಕಾರ್ಯಕರ್ತೆಯರಿದ್ದು, ಕಳೆದ 12 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಕೊಡಗಿನಂತ ಬೆಟ್ಟಗುಡ್ಡದ ಪ್ರದೇಶದಲ್ಲಿ ಶ್ರಮವಹಿಸಿ ಗರ್ಭಿಣಿ ಮಹಿಳೆಯರ ಸುರಕ್ಷತೆ, ಹೆರಿಗೆ, ಸ್ವಸ್ಥ ಶಿಶುವಿನ ಜನನ, ಆರೈಕೆ ಹಾಗೂ ಆರೋಗ್ಯದ ಬಗ್ಗೆ ಗಮನ ಹರಿಸಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಕೊರೋನಾ ಸಂದಿಗ್ಧ ಪರಿಸ್ಥಿತಿಯಲ್ಲೂ ಆಶಾ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಕಾರ್ಯನಿರ್ವಹಿಸಿದ್ದಾರೆ. ಆದರೆ ಸರ್ಕಾರಕ್ಕೆ ಮಾತ್ರ ನಮ್ಮ ಮೇಲೆ ಕರುಣೆ ಇಲ್ಲವೆಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಸಮಿತಿ ಸದಸ್ಯೆ ಝರಾ ಉಪಸ್ಥಿತರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: