ಮೈಸೂರು

ಸಿಎಂ ಸೌಜನ್ಯದ ಭೇಟಿ ನೀಡಿದ್ದಾರೆ : ನರಸಿಂಹಸ್ವಾಮಿ ಹೇಳಿಕೆ; ಬೆಂಬಲ ನೀಡುವಂತೆ ಕೇಳಿದ್ದೇನೆ : ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಮನೆಗೆ ಸೌಜನ್ಯದ ಭೇಟಿ ನೀಡಿದ್ದಾರೆ. ಬಹಳ ವರ್ಷಗಳಿಂದಲೂ ಸಿದ್ದರಾಮಯ್ಯ ನನಗೆ ಆಪ್ತರಾಗಿದ್ದಾರೆ ಎಂದು ಮೈಸೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ನರಸಿಂಹಸ್ವಾಮಿ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂಜಗೂಡು ಪಟ್ಟಣದ ರಾಷ್ಟ್ರಪತಿ ರಸ್ತೆಯ 12 ನೇ ಕ್ರಾಸ್ ನಲ್ಲಿರುವ ನರಸಿಂಹಸ್ವಾಮಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಈ  ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಒಂದು ವರ್ಷ ಮಾತ್ರ ಬಾಕಿ ಇರುವುದರಿಂದ ನಂಜನಗೂಡು ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಹೀಗಾಗಿ ಮತಯಾಚನೆ ಮಾಡಲು ನಂಜನಗೂಡಿಗೆ ಬಂದಿದ್ದ ಸಿದ್ದರಾಮಯ್ಯ ನಮ್ಮ ಮನೆಗೂ ಬಂದು ಮತಯಾಚನೆ ಮಾಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕಣದಲ್ಲಿ ಇಲ್ಲದಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ, ಸಹಕಾರ  ನೀಡುವಂತೆ ಕೇಳಿದ್ದಾರೆ. ಆದರೆ ನಾವು ತಟಸ್ಥರಾಗಿರುವುದಾಗಿ ತಿಳಿಸಿದ್ದೇವೆ. ಈ ವಿಚಾರದಲ್ಲಿ ಜೆಡಿಎಸ್ ವರಿಷ್ಠರು ನಮಗೆ ಯಾವುದೇ ಆದೇಶ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಚಿವರಾದ ಎಚ್.ಸಿ ಮಹದೇವಪ್ಪ,  ಸಂಸದ ಆರ್. ಧ್ರುವನಾರಾಯಣ್ ರಿಂದ ಸಿ.ಎಂ ಸಿದ್ದರಾಮಯ್ಯ ಜೊತೆಗಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಂಜನಗೂಡು ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಜೆಡಿಎಸ್ ಪಕ್ಷದ ಬೆಂಬಲ ನೀಡುವಂತೆ ಕೇಳಿಕೊಂಡಿದ್ದೇನೆ. ಮೈಸೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ನರಸಿಂಹಸ್ವಾಮಿ ನನಗೆ ಒಳ್ಳೆಯ ಸ್ನೇಹಿತನೂ ಆಗಿದ್ದಾನೆ.
ಹೀಗಾಗಿ ಚುನಾವಣಾ ಪ್ರಚಾರ ಮುಗಿದನಂತರ ಅವರ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿಗೆ ಜೆಡಿಎಸ್ ಬೆಂಬಲ ನೀಡುವಂತೆ ಕೋರಿದ್ದೇನೆ. ಇಡೀ ದಿನ ನಂಜನಗೂಡು ಕ್ಷೇತ್ರದ ಇಪ್ಪತ್ತಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಿದ್ದೇನೆ. ಎಲ್ಲ ಕಡೆ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗಿದೆ ಎಂದರು. ಸಿದ್ದರಾಮಯ್ಯ ಲಿಂಗಾಯತ ಸಮುದಾಯದ ವಿರೋಧಿ ಎಂಬ ಮಾತುಗಳು ಕೇಳಿ ಬರುತ್ತಿರುವುದಕ್ಕೆ ಅತ್ಯಂತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು ನಾನು ಯಾರ ವಿರೋಧಿಯೂ ಅಲ್ಲ. ಈ ರೀತಿಯ ಮಾತುಗಳನ್ನು ಚುನಾವಣೆ ಸಂದರ್ಭದಲ್ಲಿ  ಅಪಪ್ರಚಾರಕ್ಕಾಗಿ ಹುಟ್ಟು ಹಾಕಲಾಗಿದೆ. ನಾನು ಮಾನವೀಯತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದೇನೆ, ಮಾನವೀಯ ಮೌಲ್ಯಗಳಿಗೆ ಬೆಲೆ ಕೊಡುತ್ತೇನೆಂದು ಸ್ಪಷ್ಟಪಡಿಸಿದರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: