
ದೇಶಪ್ರಮುಖ ಸುದ್ದಿ
ಸುಶಾಂತ್ ಸಿಂಗ್ ಸಾವಿನ ಪ್ರಕರಣ ಸಿಬಿಐ ತನಿಖೆಗೆ: ಸುಪ್ರೀಂ ಕೋರ್ಟ್ ತೀರ್ಪು
ನವದೆಹಲಿ,ಆ.19-ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿ ಸುಪ್ರೀಂಕೋರ್ಟ್ ಇಂದು ಆದೇಶಿಸಿದೆ.
ಸುಶಾಂತ್ ಪ್ರೇಯಸಿ, ನಟಿ ರಿಯಾ ಚಕ್ರವರ್ತಿ ತನಿಖೆಯನ್ನು ಬಿಹಾರದಿಂದ ಮುಂಬೈಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.
ತನಿಖೆಗೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಿಬಿಐಗೆ ವರ್ಗಾಯಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಬಿಹಾರದ ಪಾಟ್ನಾದಲ್ಲಿ ಸುಶಾಂತ್ ಸಾವಿನ ಪ್ರಕರಣದಲ್ಲಿ ಬಿಹಾರ ಪೊಲೀಸರು ದಾಖಲಿಸಿರುವ ಎಫ್ಐಆರ್ ಸರಿಯಾಗಿದ್ದು, ಸಿಬಿಐಗೆ ತನಿಖೆಯನ್ನು ವರ್ಗಾಯಿಸುವುದು ಕಾನೂನಾತ್ಮಕವಾಗಿ ಸರಿಯಾಗಿದೆ. ಮಹಾರಾಷ್ಟ್ರ ಸರ್ಕಾರ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನಿರಾಕರಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇದರಿಂದ ರಿಯಾ ಚಕ್ರವರ್ತಿ ಸೇರಿದಂತೆ ಪಾಟ್ನಾ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿನ ಆರೋಪಿಗಳಿಗೆ ಸಂಕಷ್ಟ ಎನ್ನಬಹುದು. ಇದು ಸುಶಾಂತ್ ಸಿಂಗ್ ರಜಪೂತ್ ಕುಟುಂಬಸ್ಥರಿಗೆ ಸಿಕ್ಕಿದ ಆರಂಭಿಕ ಗೆಲುವಾಗಿದೆ. ನಮ್ಮ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ಬಂದಿದೆ. ಪಾಟ್ನಾ ಕೋರ್ಟ್ ನಲ್ಲಿ ದಾಖಲಾಗಿರುವ ಎಫ್ ಐಆರ್ ಸರಿಯಾಗಿದೆ ಎಂದು ನ್ಯಾಯಾಲಯ ಹೇಳಿದೆ ಎಂದು ಸುಶಾಂತ್ ಸಿಂಗ್ ತಂದೆ ಕೆಕೆ ಸಿಂಗ್ ಅವರ ಪರ ವಕೀಲ ವಿಕಾಸ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಸಾವಿಗೀಡಾಗಿ ಸುಮಾರು 65 ದಿನಗಳ ಬಳಿಕ ಅವರ ಸಾವಿನ ಹಿಂದಿನ ರಹಸ್ಯ ತಿಳಿಯಲು ಸಿಬಿಐ ತನಿಖೆಯೇ ನಡೆಯಬೇಕೆಂಬ ಹೋರಾಟಕ್ಕೆ ಗೆಲುವು ಸಿಕ್ಕಂತಾಗಿದೆ. ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸುಶಾಂತ್ ಸಿಂಗ್ ಅಭಿಮಾನಿಗಳು ಮತ್ತು ಕುಟುಂಬದವರು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಜೂನ್ 14ರಂದು ಮುಂಬೈಯ ತಮ್ಮ ಫ್ಲಾಟ್ ನಲ್ಲಿ ಸುಶಾಂತ್ ಸಿಂಗ್ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೊದಲಿಗೆ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಅವರ ಸಾವಿನ ಬಗ್ಗೆ ಶಂಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಅನೇಕರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. (ಎಂ.ಎನ್)