ಕರ್ನಾಟಕಪ್ರಮುಖ ಸುದ್ದಿ

ಭೂ ಸುಧಾರಾಣಾ ಕಾಯ್ದೆಗೆ ತಿದ್ದುಪಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ಬೆಂಗಳೂರು,ಆ.27-ಭೂ ಸುಧಾರಣಾ ಕಾಯ್ದೆಗೆ ಮಾಡಿರುವ ತಿದ್ದುಪಡಿಯನ್ನು ಹಿಂದಕ್ಕೆ ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಭೂ ಸುಧಾರಣಾ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರವನ್ನು ಬರೆಯುವ ಮೂಲಕ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಆಗುವ ಅನ್ಯಾಯದ ಬಗ್ಗೆ ವಿವರಿಸಿದ್ದಾರೆ.

ಕೃಷಿ ಭಾರತದ ಪ್ರಧಾನ ಅಂಗವಾಗಿದ್ದು, ಈ ನಿಟ್ಟಿನಲ್ಲಿ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವುದು ಅಗತ್ಯವಾಗಿದೆ. ಗ್ರಾಮೀಣ ಭಾರತದಲ್ಲಿ ಕೃಷಿ ಭೂಮಿ ರೈತರ ಪಾಲಿಗೆ ಭಾವನಾತ್ಮಕ ವಿಚಾರವಾಗಿದೆ. ಆದರೆ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯ ಸರ್ಕಾರ ರೈತ ವಿರೋಧಿ ನಡೆಯನ್ನು ಅನುಸರಿಸಿದೆ ಎಂದಿದ್ದಾರೆ.

ಭೂ ಸುಧಾರಣಾ ಕಾಯ್ದೆ ತಳಸಮುದಾಯಕ್ಕೆ ಭೂಮಿ ಹೊಂದುವ ಹಕ್ಕನ್ನು ನೀಡಿತ್ತು. ಭೂ ಮಾಲೀಕ ಅಡಿಯಾಳಾಗಿ ಜೀವನ ಸಾಗಿಸಬೇಕಾಗದ ಪದ್ಧತಿಯನ್ನು ಕೊನೆಗಾಣಿಸಿತ್ತು. ಸಾಮಾಜಿಕ ಆರ್ಥಿಕ ರಾಜಕೀಯ ಅನ್ಯಾಯದ ವಿರುದ್ಧ ಹೋರಾಟ ನಡೆಸಲು ತಳಸಮುದಾಯಕ್ಕೆ ಅವಕಾಶ ನೀಡಿತ್ತು.

ಆದರೆ ಇದೀಗ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸರ್ಕಾರ ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ರೈತರ ವಿರೋಧಿ ನಡೆಗಳು ದೇಶದ ಅಭಿವೃದ್ಧಿಗೆ ಮಾರಕವಾಗಿ ಪರಿಣಮಿಸಬಹುದು.ಈ ನಿಟ್ಟಿನಲ್ಲಿ ಕಾಯ್ದೆ ತಿದ್ದುಪಡಿ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಸೂಚಿಸುವಂತೆ ಪತ್ರದಲ್ಲಿ ಕೋರಲಾಗಿದೆ.

ರಾಜ್ಯ ಸರ್ಕಾರ 1961 ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿದೆ. ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಿದೆ. ಕಾಯ್ದೆ ತಿದ್ದುಪಡಿಗೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. (ಎಂ.ಎನ್)

Leave a Reply

comments

Related Articles

error: