ಮೈಸೂರು

ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಸೆ.11:- 2017ರಲ್ಲಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದರೂ ವರದಿಯನ್ನು ಜಾರಿ ಮಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ಕನ್ನಡ ವಿರೋಧಿ ನೀತಿಯನ್ನು ಖಂಡಿಸಿ, ವರದಿಯ ಜಾರಿಗೆ ಒತ್ತಾಯಿಸಿ ಕದಂಬ ಸೈನ್ಯ ಕನ್ನಡ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಯಿತು.
ಜಿಲ್ಲಾಧಿಕಾರಿಗಳ ಕಛೇರಿ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಲಕ್ಷಾಂತರ ಉದ್ಯೋಗ ಹೊರ ರಾಜ್ಯದವರ ಪಾಲಾಗಿದೆ. ಮೂರು ದಶಕಗಳಿಂದ ಹೋರಾಟ ನಡೆಯುತ್ತಿದ್ದರೂ ರಾಜ್ಯ ಸರ್ಕಾರಗಳು ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಾಯಿದೆ ಜಾರಿ ಮಾಡಲಿಲ್ಲ. ವರದಿಯಲ್ಲೇ ಕನ್ನಡಿಗರ ಉದ್ಯೋಗ ಕಳೆದುಹೋಗಿದೆ. ಸದನದಲ್ಲಿ ವರದಿಯನ್ನು ಮಂಡನೆ ಮಾಡಿ ಕಾಯಿದೆಯಾಗಿ ಇದುವರೆಗೂ ಜಾರಿಗೆ ತರಲಿಲ್ಲ. ಯಡಿಯೂರಪ್ಪನವರ ಸರ್ಕಾರ ಮೀನಾ ಮೇಷ ಎಣಿಸುತ್ತಿದೆ. ರಾಜ್ಯ ಸರ್ಕಾರ ಕನ್ನಡಿಗರಿಗೆ ಉದ್ಯೋಗ ಸಿಗಬೇಕೆಂಬ ಉದ್ದೇಶದಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದು ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುವುದನ್ನು ಜಾರಿಗೆ ತರಲು ಏಕೆ ವಿಳಂಬ ಮಾಡುತ್ತಿದೆ ಎಂದು ಪ್ರಶ್ನಿಸಿದರು. ಕನ್ನಡಿಗರಿಗೆ ಉದ್ಯೋಗಕ್ಕಾಗಿ ಪರಿಷ್ಕೃತ ವರದಿಯನ್ನು ಜಾರಿಗೆ ತರದಿದ್ದರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಏಕೆ ಬೇಕು. ಪ್ರಾಧಿಕಾರ ಅಧಿಕಾರವಿಲ್ಲದ ಪ್ರಾಧಿಕಾರವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅನ್ಯಾಯದ ವಿರುದ್ಧ ಹೋರಾಟ ಮಾಡಿದವರಲ್ಲಿ ಪ್ರಮುಖರು ಎಂಬುದನ್ನು ಮರೆಯದೆ ಕನ್ನಡಿಗರಿಗೆ ಉದ್ಯೋಗ ದೊರಕಿಸಿಕೊಡುವಲ್ಲಿ ಮಹತ್ವವಾದಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಸದನದಲ್ಲಿ ಮಂಡನೆ ಮಾಡಿ ಕಾಯಿದೆಯಾಗಿ ಜಾರಿಗೆ ತರಬೇಕೆಂದು ಒತ್ತಾಯಿಸಿದರು. ಸೆ.21ರಂದು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಸದನದಲ್ಲಿ ಮಂಡಿಸಿ ಕಾಯ್ದೆಯಾಗಿ ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್, ಮೈಸೂರು ಜಿಲ್ಲಾಧ್ಯಕ್ಷ ಎ.ನಾಗೇಂದ್ರ, ಮೈಸೂರು ವಿಭಾಗ ಸಂಚಾಲಕ ಎನ್.ವೆಂಕಟೇಶ್, ಟಿ.ನರಸೀಪುರ ತಾಲೂಕು ಅಧ್ಯಕ್ಷ ಮಹದೇವ ನಾಯ್ಕ್, ಉಮ್ಮಡಳ್ಳಿ ನಾಗೇಶ್, ಪದಾಧಿಕಾರಿಗಳು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: