ದೇಶಪ್ರಮುಖ ಸುದ್ದಿ

ಹತ್ರಾಸ್ ನತ್ತ ಹೊರಟ್ಟಿದ್ದ ರಾಹುಲ್ ಗಾಂಧಿ: ಪೊಲೀಸರ ವಶಕ್ಕೆ; ಪೊಲೀಸರೊಂದಿಗಿನ ಜಟಾಪಟಿ ವೇಳೆ ಕೆಳಗೆ ಬಿದ್ದ ರಾಹುಲ್

ನೊಯ್ಡಾ/ಜೇವರ್‌(ಉತ್ತರ ಪ್ರದೇಶ),ಅ.1-ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರ ಹಾಗೂ ಹಲ್ಲೆಗೆ ಒಳಗಾಗಿ ಮೃತಪಟ್ಟ ಸಂತ್ರಸ್ತ ಯುವತಿಯ ಕುಟುಂಬದವರನ್ನು ಭೇಟಿಯಾಗಲು ಹೊರಟ್ಟಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಉತ್ತರ ಪ್ರದೇಶ ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ.

ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾಗಲು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಸೇರಿದಂತೆ ನೂರಾರು ಕಾರ್ಯಕರ್ತರೊಂದಿಗೆ ಹತ್ರಾಸ್‌ಗೆ ತೆರಳುತ್ತಿದ್ದ ರಾಹುಲ್ ಗಾಂಧಿಯವರ ವಾಹನಗಳನ್ನು ಪೊಲೀಸರು ಗ್ರೇಟರ್‌ ನೊಯ್ಡಾ ಬಳಿ ಪರಿಚೌಕದಲ್ಲಿ ತಡೆದಿದ್ದರು. ನಂತರ ರಾಹುಲ್, ಪ್ರಿಯಾಂಕಾ ಸೇರಿದಂತೆ ನೂರಾರು ಕಾರ್ಯಕರ್ತರು ಕಾಲ್ನಡಿಗೆಯಲ್ಲೇ ಹತ್ರಾಸ್‌ನತ್ತ ಹೊರಟರು. ಈ ವೇಳೆ ಪ್ರಿಯಾಂಕಾ, ರಾಹುಲ್ ಇಬ್ಬರನ್ನು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಲಾಯಿತು.

ಪಾದಯಾತ್ರೆ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಈ ವೇಳೆ ರಾಹುಲ್ ಗಾಂಧಿಯನ್ನು ತಳ್ಳಿದ ಪರಿಣಾಮ ಅವರು ಹೆದ್ದಾರಿಯ ಪಕ್ಕ ಬಿದ್ದರು. ರಾಹುಲ್ ಗಾಂಧಿ ಜಾರಿ ಬೀಳುತ್ತಿದ್ದಂತೇ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಹೆದ್ದಾರಿಯಲ್ಲಿ ತಮ್ಮ ಯಾತ್ರೆಯನ್ನು ತಡೆದ ಪೊಲೀಸರು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರಲ್ಲದೇ, ಹಲ್ಲೆಗೂ ಮುಂದಾದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕಳೆದ ವರ್ಷ ಇದೇ ಸಮಯದಲ್ಲಿ ನಾವು ಉನ್ನಾವೊದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಅತ್ಯಾಚಾರ ಪ್ರಕರಣದ ವಿರುದ್ಧ ಹೋರಾಟ ಮಾಡುತ್ತಿದ್ದೆವು. ಈ ಘಟನೆ ನಡೆದು ಒಂದು ವರ್ಷ ಕಳೆದರೂ, ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ಬದಲಾಗಿಲ್ಲ ಎಂದರು.

ಉತ್ತರ ಪ್ರದೇಶದಲ್ಲಿ ಮಹಿಳೆಯರ ಭದ್ರತೆಯನ್ನು ಖಾತರಿಪಡಿಸುವವರೆಗೂ ನಮ್ಮ ಪಕ್ಷ ಹೋರಾಟ ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸಿರುವ ಪ್ರಿಯಾಂಕಾ, ಈ ಹೋರಾಟದ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿ, ಎಚ್ಚರಗೊಳಿಸುವುದನ್ನು ಬಿಟ್ಟು ಬೇರೆ ದಾರಿ ಇಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 19 ವರ್ಷದ ದಲಿತ ಮಹಿಳೆ ಮೇಲಿನ ಅತ್ಯಾಚಾರ ಮತ್ತು ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ರಾಜ್ಯದಲ್ಲಿ ಮಹಿಳೆಯರಿಗೆ ಭದ್ರತೆ ನೀಡುವ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿರುವ ಪೊಲೀಸರು, ಕೊರೊನಾ ಹಾವಳಿಯ ಹಿನ್ನೆಲೆಯಲ್ಲಿ ಭಾರೀ ಗುಂಪನ್ನು ರಾಜ್ಯದೊಳಗೆ ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: