ಮೈಸೂರು

ಹತ್ರಾಸ್ ಪ್ರಕರಣ : ಅತ್ಯಾಚಾರಿಗಳನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಅ.4:- ಉತ್ತರ ಪ್ರದೇಶದ ಹತ್ರಾಸ್ ‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ನಗರದಲ್ಲಿ ಭಾನುವಾರವೂ ಪ್ರತಿಭಟನೆಗಳು ನಡೆದವು.

ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್‌ ವತಿಯಿಂದ ಎಫ್‌ಟಿಎಸ್‌ ವೃತ್ತದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಮಾತನಾಡಿ ದೇಶದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿರುವುದಕ್ಕೆ ಈ ಘಟನೆಯೇ ಸಾಕ್ಷಿ. ಘಟನೆ ನಡೆದು 15 ದಿನಗಳ ಬಳಿಕ ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ. ಸರ್ಕಾರಕ್ಕೆ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗದವರ ಮೇಲೆ ಇರುವ ಕಾಳಜಿ ಏನು ಎಂಬುದನ್ನು ಇದು ತೋರಿಸುತ್ತದೆ ಎಂದು ದೂರಿದರು.
ಉತ್ತರ ಪ್ರದೇಶದಲ್ಲಿ ಗೂಂಡಾ ಸರ್ಕಾರ ಇದೆ. ಯೋಗಿ ಆದಿತ್ಯನಾಥ್‌ ಅವರು ಜನಸಾಮಾನ್ಯರಿಗೆ ಭದ್ರತೆ ನೀಡುವಲ್ಲಿ ವಿಫಲರಾಗಿದ್ದಾರೆ. ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದ್ದು, ಭಯದಿಂದ ಬದುಕುವಂತಾಗಿದೆ. ‍ ಪ್ರಧಾನಿ ಮಧ್ಯಪ್ರವೇಶಿಸಿ ಮಹಿಳೆಯರ ರಕ್ಷಣೆಗೆ ಕ್ರಮವಹಿಸಬೇಕು. ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.

ಯುವ ಕಾಂಗ್ರೆಸ್‌ ಉಪಾಧ್ಯಕ್ಷ ರಾಘವೇಂದ್ರ, ಎಸ್‌ಸಿ ಘಟಕದ ಅಧ್ಯಕ್ಷ ಸುನಂದ್‌ಕುಮಾರ್, ಜಗದೀಶ್‌, ಉದಯಕುಮಾರ್‌, ರಾಜು, ಎಸ್.ರಾಜೇಶ್‌, ನಂಜುಂಡ, ಪ್ರಕಾಶ್‌ ಮತ್ತಿತರರು ಪಾಲ್ಗೊಂಡಿದ್ದರು.

ಕರ್ನಾಟಕ ಪ್ರಜಾ ಪಾರ್ಟಿ ವತಿಯಿಂದ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಯಿತು. ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಯೋಗಿ ಆದಿತ್ಯನಾಥ್‌ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಅತ್ಯಾಚಾರಿಗಳನ್ನು ಬಂಧಿಸಿ, ಗಲ್ಲಿಗೇರಿಸಬೇಕು. ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ರಾಜ್ಯಾಧ್ಯಕ್ಷ ಡಾ.ಬಿ.ಶಿವಣ್ಣ, ರಾಜ್ಯ ಜಂಟಿ ಕಾರ್ಯದರ್ಶಿ ಬಿ.ಆರ್‌.ಲೋಕೇಶ್, ಮೈಸೂರು ನಗರ ಅಧ್ಯಕ್ಷ ಎನ್‌.ಹರೀಶ್ ಇತರರು ಭಾಗವಹಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: