ಪ್ರಮುಖ ಸುದ್ದಿಮೈಸೂರು

ಮುನ್ನೆಚ್ಚರಿಕೆ ಕ್ರಮ ಅನುಸರಿಸಿ ದಸರಾ ಆಚರಿಸಿ: ಸಚಿವ ಡಾ.ಕೆ.ಸುಧಾಕರ್

ಮೈಸೂರು,ಅ.5:- ನಾಡಹಬ್ಬ ದಸರೆಯನ್ನು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಮೂಲಕ ಅತ್ಯಂತ ಸುರಕ್ಷಿತವಾಗಿ ಆಚರಿಸಿ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಅಧಿಕಾರಿಗಳಿಗೆ ತಿಳಿಸಿದರು.
ಇಂದು ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಸೋಂಕು ನಿರ್ವಹಣೆಯಲ್ಲಿ ಮೈಸೂರು ಜಿಲ್ಲೆಯ ವೈದ್ಯಕೀಯ ಸೌಲಭ್ಯಗಳ ಪರಿವೀಕ್ಷಣೆ ಮತ್ತು ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.ಮೈಸೂರು ಜಿಲ್ಲೆಯು ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ನಗರ ಎಂದು ಹೆಸರುವಾಸಿಯಾಗಿದ್ದು, ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ವಿಶ್ವವಿಖ್ಯಾತ ದಸರಾ ಹಬ್ಬವು ಸಮೀಪಿಸುತ್ತಿದೆ. ಆದರೆ ಇತ್ತೀಚಿಗೆ ಜಿಲ್ಲೆಯಲ್ಲಿ ಕೋವಿಡ್-19 ಹೆಚ್ಚುತ್ತಿದ್ದು, ಸೋಂಕನ್ನು ನಿಯಂತ್ರಿಸಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜನರ ನಿರ್ಲಕ್ಷ್ಯ ಧೋರಣೆಯಿಂದಾಗಿ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಆದ್ದರಿಂದ ಹೆಚ್ಚಿನ ಜನಸಂದಣಿ ಉಂಟಾಗುವ ಎಲ್ಲಾ ಮಾರುಕಟ್ಟೆಗಳು, ಬಸ್ ನಿಲ್ದಾಣಗಳಲ್ಲಿ ಪರೀಕ್ಷೆ ನಡೆಸಿ. ಅಲ್ಲದೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಅನುಷ್ಠಾನಕ್ಕೆ ತರಬೇಕು ಎಂದು ಸೂಚಿಸಿದರು.
ಕೊರೋನಾ ಸೋಂಕು ಎಂಬುದು ಸೀಮಿತ ದಿನಗಳವರೆಗೆ ಇರುವ ಖಾಯಿಲೆ ಅಲ್ಲ. ಇದೊಂದು ದೀರ್ಘಕಾಲದ ಹೋರಾಟವಾಗಿದ್ದು, ಸೋಂಕನ್ನು ನಿಯಂತ್ರಿಸುವಲ್ಲಿ ಜನರ ಸಹಕಾರವು ಅಗತ್ಯವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ತಡೆಗಟ್ಟಲು ಪ್ರತೀ ಬೂತ್ ಮಟ್ಟದಲ್ಲಿ ಕಾರ್ಯಪಡೆಯನ್ನು ರಚಿಸಿ ಎಂದು ಸಲಹೆ ನೀಡಿದರು.ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಜೊತೆಗೆ ಸಾವಿನ ಪ್ರಮಾಣವು ಹೆಚ್ಚಾಗಿರುವುದು ಆತಂಕಕಾರಿ ವಿಷಯ. ಆದ್ದರಿಂದ ಜಿಲ್ಲಾದ್ಯಂತ ಇರುವ ಹಿರಿಯ ನಾಗರಿಕರನ್ನು ಗುರುತಿಸಿ, ಅವರಲ್ಲಿ ವಯೋಸಹಜ ಖಾಯಿಲೆಗಳಿಂದ ಬಳಲುತ್ತಿರುವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಿ ಎಂದರು.
ಜಿಲ್ಲೆಯ ಪ್ರತಿಯೊಬ್ಬ ಅಧಿಕಾರಿಯೂ ಕೋವೀಡ್-19 ನಿಯಂತ್ರಿಸುವ ಕೆಲಸಕ್ಕೆ ಪ್ರಥಮ ಆದ್ಯತೆ ನೀಡಬೇಕು. ನಂತರ ಇತರೆ ಕೆಲಸಗಳಲ್ಲಿ ನಿರತರಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೋಂಕು ನಿಯಂತ್ರಿಸುವಲ್ಲಿ ಗಂಭೀರವಾಗಿ ಪರಿಗಣಿಸಬೇಕು ಎಂದರು.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಇನ್ನೆರಡು ವಾರಗಳಲ್ಲಿ ಜಿಲ್ಲಾದ್ಯಂತ ಕೋವಿಡ್ ನಿಯಂತ್ರಿಸುವುದಕ್ಕೆ ಈಗಾಗಲೇ ಅನೇಕ ಕ್ರಮ ಕೈಕೊಳ್ಳಲಾಗಿದೆ. ಮೈಸೂರು ನಗರದ ಎಲ್ಲಾ ಮಾರುಕಟ್ಟೆಯ ವ್ಯಾಪಾರಸ್ಥರಿಗೆ ಪ್ರತಿ 15 ದಿನಗಳಿಗೊಮ್ಮೆ ಕೋವಿಡ್ ಪರೀಕ್ಷೆ ನಡೆಸಲು ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕ ಎಲ್.ನಾಗೇಂದ್ರ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಅಡಗೂರು ಎಚ್.ವಿಶ್ವನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಂ, ಉಪಾಧ್ಯಕ್ಷರಾದ ಎಂ.ವಿ.ಗೌರಮ್ಮ ಸೋಮಶೇಖರ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಡಿಸಿಪಿ ಪ್ರಕಾಶ್ ಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಇನ್ನಿತರರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್

Leave a Reply

comments

Related Articles

error: