
ಕರ್ನಾಟಕಪ್ರಮುಖ ಸುದ್ದಿ
ದಿವಂಗತ ಸುರೇಶ ಅಂಗಡಿ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಕ್ರಮ: ಸಿಎಂ ಬಿ.ಎಸ್.ಯಡಿಯೂರಪ್ಪ
ಬೆಳಗಾವಿ,ಅ.7-ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಇತ್ತೀಚೆಗೆ ನಿಧನರಾದ ಅಂಗಡಿ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಲು ಇಂದು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಗಡಿ ಅವರ ಅಂತ್ಯಕ್ರಿಯೆ ನಡೆದ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲಾಗುವುದು. ಇದಕ್ಕಾಗಿ ಅಗತ್ಯ ಅನುದಾನ ನೀಡುತ್ತೇನೆ. ಈ ನಿಟ್ಟಿನಲ್ಲಿ ತಯಾರಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸ್ಮಾರಕ ನಿರ್ಮಿಸುವುದು ನನ್ನ ಕರ್ತವ್ಯವಾಗಿದೆ ಎಂದರು.
ಸುರೇಶ ಅಂಗಡಿ ಅವರು ನಮ್ಮೊಂದಿಗೆ ಇಲ್ಲ ಎನ್ನುವುದನ್ನು ಕಲ್ಪನೆ ಮಾಡಿಕೊಳ್ಳುವುದಕ್ಕೂ ಆಗುತ್ತಿಲ್ಲ. ನಾಲ್ಕು ಬಾರಿ ಸಂಸದರಾಗಿ, ರೈಲ್ವೆ ಖಾತೆ ರಾಜ್ಯ ಸಚಿವರಾಗಿ ರಾಜ್ಯಕ್ಕೆ ಅಪಾರ ಕೊಡುಗೆಯನ್ನು ಅವರು ನೀಡಿದ್ದಾರೆ. ಜಾಫರ್ ಶರೀಫ್ ಮಾದರಿಯಲ್ಲಿ ರೈಲ್ವೆಯಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ ಎಂದು ಅವರಿಗೆ ಹಲವು ಬಾರಿ ಹೇಳಿದ್ದೆ ಎಂದು ಅವರನ್ನು ಸ್ಮರಿಸಿದರು.
ಬಳಿಕ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ಅಂಗಡಿ ಅವರ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಳಾ, ಪುತ್ರಿಯರಾದ ಶ್ರದ್ಧಾ, ಸ್ಫೂರ್ತಿ ಅವರಿಗೆ ಧೈರ್ಯ ತುಂಬಿದರು. ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಇದ್ದರು.
ಈ ವೇಳೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಶಾಸಕರಾದ ಅಭಯ ಪಾಟೀಲ, ಅನಿಲ್ ಬೆನಕೆ, ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ ಇದ್ದರು. (ಎಂ.ಎನ್)