ಪ್ರಮುಖ ಸುದ್ದಿಮೈಸೂರು

ಸಿಎಂ ಯಡಿಯೂರಪ್ಪನವರ ಜೊತೆ ಕೋವಿಡ್ ನಿಯಂತ್ರಣ ಕ್ರಮಗಳ ಕುರಿತಂತೆ ಸಚಿವ ಸೋಮಶೇಖರ್ ವಿಡಿಯೋ ಸಂವಾದ

ಮೈಸೂರು,ಅ.8:- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಕುರಿತಂತೆ ಗುರುವಾರ ವಿಡಿಯೋ ಸಂವಾದ ನಡೆಯಿತು.

ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾತನಾಡಿ, ನಾಡಹಬ್ಬ ದಸರಾ ಆಚರಣೆಯನ್ನು ಸರಳ ಹಾಗೂ ಸುರಕ್ಷಿತವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ‌. ಜಿಲ್ಲೆಗೆ ತಜ್ಞರ ತಂಡ ಬೇಟಿ ನೀಡಿ ವರದಿ ನೀಡಿದ ನಂತರ ವರದಿಯ ಆಧಾರದ ಮೇಲೆ ಹೆಚ್ಚಿನ ಸಿದ್ಧತೆಗಳನ್ನು ಮಾಡಿಕೊಂಡು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲಾಗುವುದು ಎಂದರು.

ಕೋವಿಡ್- 19 ನಿಯಂತ್ರಿಸುವುದಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪ್ರಾಥಮಿಕ ಸಂಪರ್ಕಿತರನ್ನು ತ್ವರಿತವಾಗಿ ಗುರುತಿಸಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು. ಜಿಲ್ಲೆಯ ಪ್ರತಿ ತಾಲ್ಲೂಕಿನ ಕೋವಿಡ್ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಲಿಂಡರ್‌ಗಳನ್ನು ಹೆಚ್ಚಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ನಗರ ಪೋಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಇನ್ನಿತರರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: