
ಮೈಸೂರು
ರೈತರ ಬಗ್ಗೆ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ, ಏಷ್ಯನ್ ಪೇಂಟ್ಸ್ ನಲ್ಲಿ ಉದ್ಯೋಗ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ
ಮೈಸೂರು, ಅ.20:- ಏಷ್ಯನ್ ಬಣ್ಣದ ಕಾರ್ಖಾನೆಗೆ ಭೂಮಿ ಕಳೆದುಕೊಂಡ ರೈತ ಕುಟುಂಬಕ್ಕೆ ಅದೇ ಕಾರ್ಖಾನೆಯಲ್ಲಿ ಉದ್ಯೋಗ ನೀಡುವಂತೆ ಆಗ್ರಹಿಸಿ, ಹಾಗೂ ಪ್ರವಾಹ,ಬೆಂಬಲ ಬೆಲೆ ಕುರಿತಂತೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ತಾಳಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಯಿತು.
ಮೈಸೂರು ಜಿಲ್ಲಾಧಿಕಾರಿಗಳ ಕಛೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಇಮ್ಮಾವು ಗ್ರಾಮದ ರೈತರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಅತಿ ಕಡಿಮೆ ದರದಲ್ಲಿ ಭೂಮಿ ಪಡೆದುಕೊಂಡು ಬಳಿಕ ಉದ್ಯೋಗವನ್ನೇ ನೀಡಿಲ್ಲ, ಬೇರೆ, ಬೇರೆ ಕಡೆಯವರನ್ನು ಕೆಲಸಕ್ಕೆ ನೇಮಿಸಿಕೊಳ್ಳಲಾಗಿದ್ದು, ಸ್ಥಳಿಯರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು. ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹವುಂಟಾಗಿದ್ದು ರೈತರು ಕಷ್ಟಪಟ್ಟು ಬೆಳೆದ ಬೆಳೆಗಳೆಲ್ಲ ನೀರಿನಲ್ಲಿ ಕೊಚ್ಚಿಹೋಗಿವೆ. ಫಸಲು, ಆಸ್ತಿ, ಮನೆ ಮಠಗಳನ್ನು ಅಲ್ಲಿನ ರೈತರು ಮತ್ತು ಇತರೆ ಜನತೆ ಕಳೆದುಕೊಂಡಿದ್ದಾರೆ. ರಾಜ್ಯದ ಬರ ಮತ್ತು ಅತಿವೃಷ್ಠಿ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಧೋರಣೆಯನ್ನು ತಾಳಿವೆ. ಫಸಲು ನಷ್ಟ ಹೊಂದಿರುವ ರೈತರಿಗೆ ಸಂಪೂರ್ಣ ನಷ್ಟ ಪರಿಹಾರವನ್ನು ವೈಜ್ಞಾನಿಕವಾಗಿ ತುಂಬಿಕೊಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿನ ರಘು ಹಿಮ್ಮಾವು, ಕಿರಣ್ , ಪಿ.ಮರಂಕಯ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)