ಕರ್ನಾಟಕಪ್ರಮುಖ ಸುದ್ದಿ

ಶಿವಮೊಗ್ಗದಲ್ಲಿನ ಸ್ಫೋಟ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು,ಜ.22- ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶಿವಮೊಗ್ಗ ನಗರ ಸಮೀಪ ಜಿಲೆಟಿನ್ ಸ್ಪೋಟಗೊಂಡು ಹಲವು ಮಂದಿ ಕಾರ್ಮಿಕರು ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಮೃತರ ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ.

ನಿರ್ಲಕ್ಷ್ಯ ತೋರುವ ಮೂಲಕ ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸುತ್ತೇನೆ. ರಾಜ್ಯದ ಹಲವೆಡೆ ಅಕ್ರಮ ಗಣಿಗಾರಿಕೆ ನಿರಾತಂಕವಾಗಿ ನಡೆಯುತ್ತಿರುವ ಆರೋಪ ಕೇಳಿಬರುತ್ತಿದ್ದು, ಅವುಗಳ ಮೇಲೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಶಿವಮೊಗ್ಗದಲ್ಲಿ ಜೆಲಿಟಿನ್ ಸಾಗಿಸುತ್ತಿದ್ದ ಟ್ರಕ್ ಸ್ಫೋಟದಿಂದಾಗಿ ಅನೇಕ ಸಾವುಗಳ ಬಗ್ಗೆ ತಿಳಿದು ತೀವ್ರ ದುಃಖಿತವಾಗಿದೆ. ಸಿಎಂ ಯಡಿಯೂರಪ್ಪ ಅವರು ಈ ದುರಂತ ಘಟನೆಯ ಬಗ್ಗೆ ಆಳವಾದ ತನಿಖೆಗೆ ಆದೇಶಿಸಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಸಂತ್ರಸ್ತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ ಎಂದು ಟ್ವೀಟ್ ಮಾಡಿದ್ದಾರೆ. (ಎಂ.ಎನ್)

Leave a Reply

comments

Related Articles

error: