ಮೈಸೂರು

ಮುಂದಿನ ಚುನಾವಣೆಯಲ್ಲಿ ಬಿಜೆಪಿ 150ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿಯಿದೆ : ಯಡಿಯೂರಪ್ಪ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಂಜನಗೂಡಿನಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಯಡಿಯೂರಪ್ಪ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಖಂಡಿತ ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಬೇರೆ ಪಕ್ಷಗಳ ತಂತ್ರಗಾರಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರವರ ಜೊತೆ ಚರ್ಚಿಸಿದ ಬಳಿಕವೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಮುಂಬರುವ ದಿನಗಳಲ್ಲಿ ಅನ್ಯ ಪಕ್ಷಗಳ ಮತ್ತಷ್ಟು ಪ್ರಮುಖ ನಾಯಕರು ಬಿಜೆಪಿ ಗೆ ಸೇರಲಿದ್ದಾರೆ. ಪಕ್ಷದ ತತ್ವ ಸಿದ್ಧಾಂತ ನಂಬಿ ಬರುವವರಿಗೆ ಸ್ವಾಗತವಿದೆ ಎಂದರು. ನಂಜನಗೂಡು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ವೇಳೆ ಸರ್ಕಾರಿ ಅಧಿಕಾರಿಗಳೇ ಹಣ ಹಂಚಿದ್ದಾರೆ. ಈ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ಈ ಬಗ್ಗೆ ತನಿಖೆಗೆ ಆಗ್ರಹಿಸಲಾಗುವುದು. ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸರ್ಕಾರಿ ಅಧಿಕಾರಿಗಳೇ ಮತದಾರರಿಗೆ ಹಣ ಹಂಚಿರುವ ಬಗ್ಗೆ ಕೆಲ ದಾಖಲೆಗಳು ಲಭ್ಯವಾಗಿವೆ. ಮತ್ತಷ್ಟು ದಾಖಲೆಗಳನ್ನು ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿದರು.
ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಯ ಬಲ ಹೆಚ್ಚಾಗಿದೆ. ಆದರೂ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿಕೊಡುವಲ್ಲಿ ನಾವು ಸಂಪೂರ್ಣ ವಿಫಲರಾಗಿದ್ದೇವೆ. ಅನ್ನಭಾಗ್ಯ ಯೋಜನೆ 99% ಕೇಂದ್ರದ ಯೋಜನೆ.
ಆದರೆ ರಾಜ್ಯ ಸರ್ಕಾರ ತನ್ನ ಯೋಜನೆ  ಎಂದು ಬಿಂಬಿಸಿಕೊಳ್ಳುತ್ತಿದೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನತೆಗೆ ತಿಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಹೇಳಿದರು.
ರಾಜ್ಯದಲ್ಲಿ ಎದುರಾಗಿರುವ ಭೀಕರ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದೇ ಆದ ಗೊಂದಲದಲ್ಲಿ ಸಿಲುಕಿದ್ದಾರೆ.
ಸದ್ಯದಲ್ಲೇ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ. ಮುಂದಿನ ಎರಡು ಮೂರು ದಿನಗಳಲ್ಲಿ ಪ್ರವಾಸ ಆರಂಭಿಸುತ್ತೇನೆ. ರಾಜ್ಯದ ಎಲ್ಲಾ ಬರಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸುತ್ತೇನೆಂದು ಹೇಳಿದರು.

ಮೈಸೂರಿನಲ್ಲಿ ಕುದಿಯುತ್ತಿದ್ದ ಭೂಮಿಗೆ ಸಿಲುಕಿ ಬಾಲಕ ಸಾವನ್ನಪ್ಪಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ ಯಡಿಯೂರಪ್ಪ. ಗುಂಡ್ಲುಪೇಟೆ, ನಂಜನಗೂಡು ಪ್ರವಾಸ ಮುಗಿದ ನಂತರ ಮೃತ ಬಾಲಕನ ಪೋಷಕರನ್ನು ಭೇಟಿ ಮಾಡಿ ಸಾಂತ್ವನ ಹೇಳುತ್ತೇನೆ ಎಂದರು.

ಈ ಸಂದರ್ಭ ಬಿಜೆಪಿಯ ಪ್ರಮುಖರು ಯಡಿಯೂರಪ್ಪ ಜೊತೆಗಿದ್ದರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: