ದೇಶಪ್ರಮುಖ ಸುದ್ದಿ

ಸ್ವಸ್ಥ ರಾಷ್ಟ್ರ ನಿರ್ಮಾಣಕ್ಕಾಗಿ ಆರೋಗ್ಯ ಕ್ಷೇತ್ರಕ್ಕೆ ಒತ್ತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ,ಫೆ.23-ಸ್ವಸ್ಥ ರಾಷ್ಟ್ರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಜೆಟ್‌ನಲ್ಲಿ ಪ್ರಕಟಿಸಿರುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತ ವೆಬಿನಾರ್‌ನಲ್ಲಿ ಮಾತನಾಡಿದ ಅವರು, ಆರೋಗ್ಯ ಕ್ಷೇತ್ರದ ನಾಲ್ಕು ರಂಗಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಕಾಯಿಲೆ ಬರದಂತೆ ತಡೆಗಟ್ಟುವುದು, ಸ್ವಸ್ಥ ಜೀವನಕ್ಕೆ ಉತ್ತೇಜನ, ಎಲ್ಲರಿಗೂ ಆರೋಗ್ಯ ಸೇವೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ, ವೃತ್ತಿಪರರ ಸಂಖ್ಯೆ ಹೆಚ್ಚಿಸುವುದಕ್ಕೆ ಒತ್ತು ನೀಡಲಾಗುತ್ತಿದೆ ಎಂದರು.

ಕೊರೊನಾ ಮಾತ್ರವಲ್ಲ ಭವಿಷ್ಯದಲ್ಲಿ ಎದುರಾಗಬಹುದಾದ ಸಾಂಕ್ರಾಮಿಕಗಳ ವಿರುದ್ಧ ಹೋರಾಡಲು ಆರೋಗ್ಯ ಕ್ಷೇತ್ರದ ಬಲವರ್ಧನೆ ಅವಶ್ಯಕ. ಆ ನಿಟ್ಟಿನಲ್ಲಿ ದೇಶದ ಆರೋಗ್ಯ ವಲಯವನ್ನು ಸಜ್ಜುಗೊಳಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಕ್ಷೇತ್ರಕ್ಕೆ ಹಿಂದೆಂದೂ ಒದಗಿಸಿರದಷ್ಟು ಅನುದಾನವನ್ನು ಈ ಬಾರಿ ಬಜೆಟ್‌ನಲ್ಲಿ ಒದಗಿಸಲಾಗಿದೆ. ಇದು ಈ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರಕ್ಕೆ ಇರುವ ಬದ್ಧತೆಯನ್ನು ತೋರುತ್ತದೆ ಎಂದಿದ್ದಾರೆ.

ಆಧುನಿಕ ತಂತ್ರಜ್ಞಾನದ ಸಮರ್ಥ ಬಳಕೆ ಮೂಲಕ ಆರೋಗ್ಯ ಸೇವೆಗಳನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಹಾಗೂ ಸುಲಭವಾಗಿ ಸಿಗುವಂತೆ ಮಾಡುವುದು ಇಂದಿನ ತುರ್ತು. ಕೋವಿಡ್‌ ಪಿಡುಗಿನ ಅವಧಿಯಲ್ಲಿ ಆರೋಗ್ಯ ಕ್ಷೇತ್ರದಲ್ಲಿನ ತನ್ನ ಸಾಮರ್ಥ್ಯವನ್ನು ಭಾರತ ಜಗತ್ತಿಗೆ ತೋರಿದೆ. ದೇಶದ ಬಗೆಗಿನ ಗೌರವ ಹೆಚ್ಚಾಗಿದೆ. ಬರುವ ದಿನಗಳಲ್ಲಿ ಭಾರತ ಮೂಲದ ವೈದ್ಯರು, ಪ್ಯಾರಾ ಮೆಡಿಕಲ್‌ ಸಿಬ್ಬಂದಿಗೆ ಜಾಗತಿಕವಾಗಿ ಬೇಡಿಕೆ ಹೆಚ್ಚಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: