ಕರ್ನಾಟಕಪ್ರಮುಖ ಸುದ್ದಿ

ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಪೊಲೀಸ್ ಭದ್ರತೆ

ಬೆಂಗಳೂರು,ಮಾ.30-ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ವೇದಿಕೆ ಆಗುತ್ತಿದೆ. ಈ ನಿಟ್ಟಿನಲ್ಲಿ ಮುಂಜಾಗರೂಕತಾ ಕ್ರಮವಾಗಿ ರಮೇಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆಯಂತೆ ಇಬ್ಬರ ಬೆಂಗಳೂರು ನಿವಾಸಕ್ಕೆ ಭದ್ರತೆಯನ್ನು ನೀಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇಬ್ಬರ ನಿವಾಸದ ಮುಂದೆ 80 ಕ್ಕೂ ಹೆಚ್ಚು ಪೊಲಿಸರು, 5 ಕೆಎಸ್ಆರ್ ಪಿ ತುಕಡಿಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಎಸಿಪಿ ನೇತೃತ್ವದಲ್ಲಿ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಸದ್ಯ ರಮೇಶ್ ಜಾರಕಿಹೊಳಿ ತಮ್ಮ ಬೆಳಗಾವಿಯ ಗೋಕಾಕ್‌ ನಿವಾಸಕ್ಕೆ ತೆರಳಿದ್ದಾರೆ. ಪ್ರಕರಣದಲ್ಲಿ ಡಿಕೆಶಿ ಪಾತ್ರದ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿದೆ. ಯುವತಿಯ ಪೋಷಕರು ಡಿಕೆಶಿ ವಿರುದ್ಧ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿದ್ದ ಡಿಕೆಶಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿದ್ದ ಡಿಕೆಶಿ ಕಾರಿನ ಮೇಲೆ ಚೆಪ್ಪಲಿ, ಕಲ್ಲು ತೂರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮತ್ತೆ ಇಂತಹದ್ದೇ ಘಟನೆ ಪುನರಾವರ್ತನೆ ಆಗದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.  (ಎಂ.ಎನ್)

Leave a Reply

comments

Related Articles

error: