ಕರ್ನಾಟಕಪ್ರಮುಖ ಸುದ್ದಿಮನರಂಜನೆ

ನಟ ನಿಖಿಲ್ ಕುಮಾರಸ್ವಾಮಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು,ಏ.17-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಳಿಕ ಇದೀಗ ಅವರ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಅವರೇ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ಟ್ವಿಟ್ವರ್, ಇನ್ ಸ್ಟಾಗ್ರಾಮ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ವಿವಾಹ ವಾರ್ಷಿಕೋತ್ಸವದ ದಿನದಂದೇ ನಿಖಿಲ್ ಕುಮಾರಸ್ವಾಮಿ ಅವರಿಗೆ ಸೋಂಕು ತಗುಲಿದೆ.

ಬೆಳಿಗ್ಗೆಯಷ್ಟೇ ನಿಖಿಲ್ ಕುಮಾರಸ್ವಾಮಿ ಅವರು ಮೊದಲ ವಿವಾಹ ವಾರ್ಷಿಕೋತ್ಸವದ ಖುಷಿಯಲ್ಲಿ ಸೋಶಿಯಲ್ ಮೀಡಿಯಾ ಪೋಸ್ಟ್ ಹಾಕಿದ್ದರು. ಅಷ್ಟೇ ಅಲ್ಲದೆ ಪತ್ನಿ ರೇವತಿಗೆ ಧನ್ಯವಾದ ಕೂಡ ತಿಳಿಸಿದ್ದರು.

ಕುಮಾರಸ್ವಾಮಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ನಿಖಿಲ್ ಕುಮಾರಸ್ವಾಮಿ ಅವರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಪ್ರಾಥಮಿಕ ವರದಿಯಲ್ಲಿ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ನಿಖಿಲ್ ಕುಮಾರಸ್ವಾಮಿ ಅವರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂಬುದಾಗಿ ಮನವಿ ಮಾಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು ಇತ್ತೀಚೆಗೆ ‘ರೈಡರ್’ ಚಿತ್ರದ ಚಿತ್ರೀಕರಣಕ್ಕಾಗಿ ಲಡಾಖ್ ಗೆ ತೆರಳಿದ್ದರು. ಲೇಹ್ ಲಡಾಖ್ ನಲ್ಲಿರುವ ಸುಂದರ ಫೋಟೋಗಳನ್ನು ನಿಖಿಲ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಇದಕ್ಕೂ ಮೊದಲು ಟ್ವೀಟ್ ಮಾಡಿದ್ದ ಅವರು, ಮಾಜಿ‌ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ, ಮತ್ತು ದೇವರ ದಯೆಯಿಂದ ಆದಷ್ಟು ಬೇಗ ಗುಣಮುಖರಾಗಲಿದ್ದಾರೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಯಾವುದೇ ಆತಂಕ ಬೇಡ ಎಂದು ಮನವಿ ಮಾಡಿಕೊಂಡಿದ್ದರು.

ಬೆಳಿಗ್ಗೆಯಷ್ಟೇ ಕುಮಾರಸ್ವಾಮಿ ಅವರಿಗೆ ಸೋಂಕು ತಗುಲಿತ್ತು. ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಲು ಸಂಬಂಧಿಸಿದವರನ್ನು ಸಂಪರ್ಕಿಸಿದಾಗ ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ. ಹೀಗಾಗಿ ಕುಮಾರಸ್ವಾಮಿ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. (ಎಂ.ಎನ್)

Leave a Reply

comments

Related Articles

error: