ಕ್ರೀಡೆದೇಶಪ್ರಮುಖ ಸುದ್ದಿ

ಕೊರೊನಾ ಲಸಿಕೆ ಹಾಕಿಸಿಕೊಂಡ ಕ್ರಿಕೆಟಿಗರಾದ ಜಸ್ಪ್ರೀತ್ ಬುಮ್ರಾ, ದಿನೇಶ್ ಕಾರ್ತಿಕ್, ಸ್ಮೃತಿ ಮಂಧನಾ

ಮುಂಬೈ,ಮೇ 12-ಭಾರತ ಕ್ರಿಕೆಟ್ ತಂಡದ ಆಟಗಾರರಾದ ಜಕಸ್ಪ್ರೀತ್ ಬುಮ್ರಾ, ದಿನೇಶ್ ಕಾರ್ತಿಕ್, ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧನಾ ಕೊರೊನಾ ಲಸಿಕೆಯ ಮೊದಲ ಡೋಸ್ ಅನ್ನು ಪಡೆದುಕೊಂಡಿದ್ದಾರೆ.

ತಾವು ಲಸಿಕೆ ಪಡೆದುಕೊಂಡಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಮನೆಯಲ್ಲೇ ಇರಿ ಸುರಕ್ಷಿತವಾಗಿರಿ. ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

 

ನಾನು ಲಸಿಕೆ ಹಾಕಿಸಿಕೊಂಡಿದ್ದೇನೆ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಬುಮ್ರಾ ಟ್ವೀಟ್‌ ಮಾಡಿದ್ದಾರೆ. ದಿನೇಶ್ ಕಾರ್ತಿಕ್ ಅವರು ಸಹ ಲಸಿಕೆ ಪಡೆಯುತ್ತಿರುವ ಫೋಟೋವನ್ನು ಟ್ವೀಟ್ ಮಾಡಿ ಲಸಿಕೆ ಹಾಕಿಸಿಕೊಂಡೆ ಎಂದಿದ್ದಾರೆ.

ಇನ್ನು ಸ್ಮೃತಿ ಮಂಧನಾ ಲಸಿಕೆ ಪಡೆಯುತ್ತಿರುವ ಫೋಟೋವನ್ನು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ ಲಸಿಕೆಯ ಮೊದಲ ಡೋಸ್ ಪಡೆದುಕೊಂಡೆ. ಸುರಕ್ಷಿತವಾಗಿರಿ ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಇಂಗ್ಲೆಂಡ್ ಗೆ ತೆರಳಲಿರುವ ತಂಡದಲ್ಲಿರುವ ಆಟಗಾರರ ಪೈಕಿ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ, ಉಮೇಶ್ ಯಾದವ್, ಇಶಾಂತ್ ಶರ್ಮ ಈಗಾಗಲೇ ಲಸಿಕೆ ಪಡೆದುಕೊಂಡಿದ್ದಾರೆ. ಉಳಿದ ಆಟಗಾರರು ಸದ್ಯದಲ್ಲೇ ಲಸಿಕೆ ಪಡೆಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತದ ಬೌಲಿಂಗ್ ಪಡೆಯನ್ನು ಮುನ್ನೆಡಸಲಿದ್ದಾರೆ. ಜೂನ್‌ 18ರಿಂದ ಆರಂಭವಾಗಲಿರುವ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ತಂಡವನ್ನು ಎದುರಿಸಲಿದೆ. ಇದಾದ ಬಳಿಕ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: