ಕರ್ನಾಟಕಪ್ರಮುಖ ಸುದ್ದಿ

ಮಲೆ ಮಹದೇಶ್ವರ ಬೆಟ್ಟ, ಗೋಪಿನಾಥಂಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ : ಕೋವಿಡ್ ನಿಯಂತ್ರಣ ಕ್ರಮಗಳ ಪರಿಶೀಲನೆ

ಗ್ರಾಮೀಣ ಭಾಗದಲ್ಲೂ ಕೋವಿಡ್ ವ್ಯಾಪಕವಾಗಿ ಹರಡದ ರೀತಿಯಲ್ಲಿ‌ ಮುನ್ನೆಚ್ಚರಿಕೆ, ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕು: ಅಧಿಕಾರಿಗಳಿಗೆ ಖಡಕ್ ನಿರ್ದೇಶನ

ರಾಜ್ಯ()ಚಾಮರಾಜನಗರ), ಮೇ. 21:- ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್‌ಕುಮಾರ್ ಅವರು ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಹಾಗೂ ಗೋಪಿನಾಥಂಗೆ ಇಂದು ಭೇಟಿ ನೀಡಿ ಆ ಭಾಗದ ಸುತ್ತಮುತ್ತಲ ಪ್ರದೇಶಗಳಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು.

ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವರು ಮಲೆ ಮಹದೇಶ್ವರ ಬೆಟ್ಟ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿರುವ ಕುರಿತಂತೆ ಕಳವಳ ವ್ಯಕ್ತಪಡಿಸಿ‌, ಅಧಿಕಾರಿಗಳು ಹೆಚ್ಚಿನ ಬದ್ಧತೆಯಿಂದ ಕೆಲಸ‌ ಮಾಡಬೇಕೆಂದು ತಾಕೀತು‌ ಮಾಡಿದರು.

ಕೊರೊನಾ ಮೊದಲನೆ ಅಲೆಯಲ್ಲಿ ಗ್ರಾಮೀಣ ಪ್ರದೇಶಗಳಿಗಿಂತ ನಗರ ಪ್ರದೇಶಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿತ್ತು. ಆದರೆ ಎರಡನೇ ಅಲೆಯ ಪ್ರಸ್ತುತ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕೋವಿಡ್ ಸಂಬಂಧ ನಿಗಾ ವಹಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಟಾಸ್ಕ್ಪೋರ್ಸ್ ಸಮಿತಿಯನ್ನು ರಚಿಸಲಾಗಿದೆ. ಸೋಂಕಿತರನ್ನು ಹೋಮ್ ಐಸೋಲೇಷನ್‌ಗೆ ಕಳುಹಿಸುವ ಬದಲು ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗಂಟಲು ದ್ರವ ಪರೀಕ್ಷೆ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ಇದರಿಂದ ಕೋವಿಡ್ ಸೋಂಕು ಪತ್ತೆಯಾಗಿ ಮತ್ತಷ್ಟು ಹರಡದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಲಿದೆ. ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಗ್ರಾಮಗಳ ಜನರಿಗೆ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲು ಅರಿವು ಮೂಡಿಸಬೇಕು. ಸೋಂಕು ಹರಡದಂತೆ ವಹಿಸಬೇಕಿರುವ ಮುನ್ನಚ್ಚರಿಕೆಯ ಕ್ರಮಗಳನ್ನು ಪಾಲಿಸಲು ಜಾಗೃತಿ ಮೂಡಿಸಬೇಕೆಂದು ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.

ಮಲೆ ಮಹದೇಶ್ವರ ಬೆಟ್ಟದ ಆಸ್ಪತ್ರೆಗೆ ವೈದ್ಯರ ನೇಮಕ

ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರಿಲ್ಲದಿರುವುದು ಗಮನಕ್ಕೆ ಬಂದಿದೆ. ಸರ್ಕಾರ ಸದ್ಯದಲ್ಲಿಯೇ ವೈದ್ಯರನ್ನು ನೇಮಕ ಮಾಡಿಕೊಳ್ಳಲಿದೆ. ಹೀಗಾಗಿ ಮಲೆ ಮಹದೇಶ್ವರ ಬೆಟ್ಟದ ಆಸ್ಪತ್ರೆಗೆ ವೈದ್ಯರನ್ನು ನೇಮಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.

ಶಾಸಕರಾದ ಆರ್. ನರೇಂದ್ರ ಅವರು ಮಾತನಾಡಿ ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳು ಅತ್ಯಂತ ಮುತುವರ್ಜಿ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಸೋಂಕಿತರಿಗೆ ಯಾವುದೇ ತೊಂದರೆಯಾಗದಂತೆ ಕೂಡಲೇ ಸ್ಪಂದಿಸಿ ಔಷಧ, ಆರೈಕೆಗೆ ಪ್ರಮುಖ ಆದ್ಯತೆ ನೀಡಬೇಕೆಂದು ತಿಳಿಸಿದರು.

ಗೋಪಿನಾಥಂ ಶಾಲೆಗೆ ಭೇಟಿ: ಸಭೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ಗೋಪಿನಾಥಂ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅವರಣದಲ್ಲಿ ಮುಖಂಡರೊಂದಿಗೆ ಮಾತನಾಡಿ ಕೋವಿಡ್ ನಿಯಮ ಪಾಲನೆ ಬಗ್ಗೆ ಅರಿವು ಮೂಡಿಸಿ ಸೋಂಕು ವ್ಯಾಪಿಸದಂತೆ ತಡೆಯುವಲ್ಲಿ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಕೋವಿಡ್ ಸೋಂಕು ಲಕ್ಷಣಗಳು ಕಾಣಿಸಿಕೊಂಡ ಆರಂಭದಲ್ಲಿಯೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾವುದೇ ರೋಗ ಲಕ್ಷಣಗಳು ಕಂಡುಬಂದರೂ ಕೂಡಲೇ ಆಸ್ಪತ್ರೆಗೆ ತೆರಳಬೇಕು. ಯಾವುದೇ ನಿರ್ಲಕ್ಷ್ಯ ವಹಿಸಬಾರದು. ಕೊರೊನಾ ಮುಕ್ತ ಗ್ರಾಮವನ್ನಾಗಿಸಲು ಪ್ರತಿಯೊಬ್ಬರ ಪಾತ್ರವು ಮುಖ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್‌ಕುಮಾರ್ ಅವರು ತಿಳಿಸಿದರು.

ಸಾಲೂರು ಶ್ರೀಗಳಾದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಜಿಲ್ಲಾಧಿಕಾರಿ ಡಾ. ಎಂ.ಆರ್ ರವಿ, ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ, ಡಿವೈಎಸ್ಪಿ ನಾಗರಾಜು, ತಹಶೀಲ್ದಾರ್ ನಾಗರಾಜು, ತಾಲೂಕು ಆರೋಗ್ಯ ಅಧಿಕಾರ ಪ್ರಕಾಶ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್, ಇನ್ಸ್ಪೆಕ್ಟರ್ ರಮೇಶ್, ಇತರ ಅಧಿಕಾರಿಗಳು ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: