ಕರ್ನಾಟಕಪ್ರಮುಖ ಸುದ್ದಿ

ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿ ಕೋವಿಡ್ ವಾರಿಯರ್ಸ್: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ

ಬೆಂಗಳೂರು,ಮೇ 26-ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುತ್ತಿರುವ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಅವರು ಇಂದು ಬೆಳಗಾವಿ, ಬಳ್ಳಾರಿ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳ ಆಯ್ದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಪಿಡಿಓಗಳೊಂದಿಗೆ ಸಂವಾದ ನಡೆಸಿದ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ವಿವಿಧ ಪಂಚಾಯಿತಿ ಅಧ್ಯಕ್ಷರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು ಈ ಘೋಷಣೆ ಮಾಡಿದರು.

ಸಂವಾದದ ವೇಳೆ ಕೋವಿಡ್ 2ನೇ ಅಲೆ ಮೊದಲಿಗಿಂತ ವಿಭಿನ್ನವಾಗಿದೆ. ಹೆಚ್ಚು ಹಾನಿಕಾರಕವಾಗಿದೆ. ಕೊರೊನಾ ಸೋಂಕು ತ್ವರಿತವಾಗಿ ವ್ಯಾಪಿಸುತ್ತಿದ್ದು, ತುರ್ತು ನಿವಾರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸೋಂಕಿತರಿಗೆ ನೆರವಾಗಲು ಗ್ರಾಮ ಪಂಚಾಯತ್‍ಗಳಲ್ಲಿ ಹೆಲ್ಪ್ ಡೆಸ್ಕ್ ಹಾಗೂ ಹೆಲ್ಪ್ ಲೈನ್ ಗಳನ್ನು ಪ್ರಾರಂಭಿಸಬೇಕು. ಕಾರ್ಯಪಡೆಗಳ ಜೊತೆ ಕಾರ್ಯನಿರ್ವಹಿಸಲು ಸ್ವಯಂ ಸೇವಾ ಸಂಸ್ಥೆಗಳು ಹಾಗೂ ದಾನಿಗಳ ನೆರವನ್ನು ಪಡೆಯಬಹುದು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಕೋವಿಡ್ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳು ಹಾಗೂ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಸಂತೆ, ಜಾತ್ರೆ ಮತ್ತಿತರ ಕಾರ್ಯಕ್ರಮಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

ಕಳೆದ ವಾರ ಘೋಷಿಸಿದ ಪ್ಯಾಕೇಜ್‍ನಲ್ಲಿ ಎಲ್ಲಾ ಗ್ರಾಮ ಪಂಚಾಯತ್‍ಗಳಿಗೂ ಎಸ್.ಡಿ.ಆರ್.ಎಫ್ ನಿಧಿಯಿಂದ ತಲಾ ರೂ. 50,000/- ಗಳನ್ನು ಬಿಡುಗಡೆ ಮಾಡಲು ಆದೇಶಿಸಿರುತ್ತೇನೆ. ಸದ್ಯದಲ್ಲಿಯೇ ಹಣ ತಮ್ಮ ಕೈ ಸೇರಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಈಗಾಗಲೇ 14ನೇ ಹಣಕಾಸು ಆಯೋಗದ ಅನುದಾನದ ಉಳಿಕೆ ಹಣ, 15ನೇ ಹಣಕಾಸು ಆಯೋಗದ ಅನಿರ್ಬಂಧಿತ ಅನುದಾನ ಹಾಗೂ ಗ್ರಾಮ ಪಂಚಾಯತ್ ಸ್ವಂತ ಸಂಪನ್ಮೂಲವನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದರು.

ಮಕ್ಕಳು, ಮಹಿಳೆಯರು, ವಿಶೇಷ ಚೇತನರು ಹಾಗೂ ವೃದ್ಧರು ತೊಂದರೆಯಲ್ಲಿದ್ದಲ್ಲಿ ಅವರಿಗೆ ಊಟೋಪಚಾರದ ವ್ಯವಸ್ಥೆ ಮಾಡಬೇಕು. ಒಂದು ಪಕ್ಷ ಸೋಂಕಿತರು ಮೃತಪಟ್ಟು ಮಕ್ಕಳು ಅನಾಥರಾದಲ್ಲಿ ಅವರನ್ನು ಯಾರು ದತ್ತು ತೆಗೆದುಕೊಳ್ಳಲು ಬಿಡಬಾರದು. ಬದಲಾಗಿ ‘ಮಕ್ಕಳ ರಕ್ಷಣಾ ಸಮಿತಿ’ಗಳಿಗೆ ಸೇರಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಕೋವಿಡ್ 19 ಮೊದಲ ಅಲೆ ಯಶಸ್ವಿಯಾಗಿ ನಿಯಂತ್ರಿಸುವಲ್ಲಿ ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್ ಗಳು ಮಹತ್ವದ ಪಾತ್ರ ವಹಿಸಿವೆ. ಇದೀಗ ಎರಡನೇ ಅಲೆಯನ್ನೂ ನಿಯಂತ್ರಿಸುವಲ್ಲಿ ಈ ಟಾಸ್ಕ್ ಫೋರ್ಸ್ ಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಿಸುವಲ್ಲಿ ಟಾಸ್ಕ್ ಫೋರ್ಸ್ ಪಾತ್ರ ಅತ್ಯಂತ ಮಹತ್ವಪೂರ್ಣ ಎಂದು ನುಡಿದರು.

ಕಂಟೇನ್ ಮೆಂಟ್ ಝೋನ್ ಗಳನ್ನು ಹೊರತು ಪಡಿಸಿ, ಇತರ ಪ್ರದೇಶಗಳಲ್ಲಿ ನರೇಗಾ ಕಾಮಗಾರಿ ನಡೆಸುತ್ತಿರುವುದಕ್ಕೆ ಸಚಿವರು ಹರ್ಷ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಸರ್ಕಾರದ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್, ಗ್ರಾಮೀಣಾಭಿವೃಧ್ಧಿ ಇಲಾಖೆ ಆಯುಕ್ತ ಅನಿರುದ್ಧ ಶ್ರವಣ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. (ಎಂ.ಎನ್)

 

Leave a Reply

comments

Related Articles

error: