ಕರ್ನಾಟಕಪ್ರಮುಖ ಸುದ್ದಿ

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರೀ ಮಳೆ ನಿರೀಕ್ಷೆ

ರಾಜ್ಯ( ಬೆಂಗಳೂರು)ಜೂ.15:-  ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರೀ ಮತ್ತು ಅತಿಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕೆಲವೆಡೆ ಅತ್ಯಂತ ಭಾರೀ ಮಳೆಯೊಂದಿಗೆ 20 ಸೆಂ.ಮೀ.ಗಿಂತಲೂ ಹೆಚ್ಚು ಮಳೆಯನ್ನು ನಿರೀಕ್ಷಿಸಲಾಗಿದ್ದು, ಜೂನ್‌ 15ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

ರಾಜ್ಯದಲ್ಲಿ ಮಾನ್ಸೂನ್‌ ಚುರುಕಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸೋಮವಾರ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಳೆಯಾಗಿದೆ. ಮುಖ್ಯವಾಗಿ ಪಣಂಬೂರ್‌, ಕೋಟಾ ಹಾಗೂ ಆಗುಂಬೆಯಲ್ಲಿ ತಲಾ 9 ಸೆಂ.ಮೀ. ಮತ್ತು ಮಂಗಳೂರಿನಲ್ಲಿ 8 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜೂ.17ರವರೆಗೆ ಭಾರೀ ಮಳೆ 

ಪೂರ್ವ ಅರಬ್ಬೀಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ವಾಯುಭಾರ ಕುಸಿತ(ದಟ್ಟ ಮೋಡ) ಉಂಟಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜೂ.18ರ ವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಿಗೆ ಜೂ.16 ಮತ್ತು 17ರಂದು ಕೆಲವೆಡೆ ಭಾರೀ ಮತ್ತು ಅತಿಭಾರೀ ಮಳೆ ನಿರೀಕ್ಷಿಸಲಾಗಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಹಾಗೂ ಜೂನ್‌ 18ರಂದು ಯೆಲ್ಲೋ ಅಲರ್ಟ್‌ ಕೊಡಲಾಗಿದೆ ಎಂದು ತಿಳಿಸಿದ್ದಾರೆ.ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಜೂನ್‌ 17ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗೆ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ್‌ ಜಿಲ್ಲೆಗೆ ಜೂನ್‌ 17ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉಳಿದಂತೆ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಿಗೆ ಜೂ.17ರ ವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.

ಕರಾವಳಿ ತೀರ ಪ್ರದೇಶಗಳಲ್ಲಿ ಪ್ರತಿ ಗಂಟೆಗೆ ಗಾಳಿಯ ವೇಗವು 45ರಿಂದ 55 ಕಿ.ಮೀ. ಇರುವ ಸಾಧ್ಯತೆ ಇದೆ. ಹೀಗಾಗಿ, ಜೂನ್‌ 17ರ ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Leave a Reply

comments

Related Articles

error: