ಕರ್ನಾಟಕಪ್ರಮುಖ ಸುದ್ದಿ

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ

ರಾಜ್ಯ( ಮಂಡ್ಯ)ಜೂ.21:- ಕೆಆರ್‌ಎಸ್‌ ಜಲಾಶಯ ಭರ್ತಿಗೂ ಮುನ್ನ ತಮಿಳುನಾಡಿಗೆ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಮಂಡ್ಯ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಾಣವಾಗಿರುವ ಸೇತುವೆ ಕೆಳ ಭಾಗ ನಿಂತು ಮಂಡ್ಯ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದ್ದಾರೆ. ಕೆಆರ್‌ಎಸ್‌ ಜಲಾಶಯ ಭರ್ತಿಯಾಗುವ ಮೊದಲೇ ಅಧಿಕಾರಿಗಳು ತಮಿಳುನಾಡಿಗೆ ಐದು ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಹರಿಸುತ್ತಿರುವುದು ಖಂಡನೀಯ. ಈಗಾಗಲೇ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯೂ ಕಡಿಮೆಯಾಗಿದೆ. ಹೀಗಾಗಿ ಕೆಆರ್‌ಎಸ್‌ ಜಲಾಶಯಕ್ಕೆ ಬರುವ ಒಳಹರಿವು ಸಹ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ನೀರು ಹರಿಸಬಾರದು ಎಂದು ಆಗ್ರಹಿಸಿದರು.
ಅಧಿಕಾರಿಗಳು ನಿನ್ನೆಯಿಂದ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸುತ್ತಿರುವುದು ಈ ಭಾಗದ ಜನರಿಗೆ ಹಾಗೂ ರೈತರಿಗೆ ಮಾಡುವ ದ್ರೋಹವಾಗಿದೆ. ಈ ಕೂಡಲೇ ಅಧಿಕಾರಿಗಳು ನೀರು ಬಿಡುವುದನ್ನು ನಿಲ್ಲಸಬೇಕೆಂದು ಒತ್ತಾಯಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: