ಕರ್ನಾಟಕಪ್ರಮುಖ ಸುದ್ದಿ

ಸಂಕ್ರಾಂತಿ ಹಬ್ಬಕ್ಕೆ ತಾಯಿ-ಮಕ್ಕಳ ಆಸ್ಪತ್ರೆ ಕಟ್ಟಡ ಉದ್ಘಾಟನೆಗೆ ಸಿದ್ಧ ವಿರಬೇಕು : ಸಚಿವ ಡಾ.ಕೆ.ಸುಧಾಕರ್

ರಾಜ್ಯ(ದಾವಣಗೆರೆ )ಜು. 10  :- ದಾವಣಗೆರೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ 100 ಹಾಸಿಗೆ ಸಾಮರ್ಥ್ಯದ ತಾಯಿ-ಮಕ್ಕಳ ಆಸ್ಪತ್ರೆ ಕಟ್ಟಡ ಬರುವ ಸಂಕ್ರಾಂತಿ ಹಬ್ಬದ ವೇಳೆಗೆ ಉದ್ಘಾಟನೆಗೆ ಸಿದ್ಧವಾಗಿರಬೇಕು ಎಂದು ರಾಜ್ಯ ಆರೋಗ್ಯ ಮತ್ತು ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಾಕೀತು ಮಾಡಿದರು.
ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ತಾಯಿ ಮಕ್ಕಳ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೇಂಟರ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗುತ್ತಿರುವ 100 ಹಾಸಿಗೆ ಸಾಮರ್ಥ್ಯದ ತಾಯಿ ಮಕ್ಕಳ ಆರೈಕೆ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ 15 ತಿಂಗಳ ಕಾಲಮಿತಿ ನಿಗದಿಪಡಿಸಲಾಗಿತ್ತು. ಈಗಾಗಲೆ 12 ತಿಂಗಳು ಕಳೆದಿದ್ದು, ಇನ್ನೂ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಹಂತಕ್ಕೆ ಬಂದಿಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಗುತ್ತಿಗೆದಾರರು, ಕೋವಿಡ್ ಲಾಕ್‍ಡೌನ್ ಕಾರಣದಿಂದಾಗಿ ಕಾರ್ಮಿಕರ ಕೊರತೆ ಮೊದಲಾದ ಕಾರಣಕ್ಕೆ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ನಿರೀಕ್ಷಿತ ಪ್ರಮಾಣದ ಕಾಮಗಾರಿ ಆಗಲಿಲ್ಲ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ, ಕಾರ್ಮಿಕರ ಹಾಗೂ ಸಾಮಗ್ರಿಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧವಿರಲಿಲ್ಲ. ಅಲ್ಲದೆ, ಆಸ್ಪತ್ರೆ ಕಟ್ಟಡ ಅತ್ಯಂತ ಅವಶ್ಯಕ ಕ್ಷೇತ್ರದ ನಿರ್ಮಾಣ ಕಾಮಗಾರಿಯಾಗಿದ್ದು, ನೀವು ನೀಡುವ ಕಾರಣ ಸಮಂಜಸವಾಗಿಲ್ಲ. ಆದಾಗ್ಯೂ ಇನ್ನು ಆರು ತಿಂಗಳ ಒಳಗಾಗಿ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡು, ಬರುವ ಸಂಕ್ರಾಂತಿ ಹಬ್ಬದ ವೇಳೆಗೆ ಉದ್ಘಾಟನೆಗೆ ಸಿದ್ಧವಿರಬೇಕು. ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ಲೋಪದೋಷಗಳು ಕಂಡುಬಂದರೆ ಸಹಿಸುವುದಿಲ್ಲ ಎಂದು ಸಚಿವ ಡಾ. ಸುಧಾಕರ್ ಎಚ್ಚರಿಕೆ ನೀಡಿದರು.
ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸ್ಥಳ ಪರಿಶೀಲನೆ 
ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಲು ಜಿಲ್ಲೆಯ ಸಂಸದರು ಮುಂತಾದ ಜನಪ್ರತಿನಿಧಿಗಳಿಂದ ಕೋರಿಕೆ ಬಂದಿರುವ ಹಿನ್ನೆಲೆಯಲ್ಲಿ, ಆರೋಗ್ಯ ಸಚಿವರು, ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ ಸಂಸದರು, ಶಾಸಕರು, ಅಧಿಕಾರಿಗಳೊಂದಿಗೆ, ಜಿಲ್ಲಾ ಆಸ್ಪತ್ರೆ ಆವರಣದ ಸಂಪೂರ್ಣ ನಕ್ಷೆ, ಪ್ರಸ್ತಾವಿತ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಹಾಗೂ ಜಯದೇವ ಹೃದ್ರೋಗ ಉಪಕೇಂದ್ರಕ್ಕೆ ನಿಗದಿಪಡಿಸಿರುವ ನಿವೇಶನದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವರು, ಚಿಗಟೇರಿ ಜಿಲ್ಲಾ ಆಸ್ಪತ್ರೆ ಕಟ್ಟಡ ತುಂಬಾ ಹಳೆಯದಾಗಿದೆ. ಇಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಬೇಕು ಎಂದು ಸಂಸದರು, ಶಾಸಕರುಗಳು ಮನವಿ ಸಲ್ಲಿಸಿದ್ದಾರೆ. ಚಿಗಟೇರಿ ಜಿಲ್ಲಾ ಆಸ್ಪತ್ರೆ 1000 ಹಾಸಿಗೆ ಸಾಮಥ್ರ್ಯದ ಕಟ್ಟಡ ಹೊಂದಿರುವ ಆಸ್ಪತ್ರೆಯಾಗಿದ್ದು, ಇದಕ್ಕೆ ಅನುಗುಣವಾಗಿ ತಜ್ಞ ವೈದ್ಯರು, ಶುಶ್ರೂಷಕರು, ಗ್ರೂಪ್-ಡಿ ಸಿಬ್ಬಂದಿಗಳ ಸಂಖ್ಯೆ ಇಲ್ಲ. ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಈಗಾಗಲೆ ಅಧಿಕಾರಿಗಳು ಅಗತ್ಯವಿರುವ ಭೂಮಿ ಮುಂತಾದವುಗಳ ಬಗ್ಗೆ ವಿವರ ನೀಡಿದ್ದಾರೆ. ಸಾಧ್ಯಾಸಾಧ್ಯತೆಗಳ ಬಗ್ಗೆ ವರದಿ ಸಲ್ಲಿಸಲು ಉನ್ನತ ಮಟ್ಟದ ಅಧಿಕಾರಿಗಳ ತಂಡವನ್ನು ಶೀಘ್ರದಲ್ಲಿಯೇ ಕಳುಹಿಸಿಕೊಡಲಾಗುವುದು ಎಂದರು. ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದ್ದು, ಈ ಕುರಿತು ಕೇಂದ್ರ ಆರೋಗ್ಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ರಾಜ್ಯದಲ್ಲಿ ಈವರೆಗೆ ಸುಮಾರು 2.5 ಕೋಟಿ ಜನರಿಗೆ ಕೋವಿಡ್ ನಿರೋಧಕ ಲಸಿಕೆ ನೀಡಲಾಗಿದ್ದು, ಸದ್ಯ ವಿದ್ಯಾರ್ಥಿಗಳಿಗೆ ಆದ್ಯತೆ ಮೇಲೆ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಲಭ್ಯತೆ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವ ಸುಧಾಕರ್ ಹೇಳಿದರು.
ಮೆಡಿಕಲ್ ಕಾಲೇಜಿಗೆ ಶೀಘ್ರ ಸಂಪುಟದ ಅನುಮೋದನೆ 
ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಅವರು ಮಾತನಾಡಿ, ದಾವಣಗೆರೆ ನಗರದಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವುದು ಶತಃಸಿದ್ಧ. ಈ ನಿಟ್ಟಿನಲ್ಲಿ ಭೂಮಿ ಗುರುತಿಸಿ, ನಕ್ಷೆ ಸಹಿತ ವರದಿ ಸಲ್ಲಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶೀಘ್ರವೇ ಅನುಮೋದನೆ ಪಡೆದು, ಆದಷ್ಟು ಬೇಗ ಶಂಕುಸ್ಥಾಪನೆ ನೆರವೇರಿಸುತ್ತೇವೆ ಎಂದು ಹೇಳಿದರು.
ಶಾಸಕರುಗಳಾದ ಎಸ್.ಎ. ರವೀಂದ್ರನಾಥ್, ರಾಮಚಂದ್ರಪ್ಪ, ಪ್ರೊ. ಲಿಂಗಣ್ಣ, ಜಿಲ್ಲಾ ಪಂಚಾಯತ್ ಸಿಇಒ ಡಾ.ವಿಜಯ ಮಹಾಂತೇಶ್, ಡಿಹೆಚ್‍ಒ ಡಾ. ನಾಗರಾಜ್, ಜಿಲ್ಲಾ ಸರ್ಜನ್ ಡಾ. ಜಯಪ್ರಕಾಶ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: