ಮೈಸೂರು

ಶನಿವಾರ ಮೈಸೂರಿಗೆ ರಣದೀಪ್ ಸಿಂಗ್ ಸುರ್ಜೆವಾಲ್ ಭೇಟಿ : ಧ್ರುವ ನಾರಾಯಣ್ ಮಾಹಿತಿ

ಮೈಸೂರು,ಜು.29:- ಬರುವ ಶನಿವಾರ ಅಂದರೆ ಜು.31ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಮಾಹಿತಿ ನೀಡಿದರು.
ಮೈಸೂರಿನ ಕಾಂಗ್ರೆಸ್ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶನಿವಾರ ಮೈಸೂರಿಗೆ ಆಗಮಿಸಲಿರುವ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ ಜಿಲ್ಲೆಗಳ ಮುಖಂಡರ ಜೊತೆ ಮಾತುಕತೆ ನಡೆಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಅಂದಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ದೃಷ್ಟಿಯಿಂದ ಮೈಸೂರಿನಲ್ಲಿ ವಿವಿಧ ಜಿಲ್ಲೆಗಳ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ತೊರೆದಿರುವವರು ಮರಳಿ ಪಕ್ಷಕ್ಕೆ ಬಂದರೆ ಏಕಾಏಕಿ ಸೇರ್ಪಡೆ ಮಾಡಿಕೊಳ್ಳುವುದಿಲ್ಲ. ಈ ಬಗ್ಗೆ ಪರಿಶೀಲಿಸಲು ಅಲ್ಲಂ ವೀರಭದ್ರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಆ ಸಮಿತಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ. ಈ ವಿಚಾರದಲ್ಲಿ ಬೇರೆಯವರು ಮಧ್ಯಪ್ರವೇಶಿಸಲು ಅವಕಾಶವಿಲ್ಲ. ಅಲ್ಲಂ ವೀರಭದ್ರಪ್ಪ ನೇತೃತ್ವದ ಸಮಿತಿ ಕೈಗೊಳ್ಳುವ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.

ಹುಣಸೂರು ಶಾಸಕ ಹೆಚ್.ಪಿ.ಮಂಜುನಾಥ್ ಮಾತನಾಡಿ ಬಿ ಎಸ್ ಯಡಿಯೂರಪ್ಪ 4 ಬಾರಿ ಮುಖ್ಯಮಂತ್ರಿ ಆದರೂ ಹುಣಸೂರು ಕ್ಷೇತ್ರಕ್ಕೆ ಅವರ ಕೊಡುಗೆ ಶೂನ್ಯ ಎಂದು ಆರೋಪಿಸಿದರು.

ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದ ನಾಲ್ಕು ಅವಧಿಯಲ್ಲೂ ಹುಣಸೂರು ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಿದರು. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಯಡಿಯೂರಪ್ಪ ಮಾಡಿದಂತೆ ಮಾಡಬಾರದು. ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಆರಂಭಕ್ಕೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮಾಜಿ ಶಾಸಕ ವಾಸು ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: