ಕರ್ನಾಟಕಪ್ರಮುಖ ಸುದ್ದಿ

ತಂಬಾಕು ನಿಯಂತ್ರಣ: ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಾಮಫಲಕ ಅಳವಡಿಕೆ ಕಡ್ಡಾಯ : ಪೂಜಾರ ವೀರಮಲ್ಲಪ್ಪ

ರಾಜ್ಯ( ದಾವಣಗೆರೆ),ಆ.2:- ಶಾಲೆ-ಕಾಲೇಜು ಮಟ್ಟದಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚನೆ ಮಾಡಿ ಶಾಲಾ-ಕಾಲೇಜುಗಳು, ಆಸ್ಪತ್ರೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಧೂಮಪಾನ ನಿಷೇಧಿತ ಪ್ರದೇಶ ಎಂಬ ನಾಮಫಲಕ ಅಳವಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದ ಅಪರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ತಂಬಾಕು ಮಾರಾಟ ಮಾಡುವ ಅಂಗಡಿಗಳಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯ ಸೂಚನಾ ಫಲಕಗಳನ್ನು ಅಳವಡಿಸುವಂತೆ ಸೂಚನೆ ನೀಡಬೇಕು. ತಾಲ್ಲೂಕು, ಗ್ರಾಮ ಪಂಚಾಯಿತಿಗಳಲ್ಲಿ ಸಭೆ ಸೇರಿಸಿ ವ್ಯಾಪಕ ಪ್ರಚಾರ ಮಾಡಬೇಕು. ಶಾಲೆ-ಕಾಲೇಜುಗಳಲ್ಲಿ ತಂಬಾಕಿನಿಂದ ಉಂಟಾಗುವ ದುಷ್ಪರಿಣಾಗಳ ಕುರಿತು ಹಾಗೂ ಕೋಟ್ಪಾ-2003 ಕಾಯ್ದೆಯ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಎಲ್ಲಾ ತಾಲ್ಲೂಕು ಕೇಂದ್ರ ಮತ್ತು ಹೋಬಳಿಗಳಲ್ಲಿ ನಿಯೋಜಿತ ತಂಬಾಕು ದಾಳಿಗಳನ್ನು ನಡೆಸಿ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿತ ಪ್ರದೇಶ ಎಂಬ ನಾಮಫಲಕಗಳನ್ನು ಅಳವಡಿಸಬೇಕು ಎಂದರು.
ತಂಬಾಕು ನಿಯಂತ್ರಣ ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕೆ ವಿವಿಧ ಇಲಾಖೆಗಳ ಸಹಕಾರ ಅತ್ಯಗತ್ಯವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಅಧಿಕಾರಿಗಳು ದಂಡ ವಿಧಿಸಬೇಕು. ಪ್ರತಿ ತಿಂಗಳು ತಂಬಾಕು ನಿಯಂತ್ರಣ ಕಾಯ್ದೆ ಕಾರ್ಯಕ್ರಮದ ಮಾಸಿಕ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಕಾರ್ಯಕ್ರಮದ ಅಧಿಕಾರಿ ಮಾತನಾಡಿ, ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಸಂಬಂಧ ನಾಮಫಲಕ ಅಳವಡಿಸುವುದು ಸಂಬಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಚಿತ್ರ ಪ್ರದರ್ಶನ, ಕಲಾಸ್ಪರ್ಧೆ ಏರ್ಪಡಿಸಿ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಯಂತ್ರಣ ನಾಮಫಲಕ ಅಳವಡಿಸಲಾಗಿದೆ. ಹಾಗೆಯೇ ಈ ಕುರಿತು ಎಲ್ಲಾ ಕಡೆ ಜಾಗೃತಿ ಮೂಡಿಸಲಾಗುತ್ತಿದೆ ಎಂದ ಅವರು,
ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ಇಲ್ಲಿಯವರೆಗೂ 89 ಜನರಿಗೆ ಆಪ್ತ ಸಮಾಲೋಚನೆ ನಡೆಸಿದ್ದು, 10 ಜನ ಸಂಪೂರ್ಣ ತಂಬಾಕು ಸೇವನೆಯಿಂದ ಮುಕ್ತರಾಗಿದ್ದಾರೆ. 18 ಜನರು ತಂಬಾಕು ಸೇವನೆ ಬೀಡುವ ಹಂತದಲ್ಲಿದ್ದಾರೆ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ವ್ಯಾಪ್ತಿಯಡಿ ಬರುವ ಶಾಲಾ-ಕಾಲೇಜುಗಳಲ್ಲಿ ತಂಬಾಕು ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ.ರಾಜೀವ್ ಮಾತನಾಡಿ, ಜಿಲ್ಲೆಯಲ್ಲಿ ಕೋಟ್ಪ ಕಾಯ್ದೆಯಡಿ 2020-21 ರಲ್ಲಿ 4334 ಪ್ರಕರಣಗಳನ್ನು ದಾಖಲಿಸಲಾಗಿದ್ದು, ರೂ.4,37,190 ದಂಡ ವಿಧಿಸಲಾಗಿದೆ. ಪ್ರಸಕ್ತ ಸಾಲಿನ ಏಪ್ರಿಲ್-ಜುಲೈ ತಿಂಗಳವರೆಗೆ 2016 ಪ್ರಕರಣಗಳನ್ನು ದಾಖಲಿಸಲಾಗಿದ್ದು, ರೂ.2,20,190 ದಂಡ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಕೋಟ್ಪಾ ಕಾಯ್ದೆಯಡಿ ವಸೂಲಿ ಮಾಡಿದ ಹಣವನ್ನು ನಿರ್ದಿಷ್ಟ ಖಾತೆಗೆ ಹಾಕಿ, ತಂಬಾಕು ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾತನಾಡಿ, ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿರುವ ವ್ಯಸನ ಮುಕ್ತ ಕೇಂದ್ರದಲ್ಲಿ ವ್ಯಸನಿಗಳಿಗೆ ಸೂಕ್ತ ಆಪ್ತ ಸಮಾಲೋಚನೆ ನಡೆಸಿ ತಂಬಾಕು ವ್ಯಸನದಿಂದ ಮುಕ್ತಿ ನೀಡುತ್ತಿರುವುದರ ಕುರಿತು ಆಶಾ ಕಾರ್ಯಕರ್ತೆಯರ ಮೂಲಕ ಭಿತ್ತಿ ಪತ್ರ ಹಂಚಿಸಬೇಕು. ಈ ಕುರಿತು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಚಾರ ಮಾಡಬೇಕು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್ ರೇಷ್ಮ ಮಾತನಾಡಿ, ತಂಬಾಕಿನಿಂದ ಆಗುವ ದುಷ್ಪರಿಣಾಮಗಳ ಕುರಿತು ಮೊದಲು ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ನೀಡಬೇಕು. ಇವರುಗಳಿಂದ ಆಯಾ ನಗರವ್ಯಾಪ್ತಿಯಲ್ಲಿ ಹೆಚ್ಚು ಹೆಚ್ಚು ಜಾಗೃತಿ ಮೂಡಿಸಬಹುದು. ಹಾಗೂ ಜಿಲ್ಲಾಸ್ಪತ್ರೆಯಲ್ಲಿರುವ ತಂಬಾಕು ವ್ಯಸನ ಮುಕ್ತ ಕೇಂದ್ರದ ಕುರಿತು ಸಾರ್ವಜನಿಕರಲ್ಲಿ ಮಾಹಿತಿಯ ಕೊರತೆ ಇರುವುದರಿಂದ ಹೆಚ್ಚು ಹೆಚ್ಚು ಪ್ರಚಾರ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ವೇಳೆ ಜಿಲ್ಲೆ ತಂಬಾಕು ನಿಯಂತ್ರಣದಡಿ ಶೇ.85 ಕ್ಕಿಂತ ಹೆಚ್ಚಿನ ಅನುಷ್ಠಾನ ಹೊಂದಿರುವ ಪ್ರಯುಕ್ತ ಅಧಿಕಾರಿಗಳಿಂದ ಘೋಷಣಾ ಪತ್ರವನ್ನು ಬಿಡುಗಡೆ ಮಾಡಿ, ಜಿಲ್ಲೆಯನ್ನು ಕೋಟ್ಪಾ-2003 ರ ಕಾಯ್ದೆಯ ಉನ್ನತ ಅನುಷ್ಠಾನ ಜಿಲ್ಲೆಯೆಂದು ಘೋಷಣೆ ಮಾಡಲಾಯಿತು.
ಘೋಷಣಾ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ತಂಬಾಕು ನಿಯಂತ್ರಣ ತನಿಖಾ ದಳದ ಸದಸ್ಯರುಗಳಿಗೆ ಕೋಟ್ಪಾ-2003 ರ ಕಾಯ್ದೆಯ ಉನ್ನತ ಅನುಷ್ಠಾನ ದಾವಣಗೆರೆ ಜಿಲ್ಲೆ ಎಂದು ಘೋಷಿಸಿರುವ ಸ್ಮರಣಿಕೆಯನ್ನ ಎಲ್ಲ ತಾಲ್ಲೂಕು ತಹಶೀಲ್ದಾರರಿಗೆ, ತಾಲ್ಲೂಕು ಆರೋಗ್ಯ ಅಧಿಕಾರಿಗಳಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ನಗರ ಸಭೆ ಪೌರಾಯುಕ್ತರಿಗೆ, ಪುರಸಭೆ, ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಗಳಿಗೆ ಹಾಗೂ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಎಲ್ಲ ಸದಸ್ಯರುಗಳಿಗೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಡಿಹೆಚ್‍ಓ ಡಾ.ನಾಗರಾಜ್, ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಪ್ರವೀಣ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಪರಮೇಶ್ವರಪ್ಪ, ಎಲ್ಲಾ ತಾಲ್ಲೂಕು ತಹಶೀಲ್ದಾರರು, ಆರೋಗ್ಯ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿಯ ಅಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: