ಕರ್ನಾಟಕದೇಶಪ್ರಮುಖ ಸುದ್ದಿ

ಯೋಗೇಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಷರುತ್ತುಬದ್ಧ ಜಾಮೀನು ಮಂಜೂರು

ನವದೆಹಲಿ/ಧಾರವಾಡ:ಆ.11- ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮತ್ತು ಅಜಯ್ ರಸ್ತೋಗಿ ಅವರಿದ್ದ ಪೀಠ ಜಾಮೀನು ನೀಡಿದೆ. ಧಾರವಾಡಕ್ಕೆ ಭೇಟಿ ನೀಡದಿರುವುದು, ಸಿಬಿಐ ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಿ ಸಹಕರಿಸಬೇಕು ಎಂಬ ಷರತ್ತನ್ನೂ ವಿಧಿಸಲಾಗಿದೆ.

ಕರ್ನಾಟಕ ಹೈಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹೀಗಾಗಿ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಜಾಮೀನು ನೀಡಬಾರದು ಎಂದು ಸಿಬಿಐ ಆಕ್ಷೇಪಣೆಯನ್ನು ಸಲ್ಲಿಸಿತ್ತು.

ಸುಪ್ರೀಂಕೋರ್ಟ್‌ನಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿಗೆ ಆಕ್ಷೇಪಣೆ ವ್ಯಕ್ತಪಡಿಸಿದ್ದ ಸಿಬಿಐ, ಆರೋಪಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಯಾದರೆ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಕೊಲೆಯಾದ ಯೋಗೇಶ್ ಗೌಡ ಪತ್ನಿಗೆ ಈಗಾಗಲೇ ಅವರು ಬೆದರಿಕೆ ಹಾಕಿದ್ದಾರೆ ಎಂದು ವಾದ ಮಂಡನೆ ಮಾಡಿತ್ತು. ಆದರೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

2016ರಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ 2020ರ ನವೆಂಬರ್ 5 ರಂದು ಬಂಧಿಸಿತ್ತು. ಸದ್ಯ ಅವರು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.

 

Leave a Reply

comments

Related Articles

error: