ಕರ್ನಾಟಕಪ್ರಮುಖ ಸುದ್ದಿ

ರಾಷ್ಟ್ರೀಯ ಶಿಕ್ಷಣ ನೀತಿಗೆ ಚಾಲನೆ ನೀಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ಬೆಂಗಳೂರು,ಆ.23-ರಾಷ್ಟ್ರೀಯ ಶಿಕ್ಷಣ ನೀತಿಯು ಹೊಸ ಜ್ಞಾನಾಧಾರಿತ ವ್ಯವಸ್ಥೆಯನ್ನು ರಚನೆ ಮಾಡಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2021-22ಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಲ್ಲಿ ಕರ್ನಾಟಕ ಸಾಕಷ್ಟು ಮುಂದಿದೆ. ನೀತಿ ಅನುಷ್ಠಾನದಲ್ಲಿ ಎದುರಾಗಬಹುದಾದ ಸವಾಲುಗಳನ್ನು ಸಮರ್ಪಕವಾಗಿ ಎದುರಿಸಬೇಕು ಎಂದು‌ ಸಲಹೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಸದ್ಯ ಶಿಕ್ಷಣದಲ್ಲಿರುವ ಜಡ್ಡುಕಟ್ಟಿದ ವ್ಯವಸ್ಥೆ ಮತ್ತು ನೀತಿಗೆ ಎನ್‌ಇಪಿಯಿಂದ ಮುಕ್ತಿ ಸಿಗಲಿದೆ. ಶಿಕ್ಷಣಕ್ಕೆ ಇಂದು ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು, ಇಂದು ಮಾತ್ರವಲ್ಲ ಮುಂದಿನ ಜನಾಂಗಕ್ಕೂ ಇದು ಸ್ವಾತಂತ್ರ್ಯವೇ ಆಗಲಿದೆ. ಎನ್‌ಇಪಿ ಯಶಸ್ವಿಯಾದಲ್ಲಿ ಪ್ರತಿವರ್ಷ ಆಗಸ್ಟ್ 23 ಶಿಕ್ಷಣ ದಿನಾಚರಣೆಯಾಗಿ ಅಚರಿಸುವ ದಿನ ಬರಲಿದೆ ಎಂದರು.

ಪ್ರಧಾನಿ ಮೋದಿಯವರು ದೂರದೃಷ್ಟಿಯ ನಾಯಕರಾಗಿದ್ದು, ಶಿಕ್ಷಣ ವ್ಯವಸ್ಥೆಯ ಮೂಲಭೂತ ಬದಲಾವಣೆಗೆ ಎನ್‌ಇಪಿ ಸಾಕ್ಷ್ಯಿಯಾಗಲಿದೆ. ಅನುಷ್ಠಾನವೇ ದೊಡ್ಡ ಸವಾಲಾಗಿದೆ. ಅದನ್ನು ಬುದ್ದಿವಂತಿಕೆಯಿಂದ ಅನುಷ್ಠಾನ ಮಾಡಬೇಕು. ಇಲಾಖೆ ಆಧಾರಿತ ಶಿಕ್ಷದ ಬದಲಿಗೆ ವಿದ್ಯಾರ್ಥಿ ಆಧಾರಿತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು. ಈ ನಿಟ್ಟಿನಲ್ಲಿ ಎನ್‌ಇಪಿ ಸಾಕಷ್ಟು ಬದಲಾವಣೆ ತರಲಿದೆ. ವಿದ್ಯಾರ್ಥಿಗಳ ಕ್ರಿಯಾತ್ಮಕತೆ, ಜ್ಞಾನವನ್ನು ಪೂರ್ಣಪ್ರಮಾಣದ ಅಭಿವ್ಯಕ್ತಿಗೆ ಸಹಕಾರಿಯಾಗಲಿದೆ. ವಿದ್ಯಾರ್ಥಿಯ ಕ್ರಿಯಾಶೀಲತೆಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಾರಂಭಿಸುವುದರ ಜೊತೆಗೆ ಕರ್ನಾಟಕ ಶಿಕ್ಷಣ ಇಲಾಖೆಯು ವಿದ್ಯಾರ್ಥಿ ಸಮುದಾಯದಲ್ಲಿ ನೀತಿಯ ಬಗ್ಗೆ ಜಾಗೃತಿ ಮೂಡಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಶಿಕ್ಷಣ ಸಂಸ್ಥೆಗಳ ಅಧ್ಯಾಪಕರು ಮತ್ತು ನಿರ್ವಹಣಾ ಸಿಬ್ಬಂದಿಗೆ ಸಂವಹನ, ಸೆಮಿನಾರ್‌ಗಳು ಮತ್ತು ಕಾರ್ಯಾಗಾರಗಳನ್ನು ನಡೆಸುವ ಮೂಲಕ ನೀತಿಯ ಬಗ್ಗೆ ಮಾಹಿತಿ ಮತ್ತು ತರಬೇತಿ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಪ್ರಾಥಮಿಕ ಹಾಗೂ ಪ್ರೌಡಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಡಾ.ಕೆ.ಕಸ್ತೂರಿ ರಂಗನ್, ಉನ್ನತ ಶಿಕ್ಷಣ ಇಲಾಖೆಯ ಪ್ರಭಾರ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ಇದ್ದರು. (ಎಂ.ಎನ್)

 

Leave a Reply

comments

Related Articles

error: