
ಮೈಸೂರು
ನಿಯಮ ಮೀರಿದರೆ ಶೋಕಾಸ್ ನೋಟಿಸ್ ನೀಡಿ : ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್
ಮೈಸೂರು, ಆ. 23 :- ತಂಬಾಕು ಮಾರಾಟದಲ್ಲಿ ನಿಯಮ ಮೀರಿದರೆ ಅಧಿಕಾರಿಗಳು ದಂಡ ವಿಧಿಸುವುದರ ಜೊತೆಗೆ ಶೋಕಾಸ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಪರವಾನಗಿ ಇದ್ದು ನಿಯಮ ಮೀರಿದ ಅಂಗಡಿಗಳಿಗೆ ನೋಟಿಸ್ ನೀಡಿ ಎಚ್ಚರಿಸಬೇಕು. ನೋಟಿಸ್ ನೋಡಿಯು ಎಚ್ಚೆತ್ತುಕೊಳ್ಳದ ಅಂಗಡಿ ಮಾಲಿಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಪರವಾನಗಿ ಇಲ್ಲದ ಅಂಗಡಿಗಳನ್ನು ಮುಚ್ಚಿಸಬೇಕು ಎಂದರು.
ತಂಬಾಕು ಬೆಳೆಗೆ ಪರ್ಯಾಯವಾಗಿ ಬೇರೆ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಬೇಕು. ಹಾಗೆಯೇ ಪರ್ಯಾಯ ಬೆಳೆ ಬೆಳೆದಿರುವ ರೈತರನ್ನು ಸಂಪರ್ಕಿಸಿ ಅದರಿಂದಾಗುತ್ತಿರುವ ಪ್ರಯೋಜನಗಳ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಿ ಹೆಚ್ಚು ಪ್ರಚಾರ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್.ಪ್ರಸಾದ್, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ. ಶಿವಪ್ರಸಾದ್ ತಾಲ್ಲೂಕು ವೈದ್ಯಾಧಿಕಾರಿ ಡಾ.ಮಹದೇವ ಪ್ರಸಾದ್, ಡಿವೈಎಸ್ಪಿ ಯೋಗೇಂದ್ರನಾಥ್ ಸೇರಿದಂತೆ ಇತರರು ಹಾಜರಿದ್ದರು. (ಜಿ.ಕೆ,ಎಸ್.ಎಚ್)