ದೇಶಪ್ರಮುಖ ಸುದ್ದಿ

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ

ಚಂಡೀಗಢ,ಸೆ.18-ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನವೇ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇಂದು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಭೇಟಿಯಾಗಿ ಅಮರಿಂದರ್ ಸಿಂಗ್ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ರಾಜೀನಾಮೆ ಸಲ್ಲಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ರಾಜೀನಾಮೆ ಬಗ್ಗೆ ಬೆಳಿಗ್ಗೆಯೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಮಾಹಿತಿ ನೀಡಿದ್ದೇನೆ. ನನಗೆ ಮಾಹಿತಿ ನೀಡದೆ ಈಗಾಗಲೇ 3 ಸಲ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿದೆ. ನನಗೆ ಅವಮಾನವಾಗಿದೆ. ಅವರು ವಿಶ್ವಾಸ ಹೊಂದಿರುವ ಯಾರನ್ನಾದರೂ ಸಿಎಂ ಆಗಿ ನೇಮಿಸಬಹುದು. ಕಾಂಗ್ರೆಸ್ ಅಧ್ಯಕ್ಷರು ಏನೇ ನಿರ್ಧರಿಸಿದರೂ ಸರಿ. ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇನೆ ಹಾಗೂ ನನ್ನ ಬೆಂಬಲಿಗರೊಂದಿಗೆ ಸಮಾಲೋಚಿಸಿದ ನಂತರ ಭವಿಷ್ಯದ ರಾಜಕೀಯದ ಬಗ್ಗೆ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.

ಇಂದು ಸಂಜೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿರುವುದಾಗಿ ಈ ಮೊದಲು ವರದಿಯಾಗಿತ್ತು.

ಪಂಜಾಬ್ ಕಾಂಗ್ರೆಸ್ ನಲ್ಲಿ ನಾಟಕೀಯ ಬೆಳವಣಿಗೆ ನಡೆದಿದ್ದು, ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ ನಡೆಸಲು ಎಐಸಿಸಿ ನಿರ್ಧರಿಸಿತ್ತು. ಅಲ್ಲದೇ ಶಾಸಕಾಂಗ ಸಭೆಯಲ್ಲಿ ನೂತನ ನಾಯಕನ ಆಯ್ಕೆ ಮಾಡುವ ಬಗ್ಗೆ ಪಂಜಾಬ್ ನ ಹಲವು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ವರದಿಯಾಗಿತ್ತು.

ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಮೊದಲು ಮುಖ್ಯಮಂತ್ರಿಯನ್ನು ಬದಲಿಸಬೇಕೆಂದು ಪಂಜಾಬ್ ಕಾಂಗ್ರೆಸ್ ನ 80 ಶಾಸಕರ ಪೈಕಿ 50 ಶಾಸಕರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: