ಕರ್ನಾಟಕಪ್ರಮುಖ ಸುದ್ದಿ

ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ; ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ರಾಜ್ಯ(ಮಡಿಕೇರಿ )ಸೆ.23:-ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವು ಅಕ್ಟೋಬರ್, 17 ರಂದು ಜರುಗುವ ಹಿನ್ನೆಲೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೋವಿಡ್ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಬೇಕು. ವೈದ್ಯರು, ಶುಶ್ರೂಷಕರು, ಆಂಬ್ಯುಲೆನ್ಸ್ ಹೀಗೆ ಅಗತ್ಯ ತಂಡವನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಭಾಗಮಂಡಲ ಗ್ರಾ.ಪಂ.ವತಿಯಿಂದ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಸ್ವಚ್ಛತೆಗೆ ಒತ್ತು ನೀಡುವುದು, ಕುಡಿಯುವ ನೀರು ಪೂರೈಕೆ, ಶೌಚಾಲಯ, ವಾಹನ ನಿಲುಗಡೆ ನಿರ್ವಹಣೆಗೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಲೋಕೋಪಯೋಗಿ ಇಲಾಖೆಯಿಂದ ಮಡಿಕೇರಿಯಿಂದ ತಲಕಾವೇರಿಯವರೆಗೆ ರಸ್ತೆಗಳ ಗುಂಡಿ ಮುಚ್ಚುವುದು, ರಸ್ತೆ ಬದಿ ಗಿಡಗಳನ್ನು ಕಡಿಯುವುದು ಮತ್ತಿತರ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ನೀರಾವರಿ ಇಲಾಖೆ ವ್ಯಾಪ್ತಿಯ ಭಾಗಮಂಡಲ ರಸ್ತೆ ಸರಿಪಡಿಸುವುದು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವತಿಯಿಂದ ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಮಾಡುವುದು, ಕೋವಿಡ್-19 ಹಿನ್ನೆಲೆ ಸರ್ಕಾರದ ನಿಯಮಗಳನ್ನು ಪಾಲಿಸುವುದು ಹಾಗೂ ತುಲಾ ಸಂಕ್ರಮಣ ದಿನದಂದು ಅಗತ್ಯ ಬಸ್‍ಗಳ ನಿಯೋಜನೆಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
“ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಾರ್ವಜನಿಕರ ಪ್ರವೇಶ ಸಂಬಂಧ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಅವರು ತುಲಾ ಸಂಕ್ರಮಣಕ್ಕೆ ಪೊಲೀಸ್ ಇಲಾಖೆ ವತಿಯಿಂದ ಪೊಲೀಸರು ಮತ್ತು ಹೋಂ ಗಾರ್ಡ್‍ಗಳ ನಿಯೋಜನೆಗೆ ಅಗತ್ಯ ಕ್ರಮವಹಿಸಲಾಗುವುದು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಪವಿತ್ರ ತೀರ್ಥೋದ್ಭವ ಸಂಬಂಧ ವಿವಿಧ ಇಲಾಖೆಗಳು ಕಳೆದ ಬಾರಿಯಂತೆ ಅಗತ್ಯ ತಯಾರಿ ಮಾಡಿಕೊಳ್ಳಬೇಕು. ಜಿಲ್ಲಾಡಳಿತದ ಜೊತೆ ಕೈಜೋಡಿಸುವಂತೆ ತಿಳಿಸಿದರು.
ಭಾಗಮಂಡಲ-ತಲಕಾವೇರಿ ದೇವಾಲಯಗಳ ಕಾರ್ಯ ನಿರ್ವಹಣಾಧಿಕಾರಿ ಬಿ.ಎಂ.ಕೃಷ್ಣಪ್ಪ ಅವರು ಪವಿತ್ರ ತೀರ್ಥೋದ್ಭವಕ್ಕೆ ದೇವಾಲಯ ವತಿಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು. ಪವಿತ್ರ ತೀರ್ಥೋದ್ಭವ ಸಂಬಂಧ ವಿವಿಧ ಇಲಾಖೆಗಳು ಕೈಜೋಡಿಸುವಂತೆ ಅವರು ಮನವಿ ಮಾಡಿದರು.
ಕಳೆದ ಬಾರಿ ದಾಸೋಹವನ್ನು ದೇವಾಲಯ ವತಿಯಿಂದ ಏರ್ಪಡಿಸಲಾಗಿತ್ತು, ಈ ಬಾರಿ ದಾನಿಗಳು ಮುಂದೆ ಬಂದಿದ್ದು, ಅವಕಾಶ ನೀಡಿದ್ದಲ್ಲಿ ಅನ್ನದಾನ ಮಾಡಲಿದ್ದಾರೆ ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ತಲಕಾವೇರಿ ಪವಿತ್ರ ತೀರ್ಥೋದ್ಭವ ಸಂಬಂಧ ಕೋವಿಡ್ ಮಾರ್ಗಸೂಚಿ ಪಾಲಿಸುವ ಬಗ್ಗೆ ಜಾಗೃತಿ ಮೂಡಿಸಲಾಗುವುದು. ವೈದ್ಯರ ತಂಡ ಹಾಗೂ ಆಂಬ್ಯುಲೆನ್ಸ್ ನಿಯೋಜನೆ ಮತ್ತಿತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪವಿತ್ರ ತೀರ್ಥೋದ್ಭವ ಸ್ಥಳಕ್ಕೆ ತೆರಳುವವರಿಗೆ ಆರ್‍ಟಿಪಿಸಿಆರ್ ಪರೀಕ್ಷೆ ಅಗತ್ಯವಿದ್ದಲ್ಲಿ, ಅಕ್ಟೋಬರ್, 13 ಮತ್ತು 14 ರಂದು ಆರ್‍ಟಿಪಿಸಿಆರ್ ಪರೀಕ್ಷೆ ಮಾಡಲಾಗುವುದು ಎಂದರು.
ತಾ.ಪಂ.ಇಒ ಶೇಖರ್ ಅವರು ಪಂಚಾಯತ್ ರಾಜ್ ಇಲಾಖೆಯಿಂದ ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪ ಮತ್ತಿತರ ಸಂಬಂಧ ಕಳೆದ ಬಾರಿಯಂತೆ ವ್ಯವಸ್ಥೆ ಮಾಡಲಾಗುವುದು ಎಂದರು.
ಪೊಲೀಸ್ ಇನ್ಸ್‍ಪೆಕ್ಟರ್ ಮೇದಪ್ಪ ಅವರು ಮಾತನಾಡಿ ಕೋವಿಡ್-19 ಹಿನ್ನೆಲೆ ತೀರ್ಥೋದ್ಭವ ಸಂದರ್ಭದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಕಳೆದ ವರ್ಷ ಅವಕಾಶ ಇರಲಿಲ್ಲ ಎಂದು ಸಭೆಯ ಗಮನಕ್ಕೆ ತಂದರು.
ಲೋಕೋಪಯೋಗಿ ಇಲಾಖೆ ಇಇ ನಾಗರಾಜು ಅವರು ಮಡಿಕೇರಿ-ತಲಕಾವೇರಿವರೆಗೆ ರಸ್ತೆ ಗುಂಡಿ ಮುಚ್ಚಲಾಗುವುದು, ರಸ್ತೆ ಬದಿ ಗಿಡ ಕಡಿಯಲಾಗುವುದು ಎಂದು ಹೇಳಿದರು.
ವಾರ್ತಾಧಿಕಾರಿ ಚಿನ್ನಸ್ವಾಮಿ ಪವಿತ್ರ ತೀರ್ಥೋದ್ಭವದಂದು ವಿದ್ಯುನ್ಮಾನ ಮಾಧ್ಯಮಗಳಿಂದ ನೇರ ಪ್ರಸಾರ ಮಾಡಲಿದ್ದು, ಆ ನಿಟ್ಟಿನಲ್ಲಿ ‘ಒಬಿ’ ವಾಹನ ನಿಲುಗಡೆಗೆ ಕಳೆದ ವರ್ಷದಂತೆ ಸ್ಥಳಾವಕಾಶ ಕಲ್ಪಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು.
ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡೂ, ಡಿವೈಎಸ್‍ಪಿ ಗಜೇಂದ್ರ ಪ್ರಸಾದ್, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ, ಲೋಕೋಪಯೋಗಿ ಇಲಾಖೆ ಎಇಇ ಶಿವರಾಮ್, ಪೊಲೀಸ್ ಇನ್ಸ್‍ಪೆಕ್ಟರ್ ಅನೂಪ್ ಮಾದಪ್ಪ, ಪೌರಾಯುಕ್ತರಾದ ರಾಮದಾಸ್, ದೇವಾಲಯ ಸಿಬ್ಬಂಧಿಗಳು ಇತರರು ಇದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: