ಕರ್ನಾಟಕಪ್ರಮುಖ ಸುದ್ದಿ

ಮಹಾತ್ಮ ಗಾಂಧಿ ಜಯಂತಿ: ಸ್ವಚ್ಚತಾ ಅಭಿಯಾನಕ್ಕೆ ಡಿಸಿ ಸಲಹೆ

ರಾಜ್ಯ( ಮಡಿಕೇರಿ )ಸೆ.23:- ಆಕ್ಟೊಬರ್ 02 ರಂದು ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವಲ್ಲಿ ವಿವಿಧ ಇಲಾಖೆ ಕಚೇರಿಗಳಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸಲಹೆ ಮಾಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಗಾಂಧಿ ಜಯಂತಿಯನ್ನು ವಿಶಿಷ್ಟವಾಗಿ ಆಚರಿಸುವಲ್ಲಿ ಮುಂದಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಗಾಂಧಿ ಜಯಂತಿಯನ್ನು ವಿಶೇಷ ಹಾಗೂ ವಿಶಿಷ್ಟವಾಗಿ ಆಚರಿಸುವಲ್ಲಿ ಎಲ್ಲರೂ ಕೈಜೋಡಿಸಬೇಕಿದೆ. ಆ ನಿಟ್ಟಿನಲ್ಲಿ ನಗರದ ಕೋಟೆ ಆವರಣ ಮತ್ತಿತರ ಕಡೆಗಳಲ್ಲಿ ನಗರಸಭೆ, ಎನ್‍ಸಿಸಿ, ಎನ್‍ಎಸ್‍ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಇಲಾಖೆಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳುವಂತೆ ಅವರು ಕೋರಿದರು.
ಪೌರಾಯುಕ್ತರಾದ ಎಸ್.ವಿ.ರಾಮದಾಸ್ ಅವರು ಗಾಂಧಿ ಮಂಟಪದಲ್ಲಿ ಸ್ವಚ್ಛತೆ ಮಾಡಲಾಗುವುದು. ಸ್ಕೌಟ್ಸ್ ಮತ್ತು ಎನ್‍ಸಿಸಿ ಜೊತೆ ಸೇರಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಸಂಘಟಕರಾದ ದಮಯಂತಿ ಅವರು ಗ್ರಾ.ಪಂ.ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ತಾ.ಪಂ.ಇಒ ಶೇಖರ್ ಅವರು ಗ್ರಾ.ಪಂ.ಮಟ್ಟದಲ್ಲಿಯೂ ಸ್ವಚ್ಚತಾ ಅಭಿಯಾನಕ್ಕೆ ಕ್ರಮವಹಿಸಲಾಗುವುದು ಎಂದರು. ವಾರ್ತಾಧಿಕಾರಿ ಚಿನ್ನಸ್ವಾಮಿ ಅವರು ಗಾಂಧಿ ಜಯಂತಿ ಸಂಬಂಧ ಹಲವು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡೂ, ಡಿವೈಎಸ್‍ಪಿ ಗಜೇಂದ್ರ ಪ್ರಸಾದ್, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ, ಲೋಕೋಪಯೋಗಿ ಇಲಾಖೆ ಎಇಇ ಶಿವರಾಮ್, ಪೊಲೀಸ್ ಇನ್ಸ್‍ಪೆಕ್ಟರ್ ಅನೂಪ್ ಮಾದಪ್ಪ, ಎನ್‍ಸಿಸಿ ಅಧಿಕಾರಿ ಕೇಶವ್ ಇತರರು ಇದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: