ಕ್ರೀಡೆಪ್ರಮುಖ ಸುದ್ದಿವಿದೇಶ

ಕೆಕೆಆರ್ ತಂಡದ ನಾಯಕ ಐಯಾನ್ ಮಾರ್ಗನ್ ಗೆ 24 ಲಕ್ಷ ರೂ. ದಂಡ

ಅಬುಧಾಬಿ,ಸೆ.24-ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯಗಳಿಸಿದ ಬೆನ್ನಲ್ಲೇ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಐಯಾನ್ ಮಾರ್ಗನ್ ಗೆ ದಂಡ ವಿಧಿಸಲಾಗಿದೆ.

ಸ್ಲೋ ಓವರ್‌ ರೇಟ್‌ನಿಂದಾಗಿ ಐಯಾನ್‌ ಮೊರ್ಗನ್‌ಗೆ ಬರೋಬ್ಬರಿ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಕನಿಷ್ಠ ಓವರ್‌ಗಳ ರೇಟ್‌ ಅಪರಾಧ ಸಂಬಂಧ ಕೋಲ್ಕತಾ ನೈಟ್‌ ರೈಡರ್ಸ್ ತಂಡದ ಪಾಲಿಗೆ ಪ್ರಸಕ್ತ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಇದು ಎರಡನೇ ಪ್ರಕರಣವಾಗಿದೆ. ಈ ಹಿನ್ನೆಲೆಯಲ್ಲಿ ಕೆಕೆಆರ್‌ ನಾಯಕ ಐಯಾನ್‌ ಮಾರ್ಗನ್‌ ಅವರಿಗೆ 24 ಲಕ್ಷ ರೂ. ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಇದರ ಜೊತೆಗೆ ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡದ ಪ್ಲೇಯಿಂಗ್‌ ಇಲೆವೆನ್‌ನಲ್ಲಿರುವ ಇನ್ನುಳಿದ ಆಟಗಾರರಿಗೆ ವೈಯಕ್ತಿಕ ಪಂದ್ಯದ ಶುಲ್ಕದಲ್ಲಿ ಶೇ. 25 ರಷ್ಟು ದಂಡವನ್ನು ವಿಧಿಸಲಾಗಿದೆ. ಆ ಮೂಲಕ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ಪಡೆದು ಸಂಭ್ರಮದಲ್ಲಿದ್ದ ಕೋಲ್ಕತ್ತಾ ನೈಟ್‌ ರೈಡರ್ಸ್‌ಗೆ ಎರಡನೇ ಬಾರಿ ದಂಡ ವಿಧಿಸಿರುವುದರಿಂದ ಭಾರಿ ಹಿನ್ನಡೆ ತಂದಂತಾಗಿದೆ.

ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಮುಂಬೈ ಇಂಡಿಯನ್ಸ್ ತನ್ನ ಪಾಲಿನ 20 ಓವರ್‌ಗಳಿಗೆ 6 ವಿಕೆಟ್‌ ಕಳೆದುಕೊಂಡು 155 ರನ್‌ ಗಳಿಸಿತ್ತು. ಬಳಿಕ ಗುರಿ ಹಿಂಬಾಲಿಸಿದ್ದ ಕೆಕೆಆಎರ್‌ 15.1 ಓವರ್‌ಗಳಿಗೆ 3 ವಿಕೆಟ್‌ ನಷ್ಟಕ್ಕೆ 159 ರನ್‌ ಗಳಿಸಿ ಭರ್ಜರಿ ಗೆಲುವು ಪಡೆದಿತ್ತು.

ಭಾನುವಾರ(ಸೆ.26) ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧ ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡ ತನ್ನ ಮುಂದಿನ ಪಂದ್ಯವಾಡಲಿದೆ. ಆದರೆ, ಇದೇ ದಿನ ರಾತ್ರಿ 7.30ಕ್ಕೆ ಮುಂಬೈ ಇಂಡಿಯನ್ಸ್ ತಂಡ ವಿರಾಟ್‌ ಕೊಹ್ಲಿ ನಾಯಕತ್ವದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: