ಕರ್ನಾಟಕಪ್ರಮುಖ ಸುದ್ದಿ

ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು,ಸೆ.25-ರಾಜ್ಯದ ಹಲವೆಡೆ ಇನ್ನೂ ಕೆಲ ದಿನಗಳು ಮಟ್ಟಿಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 28ರ ತನಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆ ಹೆಚ್ಚಾಗಿದೆ. ಇದರಿಂದಾಗಿ ಸಾಮಾನ್ಯವಾಗಿ ಸೆಪ್ಟೆಂಬರ್ 17ರಿಂದ ಕಡಿಮೆಯಾಗಬೇಕಿದ್ದ ಮಳೆ ಇನ್ನೂ ಮುಂದುವರೆಯಲಿದೆ ಎಂದು ತಿಳಿದುಬಂದಿದೆ.

ಇಲಾಖೆಯ ಮುನ್ಸೂಚನೆ ಪ್ರಕಾರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ, ಬೆಳಗಾವಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಧಾರವಾಡದಲ್ಲಿ ಮಳೆಯಾಗಲಿದ್ದು, ಇನ್ನುಳಿದಂತೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಕೂಡ ಮಳೆ ಮುಂದುವರೆಯಲಿದೆ. ಸಂಜೆ ವೇಳೆಗೆ ಮಳೆ ಸುರಿಯುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. (ಎಂ.ಎನ್)

Leave a Reply

comments

Related Articles

error: