ಮೈಸೂರು

ವಿದ್ಯಾವಂತರು ರಾಜಕೀಯ ಪ್ರವೇಶಿಸಿದಾಗ ದೇಶದ ಅಭಿವೃದ್ಧಿ ಸಾಧ್ಯ : ಪಿ.ವಾಸು

ವಿದ್ಯಾವಂತರು ರಾಜಕೀಯ ಪ್ರವೇಶಿಸಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಪಿ.ವಾಸು ಅಭಿಪ್ರಾಯಪಟ್ಟರು.

ಬುಧವಾರ ಮೈಸೂರಿನ ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಸಾರ್ವಜನಿಕ ಆಡಳಿಯ ಅಧ್ಯಯನ ವಿಭಾಗದ ವತಿಯಿಂದ ಆಯೋಜಿಸಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ್ ಜಯಂತಿಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬುದ್ಧ, ಬಸವ ಹಾಗೂ ಅಂಬೇಡ್ಕರ್ ಸಮ ಸಮಾಜದ ನಿರ್ಮಾಣಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ. ಈ ಮೂವರು ಮಹನೀಯರ ತತ್ವ ಸಂದೇಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿನಿತ್ಯ ಅವರ ವಿಚಾರಧಾರೆಗಳನ್ನು ಪಾಲಿಸಿದಲ್ಲಿ ಉತ್ತಮ ಭಾರತ ನಿರ್ಮಾಣ ಸಾಧ್ಯ ಎಂದರು.

ವೇಗವಾಗಿ ಬೆಳೆಯುತ್ತಿರುವ ಆಧುನಿಕ ಜಗತ್ತಿನಲ್ಲಿ ನಾವಿದ್ದರೂ ಇನ್ನೂ ಜಾತಿ ಪದ್ಧತಿಯ ಸಂಕೋಲೆಯಿಂದ ಹೊರ ಬಂದಿಲ್ಲ. ನಮ್ಮ ದೇಶದಲ್ಲಿರುವ ಒಳ ಜಾತಿಗಳು, ಭಾಷೆ, ಸಂಸ್ಕೃತಿ, ಆಚಾರ ವಿಚಾರಗಳು ಬೇರೆಲ್ಲೂ ಇಲ್ಲ. ಆದರೂ ಮಹನೀಯರನ್ನು ಕೇವಲ ಒಂದು ವರ್ಗಕ್ಕೆ ಸೀಮಿತಗೊಳಿಸಿ ಸಂಕುಚಿತಗೊಳಿಸಿದ್ದೇವೆ. ಶಿಕ್ಷಣ ನೀಡುವ ವಿಶ್ವವಿದ್ಯಾಲಯಗಳಲ್ಲೇ ಜಾತಿ ವ್ಯವಸ್ಥೆ ಹೆಚ್ಚಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಮೊದಲು ಈ ಪದ್ಧತಿ ಬದಲಾಗಿ ಎಲ್ಲರನ್ನು ಸಮಾನವಾಗಿ ಕಾಣುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಿ.ನರಸೀಪುರ ನಳಂದ ಬುದ್ಧ ವಿಹಾರದ ಬೋಧಿರತ್ನ ಭಂತೇಜಿ, ಚಾಮರಾಜನಗರದ ಭಂತೇ ಬೋಧದತ್ತ ಭಂತೇಜಿ, ಮೈಸೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ದಯಾನಂದ ಮಾನೆ, ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: