ದೇಶಪ್ರಮುಖ ಸುದ್ದಿ

ಉತ್ತರ ಪ್ರದೇಶ ಹಿಂಸಾಚಾರ: ಮಾಜಿ ಸಿಎಂ ಅಖಿಲೇಶ್ ಯಾದವ್ ಧರಣಿ; ಕಾಣೆಯಾಗಿದ್ದ ಪತ್ರಕರ್ತ ಸಾವು, ಮೃತರ ಸಂಖ್ಯೆ 9ಕ್ಕೆ ಏರಿಕೆ

ಲಕ್ನೋ,ಅ.4- ಉತ್ತರ ಪ್ರದೇಶದ ಲಖಿಂಪುರದಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಲು ಬಂದಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಬಂಧಿಸಲಾಗಿದೆ.

ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರನ್ನು ಗೃಹ ಬಂಧನಕ್ಕೆ ಒಳಪಡಿಸಲಾಗಿತ್ತು. ಆದರೆ, ಅಖಿಲೇಶ್ ಯಾದವ್ ಘಟನೆಯನ್ನು ಖಂಡಿಸಿ ರಸ್ತೆಗಿಳಿದು ಹೋರಾಟ ನಡೆಸಿದ ಪರಿಣಾಮ ಇದೀಗ ಅವರನ್ನೂ ಸಹ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ನಿನ್ನೆ ಘಟನೆ ನಡೆದ ಬಳಿಕ ಕಾಣೆಯಾಗಿದ್ದ ಸ್ಥಳೀಯ ಪತ್ರಕರ್ತರೊಬ್ಬರು ಮೃತಪಟ್ಟಿರುವುದು ಇಂದು ದೃಢಪಟ್ಟಿದೆ. ಇದರಿಂದ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಧರಣಿ ವೇಳೆ ಮಾಧ್ಯಮಗಳ ಎದುರು ಮಾತನಾಡಿರುವ ಮಾಜಿ ಸಿಎಂ ಅಖಿಲೇಶ್ ಯಾದವ್, ಘಟನೆಗೆ ಕಾರಣರಾದ ಕೇಂದ್ರ ಸಚಿವ ಅಜಯ್​ ಮಿಶ್ರಾ ಮತ್ತು ಡಿಸಿಎಂ ಕೇಶವ ಪ್ರಸಾದ್​ ಮೌರ್ಯ ಅವರನ್ನು ಕೂಡಲೇ ಆ ಸ್ಥಾನದಿಂದ ಕಿತ್ತೊಗೆಯಬೇಕು. ಅಲ್ಲದೆ, ಘಟನೆಯಲ್ಲಿ ಮೃತಪಟ್ಟ ಅಮಾಯಕ ರೈತರಿಗೆ ಕನಿಷ್ಟ 2 ಕೋಟಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸಚಿವ ಅಜಯ್​ ಮಿಶ್ರಾ ಮತ್ತು ಡಿಸಿಎಂ ಕೇಶವ ಪ್ರಸಾದ್​ ಮೌರ್ಯ ನಿನ್ನೆ ಉತ್ತರ ಪ್ರದೇಶದ ಲಖಿಂ​ಪುರ್​ಗೆ ಆಗಮಿಸಿದ್ದರು. ಆದರೆ, ಅವರ ಈ ಭೇಟಿಯನ್ನು ತಡೆಯುವ ಸಲುವಾಗಿ ರೈತ ಪ್ರತಿಭಟನಾಕಾರರು ಹೆಲಿಪ್ಯಾಡ್​ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಅಜಯ್ ಮಿಶ್ರಾ ಸೇರಿದಂತೆ ಇನ್ನಿತರರು ರಸ್ತೆ ಮಾರ್ಗವಾಗಿಯೇ ಲಖಿಂಪುರಕ್ಕೆ ತೆರಳಿದ್ದರು. ಕಾರ್ಯಕ್ರಮದ ನಂತರ ಹಿಂದಿರುಗುತ್ತಿದ್ದ ವೇಳೆ ರೈತರ ಗುಂಪು ಕಪ್ಪು ಬಾವುಟ ಪ್ರದರ್ಶಿಸಿ ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.

ಈ ವೇಳೆ ಸಚಿವರ ಪುತ್ರ ರೈತರ ಮೇಲೆ ಕಾರ್ ಚಲಾಯಿಸಿದ್ದಾರೆ. ಈ ಘಟನೆಯಲ್ಲಿ ಅನೇಕ ರೈತರು ಮೃತಪಟ್ಟಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಹಿಂಸಾಚಾರದಲ್ಲಿ ಪೊಲೀಸರು ಸಹ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಈ ಘಟನೆ ನಂತರ ಲಖೀಮ್​ಪುರ್​ನಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಕಾರ, ಮೃತಪಟ್ಟ ನಾಲ್ವರು ರೈತರನ್ನು ಸುಖ್ವಿಂದರ್ ಸಿಂಗ್ (20), ಸತ್ನಾಮ್ ಸಿಂಗ್ (20), ಹರಿ ಸಿಂಗ್ (35), ಸುಬ್ಬ ಸಿಂಗ್ (65) ಎಂದು ಗುರುತಿಸಲಾಗಿದೆ. ಈ ಘಟನೆ ನಂತರ ಲಖಿಂ​ಪುರ್​ನಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದ್ದು, ರೈತರು ವಾಹನಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ನಂತರ ಲಖಿಂ​ಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹಿಂಸಾಚಾರ ನಿಲ್ಲುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಹೀಗಾಗಿ ಲಖಿಂ​ಪುರ್​ನಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಸುತ್ತಲಿನ ಗಡಿಗಳನ್ನು ಮುಚ್ಚಲಾಗಿದ್ದು, ಲಖಿಂ​ಪುರ್​ಗೆ ಹೋಗುವ ರಸ್ತೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ತಿಳಿದುಬಂದಿದೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: